ಕರ್ನಾಟಕದ ಸಾರ್ವಜನಿಕ ಸ್ಥಳದಲ್ಲಿ RSS ಚಟುವಟಿಕೆ ನಿರ್ಬಂಧ: ಸಿ.ಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ
RSS: ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಡೆಸುವುದಕ್ಕೆ ಅವಕಾಶ ನೀಡಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡುತ್ತದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಹಾಗೂ ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಮತ್ತು ಯುವ ಸಮುದಾಯದ ಮನಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ.

ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ. ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ RSS ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪತ್ರ ಬರೆದಿದ್ದಾರೆ.
ಇನ್ನು ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.
ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.
ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.
ಬಿಜೆಪಿ ಟೀಕೆ: ರಾಷ್ಟ್ರಕ್ಕಾಗಿ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುರಿತು ಮಾತನಾಡುವ ನೈತಿಕತೆಯು ಸಿದ್ದರಾಮಯ್ಯ ಅವರಿಗಾಗಲಿ ಅಥವಾ ವಾಚಾಳಿ ಪ್ರಿಯಾಂಕ್ ಖರ್ಗೆಗಾಗಲಿ ಇಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಹಾದಿ ಬೀದಿಯಲ್ಲಿ ರಕ್ತ ಹರಿಸುವ ಮುಸ್ಲಿಂ ಮತೀಯ ಸಂಘಟನೆ ಕುರಿತು, ಪಾಕಿಸ್ಥಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವ ಮತಾಂಧರ ಕುರಿತು ಮೃದು ಧೋರಣೆ ತಾಳುವ ಸಚಿವರು, ಮುಖ್ಯಮಂತ್ರಿಗಳು ಈಗ ಪ್ರಚಾರಕ್ಕಾಗಿ, ಅಧಿಕಾರ ಉಳಿಸಿಕೊಳ್ಳಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿಂದೆ ಬಿದ್ದಿದ್ದಾರೆ.
ಗುಲಾಮಿ ಸಂಸ್ಕೃತಿಯ ಕಾಂಗ್ರೆಸ್ ನೆರಳಿನಲ್ಲಿ ನಿಂತು ಮಾತನಾಡುತ್ತಿರುವ ನಿಮಗೆ ಶತಮಾನವನ್ನು ಕಂಡ ರಾಷ್ಟ್ರೀಯ ಸ್ವಯಂಸೇವಕ ಸಂಘದ ಯಾವ ಚಟುವಟಿಕೆಗಳನ್ನು ನಿಲ್ಲಿಸಲು ನಿಮ್ಮ ಸರ್ಕಾರದ ಕೈಯಿಂದ ಸಾಧ್ಯವಿಲ್ಲ ಎಂದು ಹೇಳಿದೆ.












Click it and Unblock the Notifications