Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳ ಕಾಲ ಮಳೆ ಮತ್ತು ಗಾಳಿ ಸಹಿತ ಗುಡುಗು ಸಂಭವಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜೊತೆಗೆ ಗುಡುಗು, ಮಿಂಚು ಮತ್ತು ವೇಗವಾಗಿ ಬೀಸುವ ಗಾಳಿಯ ಅಬ್ಬರ ಇರಲಿದೆ ಎಂದು ಎಚ್ಚರಿಸಿದೆ.
ಉತ್ತರ ಕರ್ನಾಟಕದ ಕಲಬುರಗಿ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಧಾರವಾಡ ಮತ್ತು ಹಾವೇರಿ, ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು, ಕರಾವಳಿ ಭಾಗದ ಉಡುಪಿ ಜಿಲ್ಲೆಯಲ್ಲಿ ಮಳೆಯ ಮುನ್ಸೂಚನೆ ಇದೆ. ಮಳೆಯ ಸಂದರ್ಭದಲ್ಲಿ ಗಾಳಿಯು ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಗುಡುಗು ಮತ್ತು ಮಿಂಚಿನ ಅಬ್ಬರ ಇರಲಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಗುಡುಗು ಮತ್ತು ಮಿಂಚು ಕಾಣಿಸಿಕೊಂಡಾಗ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬೇಡಿ. ಮಿಂಚು ಇರುವಾಗ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಯನ್ನು ಕಡಿಮೆ ಮಾಡಿ. ಬಯಲು ಪ್ರದೇಶದಲ್ಲಿರುವ ರೈತರು ಮತ್ತು ಜಾನುವಾರು ಮೇಯಿಸುವವರು ತಕ್ಷಣವೇ ಸುರಕ್ಷಿತ ಕಟ್ಟಡಗಳ ಒಳಗೆ ಆಶ್ರಯ ಪಡೆಯುವುದು ಉತ್ತಮ ಎಂದು ಸಲಹೆ ನೀಡಿದೆ.
ನಾಳೆ ಮಳೆ ಎಲ್ಲೆಲ್ಲಿ?
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರ ಭಾಗಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಹಗುರ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್ 24ರಂದು ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನಾಳೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗುಡುಗು ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣ ಹವಾಮಾನವಿರಲಿದ್ದು, ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆಯಿದೆ.
ಕರ್ನಾಟಕದ ಹವಾಮಾನದಲ್ಲಿ ಮುಂದಿನ ಐದು ದಿನಗಳ ಕಾಲ ಯಾವುದೇ ದೊಡ್ಡ ಮಟ್ಟದ ಬದಲಾವಣೆ ಇರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶವು ಸದ್ಯ ಇರುವ ಮಟ್ಟದಲ್ಲೇ ಮುಂದುವರಿಯುವ ಸಾಧ್ಯತೆಯಿದೆ. ಮಾರ್ಚ್ ಕೊನೆಯ ವಾರವಾಗಿರುವುದರಿಂದ ನಗರದಲ್ಲಿ ಸೆಕೆಯ ಅನುಭವವಾಗಲಿದ್ದರೂ, ಮೋಡ ಕವಿದ ವಾತಾವರಣದಿಂದಾಗಿ ಸಂಜೆಯ ಅವಧಿಯಲ್ಲಿ ಸ್ವಲ್ಪ ತಣ್ಣನೆಯ ಹವಾಮಾನವಿರಲಿದೆ.












Click it and Unblock the Notifications