ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಪ್ರಶ್ನಿಸಿದ್ದ ಅರ್ಜಿ ವಜಾ
ಬೆಂಗಳೂರು, ಆಗಸ್ಟ್ 07: ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ಬಗ್ಗೆ ಕರ್ನಾಟಕದಲ್ಲಿ ಚರ್ಚೆಗಳು ನಡೆಯುತ್ತಿದೆ. ರಾಜ್ಯ ಸರ್ಕಾರ ಈ ಕುರಿತ ತೀರ್ಮಾನಕ್ಕೆ ತಾತ್ಕಾಲಿಕ ತಡೆ ನೀಡಿದೆ. ಈ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಕರ್ನಾಟಕ ಹೈಕೋರ್ಟ್‌ಗೆ ಸಹ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.
ಕರ್ನಾಟಕದಲ್ಲಿ ಕೈಗಾರಿಕೆಗಳು-ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ (ಕನ್ನಡಿಗರಿಗೆ) ಉದ್ಯೋಗ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಪ್ರಶ್ನಿಸಿ ಬಿಲೇಕಹಳ್ಳಿಯ ಸೋಮೇಶ್ವರ ಲೇಔಟ್‌ನ ಲೆಕ್ಕ ಪರಿಶೋಧಕಿ ಆರ್. ಅರ್ಮಿತಲಕ್ಷ್ಮೀ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.

ಮಂಗಳವಾರ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿತು. ರಾಜ್ಯದಲ್ಲಿ ಈ ಕುರಿತು ಇನ್ನೂ ಕಾಯ್ದೆ ಆಗಿಲ್ಲ, ಮಸೂದೆ ಮಾತ್ರ ಇದೆ. ಮಸೂದೆಯನ್ನು ರದ್ದುಗೊಳಿಸಲು ಆಗದು ಎಂದು ಹೇಳಿದ ಹೈಕೋರ್ಟ್, ಪಿಐಎಲ್ ವಜಾಗೊಳಿಸಿ ಆದೇಶಿಸಿತು.
ಅರ್ಜಿದಾರರ ವಾದ: ಅರ್ಜಿಯ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಈ ಮಾದರಿಯ ಕಾನೂನನ್ನು ಹರ್ಯಾಣ ಸರ್ಕಾರ ರಚನೆ ಮಾಡಿದೆ, ಪಂಜಾಬ್-ಹರ್ಯಾಣ ಹೈಕೋರ್ಟ್ ಈ ಕಾನೂನು ರದ್ದುಪಡಿಸಿತ್ತು ಎಂದರು.
ನ್ಯಾಯಪೀಠ ಅರ್ಜಿಯನ್ನು ಪರಿಶೀಲನೆ ಮಾಡಿ ಹರ್ಯಾಣ ಸರ್ಕಾರ ರಾಜ್ಯದ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಮೀಸಲಾತಿ ಕಲ್ಪಿಸಿ ಕಾಯ್ದೆಯನ್ನು ರೂಪಿಸಿತ್ತು. ಕರ್ನಾಟಕದಲ್ಲಿ ವಿಧೇಯಕ ಕಾಯ್ದೆ ರೂಪದಲ್ಲಿ ಜಾರಿಗೆ ಬಂದಿಲ್ಲ. ಸದ್ಯ ಕರಡು ಸ್ವರೂಪದಲ್ಲಿದ್ದು, ಕಾನೂನು ಮಾನ್ಯತೆ ಪಡೆದಿಲ್ಲ ಎಂದು ಹೇಳಿತು. ಅರ್ಜಿಯನ್ನು ವಜಾಗೊಳಿಸಿತು.
ಜುಲೈ 17ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, 'ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ' ಎಂದು ಹೇಳಿದ್ದರು.
ಬಳಿಕ ರಾಜ್ಯದಲ್ಲಿ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ಕುರಿತು ಪರ-ವಿರೋಧ ಚರ್ಚೆಗಳು ಆರಂಭವಾಗಿತ್ತು. ಹಲವು ಕಂಪನಿಗಳು, ಗಣ್ಯರು ಈ ಪ್ರಸ್ತಾಪಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದರು.
ಈ ಚರ್ಚೆಯ ಬಳಿಕ ಸರ್ಕಾರ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ಕುರಿತು ಮತ್ತೊಮ್ಮೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿ, ಸಚಿವ ಸಂಪುಟದ ಅನುಮೋದನೆ ತಾತ್ಕಾಲಿಕ ತಡೆಯನ್ನು ನೀಡಿತ್ತು. ಆದ್ದರಿಂದ ಈ ಕುರಿತು ಯಾವುದೇ ಮಸೂದೆ ವಿಧಾನಸಭೆಯಲ್ಲಿ ಮಂಡನೆಯಾಗಿಲ್ಲ.
ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಪಿಐಎಲ್‌ನಲ್ಲಿ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ಉದ್ಯೋಗಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸುವ ಮಸೂದೆ-2024ರ ಕರಡು ನಿಯಮಗಳನ್ನು ಕಾರ್ಮಿಕ ಇಲಾಖೆಯು 2024ರ ಜು.11ರಂದು ಹೊರಡಿಸಿದೆ. ಈ ನಿಯಮಗಳಿಗೆ ಜು.16ರಂದು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಲಾಗಿತ್ತು.
ಇದೀಗ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವುದು ಬಾಕಿಯಿದೆ. ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆಯು ಸಂವಿಧಾದ 19 (1) (ಡಿ), 19 1 (ಇ), ಜಿ ಮತ್ತು 14ನೇ ವಿಧಿಗಳಿಗೆ ವಿರುದ್ಧವಾಗಿದೆ. ಮಸೂದೆ ಅನುಷ್ಠಾನಗೊಂಡಲ್ಲಿ ಇದು ಸಹಜ ನ್ಯಾಯತತ್ವಗಳ ಉಲ್ಲಂಘನೆಯಾಗುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.
ಕಾಯ್ದೆ ಜಾರಿಗೊಳಿಸುವ ಸಾಮರ್ಥ್ಯವನ್ನು ರಾಜ್ಯದ ಶಾಸಕಾಂಗ ಹೊಂದಿಲ್ಲ. ಒಂದೊಮ್ಮೆ ಈ ಮಸೂದೆ ಜಾರಿಗೆ ಬಂದಲ್ಲಿ ರಾಜ್ಯದ ಕೈಗಾರಿಕಾ ವಲಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಹಲವು ಸಾಂವಿಧಾನಿಕ ಪ್ರಶ್ನೆಗಳಿಗೆ ಎಡೆಮಾಡಿಕೊಡುತ್ತದೆ. ಕೆಟ್ಟ ಪರಂಪರೆಗೂ ನಾಂದಿ ಹಾಡಿದಂತಾಗುತ್ತದೆ ಎಂದು ಅರ್ಜಿಯಲ್ಲಿ ವಿವರಿಸಲಾಗಿತ್ತು.












Click it and Unblock the Notifications