Ramalinga Reddy Profile: ಸಿದ್ದು ಕ್ಯಾಬಿನೆಟ್‌ನ ಪ್ರಭಾವಿ ಸಚಿವ ರಾಮಲಿಂಗಾ ರೆಡ್ಡಿ ನಡೆದು ಬಂದ ಹಾದಿ
ಬೆಂಗಳೂರು, ಮೇ 20: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯ ಸಾಧಿಸಿದೆ. ಇಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ, ಡಿಕೆ ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಎಂಟು ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅದರಲ್ಲಿ ಬಿಟಿಎಂ ಲೇಔಟ್ ಕ್ಷೇತ್ರದ ಶಾಸಕರಾಗಿರುವ ರಾಮಲಿಂಗಾ ರೆಡ್ಡಿ ಸಹ ಒಬ್ಬರು. ಅವರು ನಡೆದು ಬಂದ ಹಾದಿ ಬಗ್ಗೆ ತಿಳಿಯಿರಿ
ಬೆಂಗಳೂರಿನ ಹಿರಿಯ ನಾಯಕರಲ್ಲಿ ಒಬ್ಬರಾದ ರಾಮಲಿಂಗಾ ರೆಡ್ಡಿ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಮಲಿಂಗಾ ರೆಡ್ಡಿ ಜಯನಗರದಿಂದ ನಾಲ್ಕು ಬಾರಿ ಮತ್ತು ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಎಂಟು ಬಾರಿ ಶಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

69 ವರ್ಷ ವಯಸ್ಸಿನ ಅವರು ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ 2013 ರಿಂದ 2018 ರ ವರೆಗೆ ಗೃಹ ಸಚಿವಾಲಯ ಸೇರಿದಂತೆ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. ರೆಡ್ಡಿ ಅವರು ಬೆಂಗಳೂರು ಪ್ರದೇಶದಲ್ಲಿ ಪ್ರಭಾವಿ ನಾಯಕರಾಗಿದ್ದಾರೆ.
ಮೃದು ಸ್ವಭಾವದ ನಾಯಕರಾಗಿರುವ ರಾಮಲಿಂಗಾ ರೆಡ್ಡಿ ಅವರು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷರೂ ಆಗಿದ್ದಾರೆ. 1989ರಲ್ಲಿ ಜಯನಗರ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆ ಗೆಲುವು ಸಾಧಿಸಿದ್ದು, ಅಂದಿನಿಂದ ಸೋಲಿನ ರುಚಿ ಕಂಡಿಲ್ಲ. ಈ ಮೂಲಕ ಸತತ ಎಂಟು ಬಾರಿ ಗೆದ್ದಿದ್ದಾರೆ.
ರಾಮಲಿಂಗಾ ರೆಡ್ಡಿ ಅವರು ಮೊದಲು 1992 ರಲ್ಲಿ ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಸಚಿವರಾದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಆಪ್ತರಾಗಿದ್ದಾರೆ. ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತೀವ್ರ ಪೈಪೋಟಿಯ ನಡುವೆ ಸಂಪುಟದಲ್ಲಿ ರಾಮಲಿಂಗಾ ರೆಡ್ಡಿ ಅವರು ಸ್ಥಾನ ಪಡೆದರು ಎಂದು ಹೇಳಲಾಗುತ್ತದೆ. 2018ರಲ್ಲಿ ಶಾಸಕಿಯಾಗಿದ್ದ ಅವರ ಪುತ್ರಿ ಸೌಮ್ಯಾ ರೆಡ್ಡಿ ಜಯನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ವಿರುದ್ಧ ಕೇವಲ 16 ಮತಗಳಿಂದ ಪರಾಭವಗೊಂಡಿದ್ದಾರೆ.
ರಾಮಲಿಂಗಾ ರೆಡ್ಡಿ ಸಚಿವರಾಗಿ ವಹಿಸಿಕೊಂಡ ಖಾತೆಗಳು
ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಬೆಂಗಳೂರು ನಗರ ಅಭಿವೃದ್ಧಿ
ಎನ್. ಧರ್ಮ ಸಿಂಗ್ ಅವರ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವಾಲಯ
ಸಿದ್ದರಾಮಯ್ಯನವರ ಸರ್ಕಾರದಲ್ಲಿ ಸಾರಿಗೆ ಮತ್ತು ಗೃಹ ಇಲಾಖೆ












Click it and Unblock the Notifications