ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಎಲ್ಲಿ? ಶಾಲೆಗಳಿಗೆ ರಜೆ ಇರುತ್ತಾ? ಇಲ್ಲಿದೆ ಸ್ಪಷ್ಟನೆ
ವೃಕ್ಷಮಾತೆ ಖ್ಯಾತಿಯ ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ವಿಧಿವಶರಾಗಿದ್ದಾರೆ. ಈ ಹಿನ್ನೆಲೆ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಯಾವಾಗ ಎಲ್ಲಿ ನಡೆಯಲಿದೆ? ಹಾಗೂ ಆ ದಿನ ಶಾಲಾ-ಕಾಲೇಜುಗಳಿಗೆ ರಜೆ ಇರುತ್ತಾ? ಎಂಬ ಗೊಂದಲಗಳು ಮೂಡಿತ್ತು. ಈ ಎಲ್ಲದಕ್ಕೂ ಸದ್ಯ ತೆರೆಬಿದ್ದಿದ್ದು, ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಗೆ ಜಾಗ ಫಿಕ್ಸ್ ಆಗಿದೆ. ಶನಿವಾರವೇ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಲಿದೆ. ಅಲ್ಲದೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗುತ್ತಾ? ಎಂಬ ಗೊಂದಲಕ್ಕೂ ತೆರೆ ಬಿದ್ದಿದೆ.
ಬೇಲೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾಲುಮರದ ತಿಮ್ಮಕ್ಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗಾಗಿ ಇಂದು ರಾತ್ರಿ 10ರಿಂದಲೇ ವ್ಯವಸ್ಥೆ ಮಾಡಲಾಗಿದೆ. ತಿಮ್ಮಕ್ಕ ಅವರ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಬೆಳಿಗ್ಗೆ 7.30ರಿಂದ 10.30ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲೇ ಅಂತ್ಯಕ್ರಿಯೆ
ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಜ್ಞಾನಭಾರತಿ ಬಳಿ ಇರುವ ಕಲಾ ಗ್ರಾಮದ ಆವರಣದಲ್ಲಿ ನೆರವೇರಲಿದೆ. ಕಲಾಗ್ರಾಮದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ತಿಮ್ಮಕ್ಕ ಅವರ ನಿಧನದ ಹಿನ್ನೆಲೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆಯಾಗಲಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಬಗ್ಗೆಯೂ ಸ್ಪಷ್ಟನೆ ನೀಡಿರುವ ಸರ್ಕಾರ, ಶನಿವಾರ ಶಾಲಾ-ಕಾಲೇಜು ಸೇರಿದಂತೆ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂಬುದು ನಕಲಿ ಆದೇಶ ಪತ್ರ ಎಂದು ಸ್ಪಷ್ಟನೆ ನೀಡಿದೆ. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ. ಆದರೆ ಶನಿವಾರ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿಲ್ಲ, ಶಾಲಾ-ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಕ್ಲಾರಿಟಿ ಕೊಟ್ಟಿದೆ.
ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು. ತಿಮ್ಮಕ್ಕ ಅವರ ಅಂತ್ಯಕ್ರಿಯೆಯ ಬಗ್ಗೆ ಕುಟುಂಬದವರು ಎರಡು ಮೂರು ಸ್ಥಳಗಳನ್ನು ಗೊತ್ತು ಮಾಡಿದ್ದು, ಅಂತ್ಯಕ್ರಿಯೆ ಎಲ್ಲಿ ಮಾಡಬೇಕೆಂದು ಸದ್ಯದಲ್ಲಿಯೇ ನಿರ್ಧರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದರು. ಅದರಂತೆ ಅಂತಿಮವಾಗಿ ಬೆಂಗಳೂರಿನ ಜ್ಞಾನಭಾರತಿ ಬಳಿ ಇರುವ ಕಲಾ ಗ್ರಾಮದ ಆವರಣದಲ್ಲಿ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿಸಲು ಸ್ಥಳ ನಿಗದಿ ಮಾಡಲಾಗಿದೆ. ಸಾಲು ಮರದ ತಿಮ್ಮಕ್ಕನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿದ್ದ ಸಿಎಂ, ತಿಮ್ಮಕ್ಕ ಅವರ ಕೊನೆ ಆಸೆಯ ಪತ್ರ ಕೊಟ್ಟಿದ್ದಾರೆ. ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ಹೇಳಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ ಎಂದು ಭರವಸೆಯೂ ನೀಡಿದ್ದಾರೆ.












Click it and Unblock the Notifications