Rain Alert: ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ
ಸಂಕ್ರಾಂತಿ ಸಂಭ್ರಮದಲ್ಲಿರುವ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳ ಜನತೆಗೆ ಮಳೆ ದರ್ಶನ ನೀಡಲಿದೆ. ಹಬ್ಬಕ್ಕೆ ಮುನ್ನಾದಿನ ಮೈಸೂರು ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ ಸಾಧಾರಣ ಮಳೆಯಾಗಿದ್ದು ವರ್ಷದ ಮೊದಲ ಮಳೆ ಸುರಿದಿದೆ. ಮೈಸೂರಿನಲ್ಲಿ ಸೋಮವಾರ ಮಧ್ಯಾಹ್ನ ಕೆಲವು ಕಡೆ ಲಘು ಮಳೆಯಾಗಿದ್ದರೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ಸಂಜೆ ಸುಮಾರು ಅರ್ಧ ಗಂಟೆ ಮಳೆ ಸುರಿದಿದೆ.
ಮಂಗಳವಾರ ರಾಜ್ಯದ ಜನ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿದ್ದು ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಚದುರಿದಂತೆ ಮಳೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದ್ದರೆ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹೇಳಿದೆ.
ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾವೇರಿ, ಉಡುಪಿ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ತುಂತುರು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೈಸೂರು, ಹಾಸನ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಾರಿ ಉತ್ತಮ ಮಳೆ ನಿರೀಕ್ಷೆ
ಕಳೆದ ವರ್ಷ ಮುಂಗಾರು ಮತ್ತು ಹಿಂಗಾರು ಮಳೆ ಉತ್ತಮವಾಗಿ ಸುರಿದ ಕಾರಣ ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ಕೃಷಿಗಾಗಲಿ, ಕುಡಿಯಲು ಆಗಲಿ ತೊಂದರೆಯಾಗಲ್ಲ ಎಂದು ನಿರೀಕ್ಷೆ ಮಾಡಲಾಗಿದೆ. ಲಾ ನಿನಾ ಎಫೆಕ್ಟ್ ಪರಿಣಾಮದಿಂದ ಈ ಬಾರಿ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
ಜಲಾಶಯಗಳಲ್ಲಿ ನೀರಿನ ಮಟ್ಟ
ಉತ್ತಮ ಮಳೆಯಾದ ಕಾರಣ ರಾಜ್ಯದ ಪ್ರಮುಖ ಜಲಾಶಯಗಳು ಭರ್ತಿಯಾಗಿದ್ದವು. ಇನ್ನೂ ಹಲವು ಜಲಾಶಯಗಳಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದು ಬೇಸಿಗೆಯಲ್ಲಿ ನೀರಿನ ಕೊರತೆ ಉಂಟಾಗುವ ಸಾಧ್ಯತೆ ತುಂಬಾ ಕಡಿಮೆ ಇದೆ. ಕೃಷ್ಣರಾಜ ಸಾಗರ ಜಲಾಶಯದಲ್ಲಿ ಕೇವಲ 2 ಅಡಿಗಳಷ್ಟು ಮಾತ್ರ ನೀರು ಕಡಿಮೆಯಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರಿನ ಸಂಗ್ರಹವಿದೆ. ತಮಿಳುನಾಡಿಗೆ ಈಗಾಗಲೇ ಹರಿಸಬೇಕಿದ್ದ ನೀರನ್ನು ಹರಿಸಲಾಗಿದ್ದು ಬೇಸಿಗೆಯಲ್ಲಿ ಎರಡೂ ರಾಜ್ಯಗಳ ನಡುವೆ ನೀರಿನ ಸಮಸ್ಯೆ ಇರುವುದಿಲ್ಲ.












Click it and Unblock the Notifications