ನಿವೇಶನಕ್ಕಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್! ಪ್ರತಿ ಜಿಲ್ಲೆಯಲ್ಲಿ 50 ಸಾವಿರ ಸೈಟ್ ಹಂಚಿಕೆಗೆ ಸರ್ಕಾರ ಸಜ್ಜು!
ಬೆಂಗಳೂರು: ನಿವೇಶನಕ್ಕಾಗಿ ಕಾಯುತ್ತಿರುವ ರಾಜ್ಯದ ಜನರಿಗೆ ಸರ್ಕಾರ ಸಿಹಿಸುದ್ದಿ ನೀಡಲು ಮುಂದಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡುವ ಉದ್ದೇಶದಿಂದ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ಗುರುತಿಸಿ, ನಿವೇಶನಗಳಾಗಿ ಅಭಿವೃದ್ಧಿಪಡಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಜಿಲ್ಲಾವಾರು ಲಭ್ಯವಿರುವ ಸರ್ಕಾರಿ ಜಮೀನುಗಳ ವಿವರವನ್ನು ಸಂಗ್ರಹಿಸಿ, ನಿವೇಶನ ರಚನೆಗೆ ಸೂಕ್ತವಾಗಿರುವ ಜಾಗಗಳನ್ನು ಗುರುತಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ಕಾಯುತ್ತಿರುವ ಅರ್ಹ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಈ ಯೋಜನೆಯನ್ನು ರೂಪಿಸಲಾಗುತ್ತಿದೆ. ಸರ್ಕಾರಿ ಜಮೀನು ಲಭ್ಯವಿರುವ ಪ್ರದೇಶಗಳಲ್ಲಿ ಭೂಮಿಯನ್ನು ಗುರುತಿಸಿ, ಅಗತ್ಯ ಮೂಲಸೌಕರ್ಯ ಕಲ್ಪಿಸಿ ನಿವೇಶನಗಳನ್ನಾಗಿ ಪರಿವರ್ತಿಸುವ ಉದ್ದೇಶ ಹೊಂದಲಾಗಿದೆ.
ಈ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಿರುವ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು, ನಮ್ಮ ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ವಸತಿ ರಹಿತರಿಗೆ ನಿವೇಶನಗಳನ್ನು ನೀಡುತ್ತೇವೆಂದು ಘೋಷಿಸಿದ್ದೆವು. ಅದರಂತೆ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ 30x40 ಅಡಿ ಅಳತೆಯ ಹಾಗೂ ನಗರ ಪ್ರದೇಶಗಳಲ್ಲಿ 20x30 ಅಡಿ ಅಳತೆಯ ನಿವೇಶನಗಳನ್ನು ಸಿದ್ಧಪಡಿಸಿ ಅರ್ಹರಿಗೆ ಒದಗಿಸಲಾಗುವುದು.
ಈ ನಿಟ್ಟಿನಲ್ಲಿ ಲಭ್ಯವಿರುವ ಹಾಗೂ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ತಕ್ಷಣವೇ ಗುರುತಿಸಿ, ನಿವೇಶನಗಳ ರಚನೆಗೆ ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಯಾವುದೇ ವಿಳಂಬಕ್ಕೆ ಆಸ್ಪದೆ ನೀಡದೆ ತುರ್ತಾಗಿ ಕೈಗೊಳ್ಳುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
ನಾವು ಕೊಟ್ಟ ಮಾತಿಗೆ ಬದ್ಧರಾಗಿ, ಪ್ರಣಾಳಿಕೆಯ ಘೋಷಣೆಗಳನ್ನು ಕಾರ್ಯರೂಪಕ್ಕೆ ತಂದು ನುಡಿದಂತೆ ನಡೆಯುತ್ತಿದ್ದೇವೆ. ಸರ್ವರಿಗೂ ಸ್ವಂತ ಸೂರಿನ ಭಾಗ್ಯವನ್ನು ನೀಡಿ, ಎಲ್ಲರೂ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ನಮ್ಮ ಆಶಯ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ತಿಳಿಸಿದ್ದಾರೆ.
ಕೂಡ್ಲಿಗಿ ತಾಲೂಕನ್ನು ಬರ ಪೀಡಿತ ತಾಲೂಕೆಂದು ಘೋಷಿಸಲು ಕ್ರಮ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಮಳೆಯ ಕೊರತೆ ಉಂಟಾಗಿದ್ದು, ಸದರಿ ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಇಂದು ವಿಧಾನಸಭೆಯಲ್ಲಿ ಪ್ರಶ್ನೊತ್ತರ ವೇಳೆಯಲ್ಲಿ 'ಕೂಡ್ಲಿಗಿ ತಾಲೂಕನ್ನು ಬರಪೀಡಿತ ತಾಲೂಕೆಂದು ಘೋಷಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ' ಕುರಿತು ಸದಸ್ಯರಾದ ಎನ್.ಟಿ. ಶ್ರೀನಿವಾಸ್ ಅವರ ಪ್ರಶ್ನೆಗೆ ಉಪ ಮುಖ್ಯಮಂತ್ರಿಗಳು ಉತ್ತರಿಸಿದರು.
ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ರೂಪಿಸಿರುವ 'ಬರ ನಿರ್ವಹಣಾ ಕೈಪಿಡಿ 2020' ರಲ್ಲಿ (Manual for Drought Management 2020) ನೀಡಿರುವ ಮಾರ್ಗಸೂಚಿಗಳಂತೆ ಬರ ಮೌಲ್ಯಮಾಪನ ಮತ್ತು ಘೋಷಣೆಗೆ ವಸ್ತುನಿಷ್ಠ, ಪಾರದರ್ಶಕ ಮತ್ತು ಸಾಕ್ಷ್ಯ ಆಧಾರಿತ ವಿಧಾನವನ್ನು ಅನುಸರಿಸಿ ಕಡ್ಡಾಯ ಸೂಚಕಗಳಾದ ಮಳೆ ಕೊರತೆ ಅಥವಾ ಒಣಹವೆ, ಬಿತ್ತನೆ ಪ್ರಗತಿ, ಉಪಗ್ರಹ ಆಧಾರಿತ ರಿಮೋಟ್ ಸೆನ್ಸಿಂಗ್-ಆಧಾರಿತ ಸಸ್ಯವರ್ಗದ ಸೂಚ್ಯಂಕಗಳು, ಮಣ್ಣಿನ ತೇವಾಂಶ ಸೂಚ್ಯಂಕಗಳು ಮತ್ತು ಜಲವಿಜ್ಞಾನದ ಸೂಚಕಗಳ ಅಧ್ಯಯನ ನಡೆಸಿ ಮೊಬೈಲ್ ಆ್ಯಪ್ ಬಳಸಿ ಸ್ಥಳ ಪರಿಶೀಲನೆ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ನಿಯಮಾನುಸಾರ ಬರಪೀಡಿತ ತಾಲೂಕೆಂದು ಘೋಷಿಸಲು ಕ್ರಮ ವಹಿಸಲಾಗುತ್ತಿದೆ ಎಂದರು.
ತೀವ್ರ ಮಳೆ ಅಭಾವದಿಂದಾಗಿ ರೈತಾಪಿ ವರ್ಗದ ಹಾಗೂ ಕೂಲಿ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸಿ ದೂರದ ನಗರಗಳಿಗೆ ಉದ್ಯೋಗ ಅರಸಿ ಗುಳೆ ಹೋಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿಯಲ್ಲಿ ಬರ ಪರಿಹಾರ ಸಾಮುದಾಯಿಕ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವುದಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಕಾಮಗಾರಿಗಳು ಮುಖ್ಯವಾಗಿ ಜಲ ಸಂರಕ್ಷಣೆ, ಅಂತರ್ಜಲ ಮರುಪೂರಣ ಮತ್ತು ಮಣ್ಣಿನ ತೇವಾಂಶ ಹೆಚ್ಚಳದ ಮೇಲೆ ಗಮನಹರಿಸುತ್ತವೆ.
ಇವುಗಳಲ್ಲಿ ಕೆರೆ ಮತ್ತು ತೂಬುಗಳ ಹೂಳೆತ್ತುವುದು, ಕೃಷಿ ಹೊಂಡಗಳ ನಿರ್ಮಾಣ, ಚೆಕ್ ಡ್ಯಾಂ, ನಾಲಾ ಬಂದ್, ಇಂಗು ಗುಂಡಿಗಳು, ಕುಡಿಯುವ ನೀರಿನ ಮೂಲಗಳ ಬಳಿ ಮರುಪೂರಣ ಗುಂಡಿಗಳು/ಶಾಫ್ಟ್‌ಗಳು, ಬಂಡ್ ನಿರ್ಮಾಣ, ಕಂಪಾರ್ಟ್‌ಮೆಂಟ್ ಬಂಡಿಂಗ್, ಎತ್ತರದ ಪ್ರದೇಶಗಳಲ್ಲಿ ಕಂಟೂರ್ ಟ್ರೆಂಚಿಂಗ್ ಮತ್ತು ಬರ ನಿರೋಧಕತೆಯನ್ನು ಸುಧಾರಿಸುವ ಇತರ ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುವುದರ ಮೂಲಕ ರೈತಾಪಿ ವರ್ಗದ ಹಾಗೂ ಕೂಲಿ ಕಾರ್ಮಿಕರು ಗುಳೆ ಹೋಗುವುದನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ರಮ ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.


Click it and Unblock the Notifications
