ಶ್ರವಣಬೆಳಗೊಳ ಮಸ್ತಕಾಭಿಷೇಕಕ್ಕೆ 575 ಕೋಟಿ ಅನುದಾನ

Posted By:
Subscribe to Oneindia Kannada

ಬೆಂಗಳೂರು, ಜೂನ್ 30 : ಶ್ರವಣಬೆಳಗೊಳದಲ್ಲಿ 2018ರಲ್ಲಿ ನಡೆಯಲಿರುವ ಮಹಾ ಮಸ್ತಕಾಭಿಷೇಕಕ್ಕೆ 575 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಈ ಕಾರ್ಯಕ್ರಮವನ್ನು ಹಿಂದಿಗಿಂತಲೂ ಅತಿ ವಿಜೃಂಭಣೆಯಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

2018 ರಲ್ಲಿ ನಡೆಯಲಿರುವ ಮಹಾ ಮಸ್ತಕಾಭಿಷೇಕ ಆಚರಣೆಯ ಉನ್ನತಾಧಿಕಾರ ಸಮಿತಿಯ ಪ್ರಥಮ ಸಭೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು. ಪ್ರವಾಸಿಗರಿಗೆ ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ವಸತಿ ಹಾಗೂ ಶೌಚಾಲಯ ವ್ಯವಸ್ಥೆ, ನಿರಂತರ ವಾಹನ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಚರ್ಚೆ ನಡೆಯಿತು. [2018ಕ್ಕೆ ಮಹಾಮಸ್ತಕಾಭಿಷೇಕ]

shravanabelagola

2006ರಲ್ಲಿ ಮಹಾ ಮಸ್ತಕಾಭಿಷೇಕಕ್ಕೆ 116.66 ಕೋಟಿ ರೂ. ವೆಚ್ಚವಾಗಿತ್ತು. 2018ರಲ್ಲಿ 575 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜು ಪಟ್ಟಿ ತಯಾರಿಸಲಾಗಿದೆ ಎಂದು ಸಭೆಯಲ್ಲಿ ಚರ್ಚೆ ನಡೆಯಿತು. 10 ಸಮಾರಂಭದಲ್ಲಿ 40 ಲಕ್ಷದಿಂದ 50 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. [ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕ ದಿನಾಂಕ ನಿಗದಿ]

'ಯಾತ್ರಾರ್ಥಿಗಳು ಹಾಗೂ ಪ್ರವಾಸಿಗರಿಗೆ ಮೂಲ ಸೌಲಭ್ಯ ಕಲ್ಪಿಸುವುದು, ರಸ್ತೆಗಳ ಸುಧಾರಣೆ ಮುಂತಾದವು ಅಂದಾಜು ಪಟ್ಟಿಯಲ್ಲಿ ಸೇರಿವೆ. ಈ ಬಾರಿಯ ಮಹಾಮಸ್ತಕಾಭಿಷೇಕಕ್ಕೆ 710 ಎಕರೆ ಪ್ರದೇಶದಲ್ಲಿ ಕನಿಷ್ಠ 25,000 ಜನರಿಗೆ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲು ಉದ್ದೇಶಿಸಲಾಗಿದೆ' ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ. ಮಂಜು ತಿಳಿಸಿದರು.

ಲೋಕೋಪಯೋಗಿ ಸಚಿವ ಡಾ.ಎಚ್. ಸಿ. ಮಹದೇವಪ್ಪ, ಇಂಧನ ಸಚಿವ ಡಿ.ಕೆ.ಶಿವಕುಮಾರ್, ನಗರಾಭಿವೃದ್ಧಿ ಮತ್ತು ಹಜ್ ಸಚಿವ ಆರ್. ರೋಷನ್ ಬೇಗ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ. ಆರ್. ರಮೇಶ್ ಕುಮಾರ್, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಕಾಶಿ ಎಂದೇ ಪ್ರಸಿದ್ಧಿಯಾಗಿದೆ. 12 ವರ್ಷಗಳಿಗೊಮ್ಮೆ ಇಲ್ಲಿರುವ 58.8 ಅಡಿ ಎತ್ತರದ ಗೊಮ್ಮಟೇಶ್ವರನಿಗೆ ಮಹಾಮಸ್ತಕಾಭಿಷೇಕ ನಡೆಯುತ್ತದೆ. 2018 ರ ಫೆಬ್ರವರಿಯಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka government will spend Rs 575 crore to Mahamastakabhisheka at Shravanabelagola, Hassan district in February 2018.
Please Wait while comments are loading...