Ram Mandir; ಜ. 22ರಂದು ರಜೆ ಘೋಷಿಸಲು ಸಿಎಂಗೆ ಅಶೋಕ ಪತ್ರ
ಬೆಂಗಳೂರು, ಜನವರಿ 21: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರ ಸೋಮವಾರ ಶ್ರೀ ರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮ ವೀಕ್ಷಿಸಲು ಅನುಕೂಲವಾಗುವಂತೆ ವಿವಿಧ ರಾಜ್ಯ ಸರ್ಕಾರಗಳು ರಜೆ ಘೋಷಣೆ ಮಾಡಿವೆ.
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜನವರಿ 22ರ ಸೋಮವಾರ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು ಎಂದು ರಾಜ್ಯದ ಪ್ರತಿಪಕ್ಷ ಬಿಜೆಪಿ ಒತ್ತಾಯ ಮಾಡುತ್ತಿದೆ. ಆದರೆ ಇದುವರೆಗೂ ರಜೆ ನೀಡುವ ಕುರಿತು ಸರ್ಕಾರ ಯಾವುದೇ ತೀರ್ಮಾನ ಪ್ರಕಟಿಸಿಲ್ಲ.

ಆರ್. ಅಶೋಕ ಪತ್ರ: ಕರ್ನಾಟಕದ ಪ್ರತಿಪಕ್ಷ ನಾಯಕ ಆರ್. ಅಶೋಕ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿದ್ದಾರೆ. ಜನವರಿ 22ರಂದು ಅಯೋಧ್ಯೆಯಲ್ಲಿ ನೂತನ ರಾಮಮಂದಿರದ ಉದ್ಘಾಟನೆ ಹಾಗೂ ಬಾಲರಾಮನ ಪ್ರಾಣ ಪ್ರತಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಬ್ಬದ ವಾತಾವರಣವಿದ್ದು, ರಾಜ್ಯದ ಜನತೆಯ ಈ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಈ ಪತ್ರ ಜನವರಿ 22ರಂದು ಸರ್ಕಾರಿ ರಜೆ ಘೋಷಿಸುವ ಕುರಿತು ಎಂಬ ವಿಚಾರವನ್ನು ಒಳಗೊಂಡಿದೆ. 500 ವರ್ಷಗಳ ಹೋರಾಟ, ತ್ಯಾಗದ ಫಲವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣವಾಗಿ ಜನವರಿ 22ರಂದು ವಿಗ್ರಹ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದೆ ಎಂದು ಆರ್. ಅಶೋಕ ಪತ್ರದಲ್ಲಿ ವಿವರಣೆ ನೀಡಿದ್ದಾರೆ.
ಈ ದಿನದಂದು ಪ್ರತಿ ಮನೆಗಳಲ್ಲಿ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ದೀಪ ಬೆಳಗುವುದು, ಭಜನೆ, ಶ್ರೀರಾಮನ ಆರಾಧನೆ ನಡೆಯುತ್ತಿದೆ. ಇಡೀ ರಾಜ್ಯದಲ್ಲಿ ಸಂಭ್ರಮ, ಸಡಗರದ ಆಚರಣೆ ನಡೆಯಲಿದೆ. ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಕೂಡ ವಿಗ್ರಹ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗವಹಿಸಿದ್ದು, ಈಗಾಗಲೇ ಕೇಂದ್ರ ಸರ್ಕಾರದ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ನೂತನ ರಾಮಮಂದಿರದ ಉದ್ಘಾಟನೆ ಹಾಗೂ ಬಾಲರಾಮನ ಪ್ರಾಣ ಪ್ರತಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಬ್ಬದ ವಾತಾವರಣವಿದ್ದು, ರಾಜ್ಯದ ಜನತೆಯ ಈ ಸಂಭ್ರಮಾಚರಣೆಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕೆಂದು ಮುಖ್ಯಮಂತ್ರಿ @siddaramaiah ಅವರಿಗೆ ಪತ್ರ ಮುಖೇನ ಮನವಿ… pic.twitter.com/2deOF2nPKT
— R. Ashoka (ಆರ್. ಅಶೋಕ) (@RAshokaBJP) January 21, 2024
ರಾಜ್ಯದಲ್ಲೂ ದೊಡ್ಡ ಮಟ್ಟದ ಆಚರಣೆ ನಡೆಯುತ್ತಿದ್ದು, ಆ ದಿನ ಕೆಲಸ ಮಾಡುವುದರಿಂದ ಆಚರಣೆಗೆ ತೊಡಕು ಉಂಟಾಗಬಹುದು. ಆದ್ದರಿಂದ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳು, ಸಾರ್ವಜನಿಕ ಉದ್ದಿಮೆ ಸೇರಿದಂತೆ ಎಲ್ಲ ಕಡೆಗಳಲ್ಲಿ ಅನುಕೂಲವಾಗುವಂತೆ ಜನವರಿ 22ರಂದು ಒಂದು ದಿನದ ಮಟ್ಟಿಗೆ ಸರ್ಕಾರಿ ರಜೆಯನ್ನು ಘೋಷಿಸಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಅಶೋಕ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕಛೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಉತ್ತರ ಪ್ರದೇಶ ಸರ್ಕಾರ ಜನವರಿ 22ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಿದೆ. ಕಾಂಗ್ರೆಸ್ ಆಡಳಿತ ಇರುವ ಹಿಮಾಚಲ ಪ್ರದೇಶ ಸರ್ಕಾರ ಸಹ ಸೋಮವಾರ ರಜೆ ನೀಡಿ ಆದೇಶ ಹೊರಡಿಸಿದೆ.
ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಶನಿವಾರ ಪತ್ರಿಕಾಗೋಷ್ಠಿ ನಡೆಸಿದ್ದರು. ಜನವರಿ 22ರಂದು ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯ ಕಾರ್ಯಕ್ರಮ ನೆರವೇರಲಿದ್ದು ನಾಡಿನ ಕೋಟ್ಯಂತರ ರಾಮಭಕ್ತರು ಸಂಭ್ರಮಿಸಿ ಭಕ್ತಿ ಕಾರ್ಯಗಳಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಿದ್ದರು.
ಆದ್ದರಿಂದ ಆ ಪವಿತ್ರ ದಿನ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು, ಅಶಾಂತಿ ಹಾಗೂ ಅಡ್ಡಿ ಆತಂಕಗಳು ನಡೆಯದಂತೆ ಎಚ್ಚರ ವಹಿಸಬೇಕು ಹಾಗೂ ರಾಮಭಕ್ತರ ಇಚ್ಚೆಯಂತೆ ಸರ್ಕಾರಿ ರಜೆ ಘೋಷಿಸಬೇಕೆಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು. ಆದರೆ ರಾಜ್ಯ ಸರ್ಕಾರ ಇದುವರೆಗೂ ರಜೆ ನೀಡುವ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ.
ಸಿದ್ದರಾಮಯ್ಯ ಪೋಸ್ಟ್; ಶನಿವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು. ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು' ಎಂದು ಹೇಳಿದ್ದರು.
'ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ. ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ' ಎಂದು ತಿಳಿಸಿದ್ದರು.
'ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ. ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ. ದೇವರು - ಧರ್ಮ - ಪೂಜೆ - ಆರಾಧನೆಗಳೆಲ್ಲ ವೈಯಕ್ತಿಕವಾದುದು. ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು - ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆ' ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು.












Click it and Unblock the Notifications