ಶಾಲೆ ತೆರೆಯವ ವಿಚಾರ; ಜೂ.10ರಿಂದ ಪೋಷಕರ ಸಭೆ
ಬೆಂಗಳೂರು, ಜೂನ್ 02 : ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆಯಾದ ಬಳಿಕ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಜುಲೈನಿಂದ ಅವುಗಳನ್ನು ಪುನಃ ತೆರೆಯಲು ಕೇಂದ್ರ ಗೃಹ ಇಲಾಖೆ ಒಪ್ಪಿಗೆ ನೀಡಿದೆ.
ಶಾಲೆಗಳನ್ನು ತೆರೆಯುವ ಮೊದಲು ಪೋಷಕರ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಣೆ ಮಾಡಬೇಕು ಎಂದು ಕೇಂದ್ರ ಗೃಹ ಇಲಾಖೆ ಹೇಳಿದೆ. ಕರ್ನಾಟಕದ ಶಿಕ್ಷಣ ಇಲಾಖೆ ಜೂನ್ 10 ರಿಂದ 12ರ ತನಕ ಪೋಷಕರ ಜೊತೆ ಸಭೆ ನಡೆಸಲಿದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. "ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪುನಃ ಆರಂಭಿಸುವ ಕುರಿತು ಪೋಷಕರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.

* ಶಾಲೆಗಳನ್ನು ಪುನರಾರಂಭ ಮಾಡಬಹುದಾದ ದಿನಾಂಕ
* ಶಾಲೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಧಾನ
* ಶಾಲೆಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ರಾಜ್ಯದ ಎಲ್ಲಾ ಪೋಷಕರು ಮತ್ತು ಎಸ್‌ಡಿಎಂಸಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು ತಮ್ಮ ಅಭಿಪ್ರಾಯವನ್ನು ತಿಳಿಸಬೇಕು.
ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಕೂಡಲೇ ಜೂನ್ 10 ರಿಂ 12ರ ನಡುವಿನ ಅವಧಿಯಲ್ಲಿ ಪೋಷಕರು ಮತ್ತು ಎಸ್‌ಡಿಎಂಸಿ ಸದಸ್ಯರನ್ನು ಸಭೆಗೆ ಆಹ್ವಾನಿಸಿ ಅವರ ಅಭಿಪ್ರಾಯ ಪಡೆಯಲು ಸೂಚನೆ ನೀಡಲಾಗಿದೆ.
ಕೇಂದ್ರ ಗೃಹ ಇಲಾಖೆ ಮಾರ್ಗಸೂಚಿ ಪ್ರಕಟಿಸುವಾಗ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಶಾಲೆಗಳು, ಕಾಲೇಜುಗಳು ಶೈಕ್ಷಣಿಕ/ತರಬೇತಿ/ತರಬೇತಿ ಸಂಸ್ಥೆಗಳು ಇತ್ಯಾದಿಗಳನ್ನು ತೆರೆಯಲಾಗುತ್ತದೆ ಎಂದು ಹೇಳಿತ್ತು.












Click it and Unblock the Notifications