ಡಿಕೆಶಿ, ರೋಷನ್ ಬೇಗ್ ಗೆ ಸಚಿವ ಸ್ಥಾನ?
ಬೆಂಗಳೂರು, ಡಿ. 17 : ಸಿಎಂ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಕಸರತ್ತು ಬಹುತೇಕ ಅಂತ್ಯಗೊಂಡಿದೆ. ಹಿರಿಯ ಮುಖಂಡರಾದ ಡಿ.ಕೆ.ಶಿವಕುಮರ್ ಮತ್ತು ರೋಷನ್ ಬೇಗ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಡಿಸೆಂಬರ್ ಅಂತ್ಯದೊಳಗೆ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಸೋಮವಾರ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನವದೆಹಲಿಗೆ ತೆರಳಿದ್ದಾಗ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸಂಪುಟ ವಿಸ್ತರಣೆ ಮಾಡುವ ಕುರಿತು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಲೋಕಸಭೆ ಚುನಾವಣೆಗೂ ಮೊದಲು ಸಂಪುಟ ವಿಸ್ತರಣೆ ಮಾಡುವಂತೆ ಅವರು ಸಲಹೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. [ಸಂಪುಟಕ್ಕೆ ಡಿಕೆಶಿ ಇನ್?]

ಡಿ.ಕೆ.ಶಿವಕುಮಾರ್ ಮತ್ತು ರೋಷನ್ ಬೇಗ್ ಅವರಿಗೆ ಸಚಿವ ಸ್ಥಾನ ನೀಡಿದರೆ, ಅಸಮಾಧಾನ ಸ್ಫೋಟಗೊಳ್ಳಬಹುದು ಎಂದು ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಡಲು ಯತ್ನಿಸಿದರು. ಆದರೆ, ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗಳಿಸುವ ದೃಷ್ಠಿಯಿಂದ ಈ ಕ್ರಮ ಅನಿವಾರ್ಯವಾಗಿದೆ ಎಂದು ನಾಯಕರು ಹೇಳಿದರು.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಮುಂದಿನ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಮಾಡಿಕೊಡುವುದಾಗಿ ಹೈಕಮಾಂಡ್ ನಾಯಕರು ಮನವೊಲಿಸಿದ್ದಾರೆ. ಹೈ ಕಮಾಂಡ್ ಸೂಚನೆ ಹಿನ್ನಲೆಯಲ್ಲಿ ಡಿಸೆಂಬರ್ ಅಂತ್ಯದೊಳಗೆ ಸಿಎಂ ಸಿದ್ದರಾಮಯ್ಯ ಸಂಪುಟ ವಿಸ್ತರಣೆ ಮಾಡಿ, ಡಿ.ಕೆ.ಶಿವಕುಮಾರ್ ಮತ್ತು ರೋಷನ್ ಬೇಗ್ ಅವರಿಗೆ ಸಚಿ ಸ್ಥಾನ ನೀಡುವುದು ಬಹುತೇಖ ಖಚಿತವಾಗಿದೆ.
ಕಳಂಕಿತರಿಗೆ ಸಂಪುಟದಲ್ಲಿ ಸ್ಥಾನಕೊಡುವುದು ಬೇಡ ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಸರ್ಕಾರ ರಚನೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪುಟದಿಂದ ದೂರವಿಟ್ಟಿದ್ದರು. ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರೂ ಕಳಂಕಿತರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಾರದು ಎಂದು ಸಿಎಂಗೆ ಮನವಿ ಮಾಡಿದ್ದರು.
ಈಗಾಗಲೇ ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿದ್ದ ಸಂತೋಷ್ ಲಾಡ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಎರಡು ಖಾತೆಗಳು ತೆರವಾಗಿವೆ. ಸದ್ಯ ರೋಷನ್ ಬೇಗ್ ಮತ್ತು ಡಿ.ಕೆ.ಶಿವಕುಮಾರ್ ಸಂಪುಟ ಸೇರಿದರೆ ಅವರಿಗೆ ಆ ಖಾತೆಗಳನ್ನು ಹಂಚಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. [ಲಾಡ್ ರಾಜೀನಾಮೆ]












Click it and Unblock the Notifications