Siddaramaiah: ಅನಧಿಕೃತ ಬಡಾವಣೆಗಳ ಖಾತಾ ಬಂದ್ : ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು?
ಬೆಂಗಳೂರು, ಜನವರಿ 29: ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ ಎಂದು ಸಿಎಂ ಸಿದ್ದರಾಮಯ್ಯಗೆ ದಾಖಲೆ ಸಮೇತ ವಿವರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ವಿವರಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣಾದಲ್ಲಿ ನಡೆಸಿದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿಲಾಗಿದೆ. ಜಮೀನು ಖಾತೆಗೆ ಆಧಾರ್ ಸೀಡಿಂಗ್ ಮಾಡಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ 2.22 ಕೋಟಿ ಖಾತೆಗಳಿಗೆ ಆಧಾರ ಸೀಡಿಂಗ್ ಮಾಡಲಾಗಿದ್ದು, ಇದರಿಂದ ನಕಲಿ ದಾಖಲೆ ಸೃಷ್ಟಿಸುವುದನ್ನು ತಡೆಯಲು ಸಾಧ್ಯವಾಗಿದೆ. ಭೂ ಪರಿವರ್ತನೆಯಾಗದೆ ವಾಣಿಜ್ಯ ಉದ್ದೇಶಗಳಿಗೆ ಜಮೀನು ಬಳಕೆ ಪ್ರಕರಣಗಳನ್ನು ಪತ್ತೆ ಹಚ್ಚಲು ಇದರಿಂದ ಸಾಧ್ಯವಾಗಿದೆ.

ಅನಧಿಕೃತ ಬಡಾವಣೆಗಳಿಗೆ ಖಾತಾ ನೀಡುವುದನ್ನು ಸ್ಥಗಿತಗೊಳಿಸಲು ಈಗಾಗಲೇ ಸೂಚನೆ ನೀಡಿದ್ದೇವೆ. ಒಂದು ಅವಧಿಗೆ ಬಿ ಖಾತಾ ನೀಡುವ ಪ್ರಕ್ರಿಯೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ, ಇನ್ನು ಮುಂದೆ ಅನಧಿಕೃತ ಬಡಾವಣೆಗಳು ತಲೆ ಎತ್ತದಂತೆ ನೋಡಿಕೊಳ್ಳಬೇಕು ಎನ್ನುವ ಸೂಚನೆ ನೀಡಿದರು. ರಾಜ್ಯದಲ್ಲಿ ಹಲವು ಪ್ರಕರಣಗಳಲ್ಲಿ ಜಮೀನುಗಳ ಖಾತೆ ಇನ್ನೂ ನಿಧನ ಹೊಂದಿದವರ ಹೆಸರಿನಲ್ಲಿಯೇ ಇದೆ. ಪೌತಿ ಖಾತೆ ಅಭಿಯಾನದ ಮೂಲಕ ಮಾಲಿಕರ ಹೆಸರಿಗೆ ಜಮೀನು ಮಾಡುವ ನೋಂದಣಿ ಮಾಡುವ ಕಾರ್ಯವನ್ನು ತ್ವರಿತಗೊಳಿಸಬೇಕು ಎನ್ನುವ ಸೂಚನೆ ನೀಡಿದರು.
ಖಾತೆ ಬದಲಾವಣೆ ಪ್ರಕ್ರಿಯೆಯನ್ನು ಶೇ.65 ಪ್ರಕರಣಗಳಲ್ಲಿ ಒಂದು ದಿನದ ಒಳಗಾಗಿ ಮಾಡಲಾಗುತ್ತಿರುವುದು ಒಳ್ಳೆಯ ಸಂಗತಿ. ಅಟೋ ಮ್ಯುಟೇಶನ್ ಮೂಲಕ ಇದು ಸಾಧ್ಯವಾಗಿದೆ. ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್ ಪ್ಲಾನ್ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ನಗರ ಪ್ರದೇಶಗಳಲ್ಲಿ ಮಾಸ್ಟರ್ ಪ್ಲಾನ್ ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್, ಭೂ ಪರಿವರ್ತನೆ ಪ್ರಕರಣಗಳಲ್ಲಿ ಜನಸಾಮಾನ್ಯರಿಗೆ ಯಾವುದೇ ಕಿರುಕುಳ, ಅನಗತ್ಯ ವಿಳಂಬವಾಗದಂತೆ ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.
ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳನ್ನು ಆದ್ಯತೆ ಮೇರೆಗೆ ವಿಲೇವಾರಿ ಮಾಡಬೇಕು. ವಿಳಂಬಕ್ಕೆ ಅವಕಾಶ ಇರಬಾರದು, ತಹಶೀಲ್ದಾರ್ ನ್ಯಾಯಾಲಯಗಳಲ್ಲಿ 3ತಿಂಗಳ ಒಳಗಾಗಿ ಪ್ರಕರಣಗಳ ವಿಲೇವಾರಿ ಮಾಡಬೇಕು. ನಮ್ಮ ಸರ್ಕಾರ ಬಂದಾಗ 10 ಸಾವಿರಕ್ಕೂ ಮಿಕ್ಕಿ ಅವಧಿ ಮೀರಿದ ಪ್ರಕರಣಗಳು ಇದ್ದವು. ಈಗ ಕೇವಲ 369 ಪ್ರಕರಣಗಳು ಮಾತ್ರ ತಹಶೀಲ್ದಾರ್ ನ್ಯಾಯಾಲಯಗಳಲ್ಲಿವೆ. ಪ್ರಕರಣಗಳ ವಿಲೇವಾರಿ ತ್ವರಿತಗೊಳಿಸುವ ಜತೆಗೆ ನ್ಯಾಯದಾನದ ಗುಣಮಟ್ಟ ಸಹ ಸುಧಾರಿಸಬೇಕು.
ತಹಶೀಲ್ದಾರ್ -DC ಕೋರ್ಟ್ ಗಳಲ್ಲಿ ಪ್ರಕರಣಗಳು ಸಮರೋಪಾದಿಯಲ್ಲಿ ವಿಲೇವಾರಿ ಆಗುತ್ತಿದೆ. ಆದರೆ ಉಪ ವಿಭಾಗಾಧಿಕಾರಿ ನ್ಯಾಯಾಲಯಗಳಲ್ಲಿ ವಿಲೇವಾರಿ ವೇಗ ಕಡಿಮೆ ಇರುವುದನ್ನು ತಾಂತ್ರಿಕ ಕಾರಣಗಳ ಸಮೇತ ಸಚಿವ ಕೃಷ್ಣಬೈರೇಗೌಡರು ಸಿಎಂ ಗೆ ವಿವರಿದರು. ಇದನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು. ಉಪವಿಭಾಗಾಧಿಕಾರಿ ನ್ಯಾಯಾಲಯಗಳ ಕಾರ್ಯವೈಖರಿ ಸುಧಾರಿಸಬೇಕು. ಈ ಬಗ್ಗೆ ಉಪ ವಿಭಾಗಾಧಿಕಾರಿಗಳಿಗೆ ಕೊನೆಯ ಎಚ್ಚರಿಕೆ ಕೊಡಿ ಎಂದು ಸಿ.ಎಂ ಸೂಚಿಸಿದರು.
ಜಿಲ್ಲಾಧಿಕಾರಿ ನ್ಯಾಯಾಲಯಗಳಲ್ಲಿ 9947 ಒಂದು ವರ್ಷಕ್ಕೂ ಅಧಿಕ ಅವಧಿಯಿಂದ ಬಾಕಿಯಿತ್ತು. ಈಗ ಇದರ ಪ್ರಮಾಣ ಕೇವಲ 6 ಸಾವಿರಕ್ಕೆ ಇಳಿದಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿಗೆ 18 ವಿಶೇಷ ಉಪವಿಭಾಗಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.












Click it and Unblock the Notifications