ಯತೀಂದ್ರ ಸಿದ್ದರಾಮಯ್ಯ, ಸಚಿವ ಜಮೀರ್‌ಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು, ಜುಲೈ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಬೇರೆ-ಬೇರೆ ಪ್ರಕರದಲ್ಲಿ ನ್ಯಾಯಾಲಯ ರಿಲೀಫ್ ನೀಡಿದೆ. ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಮತ್ತೊಂದೆಡೆ ಕೋರ್ಟ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.
ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಭಾಗಿಯಾಗಿ ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ತಮ್ಮ ವಿರುದ್ಧದ ಎಫ್‌ಐಆರ್ ಹಾಗೂ ಕನಕಪುರದ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಯತೀಂದ್ರ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಈ ಆದೇಶ ಮಾಡಿದೆ.
ಇದೇ ಪ್ರಕರಣ ಸಂಬಂಧ ಕಾಂಗ್ರೆಸ್‌ನ ಇತರೆ ಮುಖಂಡರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಮತ್ತು ಅದಕ್ಕೆ ಸಂಬಂಧಿಸಿದ ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸಿ ಹೈಕೋರ್ಟ್ ಈ ಹಿಂದೆ ಆದೇಶಿಸಿತ್ತು. ಅದನ್ನು ಪರಿಗಣಿಸಿದ ನ್ಯಾಯಪೀಠ, ಯತೀಂದ್ರ ಅವರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಿದೆ.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕೆಪಿಸಿಸಿ 2022ರ ಜನವರಿ 9ರಿಂದ 10 ದಿನ ರಾಮನಗರ ಜಿಲ್ಲೆಯ ಮೇಕದಾಟು ಪ್ರದೇಶದಿಂದ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜುವರೆಗೆ ಪಾದಯಾತ್ರೆ ಹಮ್ಮಿಕೊಂಡಿತ್ತು.
ಪಾದಯಾತ್ರೆಯಲ್ಲಿ ಭಾಗಿಯಾಗಿ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ-2020ರ ಅಡಿಯಲ್ಲಿ ಸಾತನೂರು ಪೊಲೀಸ್ ಠಾಣೆಯಲ್ಲಿ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ 30 ನಾಯಕರ ವಿರುದ್ಧ 2022ರ ಜನವರಿ 9ರಂದು ಎಫ್‌ಐಆರ್ ದಾಖಲಾಗಿತ್ತು. ಪ್ರಕರಣವು ಕನಕಪುರ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿತ್ತು. ಪ್ರಕರಣದಲ್ಲಿ ಯತೀಂದ್ರ ಅವರು 20ನೇ ಆರೋಪಿಯಾಗಿದ್ದರು.
ಜಮೀರ್‌ಗೆ ತಾತ್ಕಾಲಿಕ ರಿಲೀಫ್ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಸಂಬಂಧ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿದೆ.
ನನ್ನ ವಿರುದ್ಧ ದಾಖಲಿಸಲಾಗಿರುವ ದೋಷಾರೋಪ ಪಟ್ಟಿ ರದ್ದುಪಡಿಸಬೇಕು ಎಂದು ಕೋರಿ ಸಚಿವ ಜಮೀರ್ ಅಹ್ಮದ್ ಖಾನ್ ಸಲ್ಲಿಸಿರುವ ಅರ್ಜಿಯನ್ನು, ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರು ಶುಕ್ರವಾರ ವಿಚಾರಣೆ ನಡೆಸಿದರು.
ಅರ್ಜಿದಾರರ ಪರ ಮನವಿ ಆಲಿಸಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವಾದ 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ದೋಷಾರೋಪ ಪಟ್ಟಿಯ ಮುಂದಿನ ವಿಚಾರಣಾ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿತು.
ಪ್ರಕರಣದ ಹಿನ್ನೆಲೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನವಲಗುಂದದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮಕ್ಕೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಜಮೀರ್ ಅಹ್ಮದ್ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜಾರಿಯಲ್ಲಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ 2018ರ ಮೇ 5ರಂದು ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದರು.
ಇದರನ್ವಯ ಜಮೀರ್ ಅಹ್ಮದ್ ವಿರುದ್ಧ ತನಿಖೆ ನಡೆಸಿದ್ದ ಪೊಲೀಸರು, ಭಾರತೀಯ ದಂಡ ಸಂಹಿತೆ-1860ರ ಕಲಂ 171(ಎಚ್) ಮತ್ತು 34ನೇ ಅಡಿಯಲ್ಲಿ 42ನೇ ಎಸಿಎಂಎಂನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.












Click it and Unblock the Notifications