Rain Alert: ರಾಜ್ಯಕ್ಕೆ ಭಾರಿ ಮಳೆ ಸೂಚನೆ ನೀಡಿದ ಹವಾಮಾನ ಇಲಾಖೆ
ರಾಜ್ಯದಲ್ಲಿ ಇನ್ನೂ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.
ರಾಜ್ಯದಾದ್ಯಂತ ತುಂತುರು ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ.

ಜೂನ್ 6 ರಿಂದ 8 ರವರೆಗೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮತ್ತು ಜೂನ್ 8 ರಿಂದ 12 ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಬೆಂಗಳೂರಿನಲ್ಲಿ ಮಳೆ
ಬುಧವಾರ ಸಂಜೆ ವೇಳೆಗೆ ಬೆಂಗಳೂರಿನ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದ್ದು ರಾತ್ರಿಯೆಲ್ಲಾ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುತ್ತಿದ್ದು, ರಾತ್ರಿ ವೇಳೆಗೆ ಮಳೆ ಮತ್ತಷ್ಟು ಬಿರುಸು ಪಡೆಯುವ ಸಾಧ್ಯತೆ ಇದೆ.
ಜಲಾಶಯಗಳ ಒಳಹರಿವು ಹೆಚ್ಚಳ
ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಜಲಾಶಯಗಳ ಒಳಹರಿವು ಹೆಚ್ಚುತ್ತಿದೆ. ಹಾರಂಗಿ ಜಲಾಶಯದ ಒಳಹರಿವು 260 ಕ್ಯೂಸೆಕ್ಸ್ ಇದ್ದರೆ, ಹೊರ ಹರಿವು 200 ಕ್ಯೂಸೆಕ್ಸ್ ಇದೆ. 8.50 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 3.50 ಟಿಎಂಸಿ ನೀರು ಸಂಗ್ರಹವಾಗಿದೆ.
ಹೇಮಾವತಿ ಜಲಾಶಯದ ಒಳಹರಿವು 1049 ಕ್ಯೂಸೆಕ್ಸ್‌ಗೆ ಹೆಚ್ಚಳವಾಗಿದೆ. 37.10 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 10 ಟಿಎಂಸಿ ನೀರು ಸಂಗ್ರಹವಾಗಿದೆ. ಕೃಷ್ಣರಾಜಸಾಗರ (ಕೆಆರ್ ಎಸ್) ಒಳಹರಿವು 1001 ಕ್ಯೂಸೆಕ್ಸ್ ಇದ್ದು, 49.45 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 12.90 ಟಿಎಂಸಿ ನೀರು ಸಂಗ್ರವಾಗಿದೆ. ಕಬಿನಿ ಜಲಾಶಯದ ಒಳಹರಿವು 695 ಕ್ಯೂಸೆಕ್ಸ್ ಇದೆ. ಜೂನ್ 9ರವರೆಗೆ ಭಾರಿ ಮಳೆ ಮುನ್ಸೂಚನೆ ಇದ್ದು, ನೀರಿನ ಒಳಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.












Click it and Unblock the Notifications