Karnataka Rain: ಉತ್ತರ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧಾರಣ: ಕರಾವಳಿ, ಮಲೆನಾಡಿಗೆ ವರುಣನ ಆಶೀರ್ವಾದ
ರಾಜ್ಯದಲ್ಲಿ ಮಳೆಗಾಗಿ ಕಾಯುವುದು ಮುಂದುವರೆಯಲಿದೆ. ದಕ್ಷಿಣ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ನೀಡಿರುವ ಮಾಹಿತಿ ಪ್ರಕಾರ ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆ ಬೀಳಲಿದೆ.

ಕಳೆದ 24 ಗಂಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರ್ ಪ್ರದೇಶದಲ್ಲಿ 245.5 ಮಿಮೀ ಮಳೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಬುಧವಾರ, ಗುರುವಾರ ಕೂಡ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರೆಯಲಿದೆ.
ದಕ್ಷಿಣ, ಉತ್ತರ ಒಳನಾಡಿಗೆ ಸಾಧಾರಣ ಮಳೆ
ಇನ್ನು ರಾಜ್ಯದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಕಡಿಮೆಯಾಗಿದ್ದು ಆತಂಕ ಹೆಚ್ಚಿಸಿದೆ. ಕೆಲವು ಪ್ರದೇಶಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗುತ್ತಿದ್ದು, ಉಳಿದ ಕಡೆ ಮೋಡ ಮಾತ್ರ ಆಗುತ್ತಿದ್ದು, ಮಳೆಗಾಗಿ ಜನ ಕಾಯುತ್ತಾ ಕೂರುವಂತಾಗಿದೆ.
ತಡವಾಗಿಯಾದರೂ ಮುಂಗಾರು ಚುರುಕಾಗಲಿದೆ ಎಂದು ಕಾಯುತ್ತಿದ್ದ ರೈತರು ಕೂಡ ನಿರಾಸೆಗೊಂಡಿದ್ದಾರೆ. ಮಳೆ ಕೈಕೊಟ್ಟ ಕಾರಣ ಬಿತ್ತನೆ ಕೆಲಸ ಕೂಡ ನಿಂತಿದ್ದು, ಮುಂದೇನು ಎನ್ನುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಕೋಲಾರ, ಬೆಂಗಳೂರು, ಮೈಸೂರು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳ ಹಲವು ಕಡೆಗಳಲ್ಲಿ ಕಳೆದ ವಾರ ಉತ್ತಮ ಮಳೆಯಾಗಿತ್ತು. ಆದರೆ, ಅದು ಕೇವಲ ಒಂದೆರಡು ದಿನಕ್ಕೆ ಮಾತ್ರ ಸೀಮಿತವಾದೆ. ಇಂದು ಮತ್ತು ನಾಳೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮುಂಗಾರು ಕೈಕೊಟ್ಟಿದ್ದು, ಕುಡಿಯುವ ನೀರಿಗೂ ತೊಂದರೆ ಉಂಟಾಗುವಂತಾಗಿದೆ.
ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ
ರಾಜಧಾನಿ ಬೆಂಗಳೂರಿನಲ್ಲಿ ಕೂಡ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮಳೆ ಕೈಕೊಟ್ಟ ಕಾರಣ ನಗರದ ಹಲವು ಭಾಗಗಳಲ್ಲಿ ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣದ ತೀವ್ರ ಕಡಿಮೆಯಾಗಿದ್ದು, ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾದ ಬಗ್ಗೆ ವರದಿಯಾಗಿದೆ.
ಜೂನ್ ತಿಂಗಳಿನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಸರಾಸರಿ 61 ರಷ್ಟು ಮಳೆ ಕಡಿಮೆಯಾಗಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ದೆಹಲಿಯಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆದರೆ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಮಳೆ ಕಡಿಮೆಯಾಗಿದೆ. ಅದರಲ್ಲೂ ಕರ್ನಾಟಕದಲ್ಲಿ ಮುಂಗಾರು ಕೈಕೊಟ್ಟಿದ್ದು, ಬಹುತೇಕ ಜಲಾಶಯಗಳು ಬರಿದಾಗಿವೆ.












Click it and Unblock the Notifications