Rain Alert: ಕರಾವಳಿ ಕರ್ನಾಟಕದಲ್ಲಿ ರೆಡ್ ಅಲರ್ಟ್- ಮಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ, ಶಾಲೆ, ಕಾಲೇಜುಗಳಿಗೆ ರಜೆ
ಮಂಗಳೂರು, ಜುಲೈ 25: ಕರಾವಳಿ ಕರ್ನಾಟಕ ( Coastal Karnataka ) ಮತ್ತು ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ( Heavy Rain ) ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಜುಲೈ 25ರ ಮಂಗಳವಾರದಂದು ಜಿಲ್ಲಾಡಳಿತವು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಆಯಾ ಜಿಲ್ಲೆಗಳ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಹಾಸನದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಿಗದಿಯಾಗಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಪರೀಕ್ಷೆಗಳ ಪರಿಷ್ಕೃತ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ವಿವಿ ಆಡಳಿತ ಮಂಡಳಿ ಹೇಳಿದೆ.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಮಾತ್ರ ಶಾಲಾ-ಕಾಲೇಜುಗಳಿಗೆ ರಜೆ ನೀಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಮತ್ತು ಹಾಸನ ತಾಲ್ಲೂಕಿನ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಮಳೆ ಹಾನಿ ಕುರಿತು ತಿಳಿಯಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಜುಲೈ 26 ರಂದು ಸಂಜೆ 4 ಗಂಟೆಗೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವರ್ಚುವಲ್ ಸಭೆಯನ್ನು ಕರೆದಿದ್ದಾರೆ.

ಕೇರಳದಲ್ಲೂ ಭಾರೀ ಮಳೆ
ಭಾರೀ ಮಳೆಯ ಹಿನ್ನೆಲೆಯಲ್ಲಿ ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ವಯನಾಡ್ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.
ಕಾಸರಗೋಡು ಜಿಲ್ಲಾಧಿಕಾರಿ ಕೆ.ಇಂಬಶೇಖರ್ ಅವರು ವೆಳ್ಳರಿಕುಂಡು ಮತ್ತು ಹೊಸದುರ್ಗ ತಾಲೂಕುಗಳಿಗೆ ಮಂಗಳವಾರ ರಜೆ ಘೋಷಿಸಿದ್ದಾರೆ.
ಈ ಜಿಲ್ಲೆಗಳಲ್ಲಿ ಪಿಎಸ್‌ಸಿ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವೆಂದು ಹೇಳಲಾಗಿದೆ. ಜುಲೈ 27 ರ ವರೆಗೆ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಐಎಂಡಿ ಮಂಗಳವಾರ ಕೇರಳದ ಒಂಬತ್ತು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ. ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ಭಾರೀ ಮಳೆಯಾಗುವ ಮನ್ಸೂಚನೆ ನೀಡಲಾಗಿದೆ.
ಈ ನಡುವೆ ಕೋಝಿಕ್ಕೋಡ್ ಮತ್ತು ಪಾಲಕ್ಕಾಡ್ ಜಿಲ್ಲಾಧಿಕಾರಿಗಳು ಅಧಿಕೃತ ಘೋಷಣೆಗೂ ಮುನ್ನವೇ ಹರಿದಾಡುತ್ತಿರುವ ನಕಲಿ ವಾಟ್ಸಾಪ್ ಫಾರ್ವರ್ಡ್‌ಗಳ ವಿರುದ್ಧ ಎಚ್ಚರಿಕೆ ನೀಡಿದ್ದಾರೆ. ತಮ್ಮ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಕಂಡುಬರುವ ಮಾಹಿತಿಯನ್ನು ಮಾತ್ರ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕೇರಳದ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications