A Khata: ಬೆಂಗಳೂರು ಜನರಿಗೆ ದೋಖಾ; ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ: ಹೆಚ್‌ ಡಿ ಕುಮಾರಸ್ವಾಮಿ

ಮಂಡ್ಯ, ಅಕ್ಟೋಬರ್16: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ರೈತ ಭವನದ ಬಳಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿ ಹೆಚ್‌ ಡಿ ಕುಮಾರಸ್ವಾಮಿ, ದೀಪಾವಳಿ ಕೊಡುಗೆ ಎಂದರೆ ಏನೋ ನಮಗೆ ದೊಡ್ಡ ಕೊಡುಗೆಯನ್ನು ಕೊಡುತ್ತದೆ ಎಂದು ಜನರು ಭಾವಿಸಿದ್ದರು. ದೊಡ್ಡ ದೊಡ್ಡ ಜಾಹೀರಾತುಗಳನ್ನು ನೋಡಿ ನಾನು ಕೂಡ ಹಾಗೆಯೇ ಅಂದುಕೊಂಡಿದ್ದೆ. ಆದರೆ, ಅದು ದೀಪಾವಳಿ ಹೆಸರಿನಲ್ಲಿ ಜನರಿಗೆ ಮಾಡುತ್ತಿರುವ ಮಹಾನ್ ದೋಖಾ ಇದಾಗಿದೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

Rs 15000 Crore Extorted Under The Name Of A Khata Kumaraswamy Alleges

ಬೆಂಗಳೂರು ನಗರ ಜನರಿಗೆ ದೀಪಾವಳಿ ಕೊಡುಗೆ ನೀಡಲು ಶಾಕ್ ಕೊಡ್ತಿದ್ದಾರೆ. ಅದು ಹೇಗಿದೆ ಎಂದರೆ, ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ ತುಂಬಬೇಕು. ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ಈ ಸರ್ಕಾರ. 30/40 ನಿವೇಶನಕ್ಕೆ 4ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ. ಮೊದಲು 10ರಿಂದ 13 ಸಾವಿರ ರೂಪಾಯಿ ಅಷ್ಟನ್ನೇ ಕಟ್ಟಬೇಕಿದ್ದ ಬೆಂಗಳೂರು ಜನರು ಇನ್ನು ಮುಂದೆ ಲಕ್ಷಗಳಲ್ಲಿ ಹಣ ಏರಬೇಕಿದೆ. ಎ ಖಾತಾ ದಂಧೆಯ ಮೂಲಕ ರಾಜ್ಯ ಸರ್ಕಾರ 15,000 ಕೋಟಿ ರೂಪಾಯಿ ವಸೂಲಿ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.

ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡೋದು ಎಂದರೆ ಹೀಗೆನಾ? ಜನರ ಮೇಲೆ ತೆರಿಗೆ ವಿಧಿಸಿ 6ನೇ ಗ್ಯಾರಂಟಿ ಕೊಡಲು ಹೊರಟಿದ್ದಾರೆ. ಈ ಸರ್ಕಾರ ಬಂದ ಮೇಲೆ ನಿರಂತರವಾಗಿ ಸುಲಿಗೆ ಮಾಡುತ್ತಿದೆ. ಕೇವಲ ಹಣ ಮಾಡುವುದಕ್ಕೆ ಸರ್ಕಾರ ಹೊರಟಿದೆ. ಪ್ರತಿಯೊಂದರಲ್ಲಿ ದುಡ್ಡು ಮಾಡುವ ಬಗ್ಗೆಯಷ್ಟೇ ಆಲೋಚನೆ ಮಾಡುತ್ತಿದೆ ಎಂದು ಕಟುವಾಗಿ ಟೀಕಿಸಿದರು.

ಈ ಸರ್ಕಾರದಲ್ಲಿ ಹಣ ಇಲ್ಲ. ಅದಕ್ಕೆ ಕಂಡ ಕಂಡ ಕಡೆ ಹಣಕ್ಕೆ ಕೈ ಹಾಕುತ್ತಿದೆ. ಬೆಂಗಳೂರಿನ ಗುಂಡಿ ಮುಚ್ಚೋದು ಇರಲಿ. ರಾಜ್ಯದಲ್ಲಿರುವ ಗುಂಡಿಗಳನ್ನೂ ಮುಚ್ಚೋಕೆ ಇವರಿಂದ ಆಗುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡ ಸಚಿವರು; ಜೆಡಿಎಸ್ ಕೊಡುಗೆ ಏನು ಎಂದು ಹಾಸನದಲ್ಲಿ ಸಿಎಂ ಪ್ರಶ್ನೆ ಮಾಡಿದ್ದಾರೆ. ನನ್ನ ಆರೋಗ್ಯ ವಿಚಾರಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ದೆಹಲಿಗೆ ಬಂದಿದ್ದರು. 2018ರಲ್ಲಿ ನೀವು ಕೊಟ್ಟ 500 ಕೋಟಿ ರೂಪಾಯಿ ಅನುದಾನದಲ್ಲಿಯೇ ಇನ್ನೂ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳುತ್ತಾರೆ. ಅನುದಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು, ನಾನು ಅಧಿಕಾರದಲ್ಲಿ ಇದ್ದ ಎಷ್ಟು ಕೊಟ್ಟಿದ್ದೇನೆ, ಇವರು ಎಷ್ಟು ಕೊಟ್ಟಿದ್ದಾರೆ ಎಂಬ ಬಗ್ಗೆ ಜನರ ಮುಂದೆ ದಾಖಲೆ ಇಡಲಿ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವರ ಸಂಸತ್ ಪ್ರದೇಶಾಭಿವೃದ್ಧಿ ನಿಧಿಯಿಂದ ಈ ಆಟೋ ನಿಲ್ದಾಣ ನಿರ್ಮಾಣ ಮಾಡಿದ್ದೇವೆ. ಇದು ಸುಸಜ್ಜಿತ, ವಿಶಾಲ ಆಟೋ ನಿಲ್ದಾಣ ಆಗಿದ್ದು, ಆಟೋ ಚಾಲಕರಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಆಗಲಿದೆ. ಇಲ್ಲಿ ಸುಸಜ್ಜಿತ ಆಟೋ ನಿಲ್ದಾಣ ಬೇಕು ಎನ್ನುವುದು ಬಹಳ ದಿನಗಳ ಬೇಡಿಕೆ ಆಗಿತ್ತು. ಆ ಬೇಡಿಕೆ ಈಡೇರಿಸುವ ಕೆಲಸ ಆಗಿದೆ. ಅಲ್ಪ ಕಾಲದಲ್ಲಿಯೇ ನಿಲ್ದಾಣ ನಿರ್ಮಾಣ ಆಗಿದೆ ಎಂದು ಸಚಿವರು ಹೇಳಿದರು.

ನಗರದಲ್ಲಿ ಆಟೋ ವ್ಯವಸ್ಥೆ ಜನತೆಯ ಸಂಚಾರಕ್ಕೆ ಬಹಳ ಅನುಕೂಲವಾಗಿದೆ. ಆದರೆ, ಆಟೋ ಚಾಲಕರು ಮಳೆ, ಬಿಸಿಲಿನಲ್ಲಿ ಕಷ್ಟ ಅನುಭವಿಸುತ್ತಿದ್ದರು. ನಮಗೊಂದು ಸುಸಜ್ಜಿತ ನಿಲ್ದಾಣ ಮಾಡಿಕೊಡಿ ಎಂದು ಕೇಳಿದ್ದರು. ತಕ್ಷಣವೇ ಅದಕ್ಕೆ ಕ್ರಮ ವಹಿಸಿದ್ದೇವೆ. ದೇವೇಗೌಡರ ಸಂಸತ್ ನಿಧಿ ಹಾಗೂ ನನ್ನ ಪಾಲಿನ ಸಂಸತ್ ನಿಧಿಯ ಅನುದಾನದಿಂದ ಕಾಮಗಾರಿ ಕೈಗೆತ್ತಿಗೊಂಡಿದ್ದೆವು. ಈ ಸಂದರ್ಭದಲ್ಲಿ ಅನುದಾನ ನೀಡಿದ ದೇವೇಗೌಡರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+