Heavy Rain: ಭಾರಿ ಮಳೆ ಶಾಲೆಗಳಿಗೆ ರಜೆ ಘೋಷಣೆ; ಶಿರಾಡಿಘಾಟ್ ಬಂದ್, ಸಂಪಾಜೆ ಘಾಟ್‌ನಲ್ಲೂ ಸಂಚಾರ ನಿಷೇಧ
ರಾಜ್ಯದಲ್ಲಿ ಮಳೆ ಮುಂದುವರೆದಿದೆ. ಪಶ್ಚಿಮಘಟ್ಟ, ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಶುಕ್ರವಾರ ಕೂಡ ವ್ಯಾಪಕ ಮಳೆಯಾಗುವ ಸೂಚನೆ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಶುಕ್ರವಾರ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೂಡ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಲೆನಾಡು ಭಾಗದ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಗೆ ಶುಕ್ರವಾರ ಕೂಡ ರೆಡ್ ಅಲರ್ಟ್ ನೀಡಿದ್ದು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್ ಆರ್ ಪುರ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಶಿರಾಡಿ ಘಾಟ್ ಬಂದ್
ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಹಿನ್ನೆಲೆ, ಶಿರಾಡಿಘಾಟ್‌ನಲ್ಲಿ ಸರಣಿ ಭೂ ಕುಸಿತವಾಗುತ್ತಿರುವ ಕಾರಣ ವಾಹನ ಸಂಚಾರ ಬಂದ್ ಮಾಡಲಾಗಿದೆ. ಬೆಂಗಳೂರು ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಶಿರಾಡಿಘಾಟ್‌ನಲ್ಲಿ ಇಂದಿನಿಂದ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದುರಸ್ತಿ ಆಗೋವರೆಗೆ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಶಿರಾಡಿಘಾಟ್‌ನ ದೊಡ್ಡತಪ್ಲು ಪ್ರದೇಶದಲ್ಲಿ ಭೂ ಕುಸಿತವಾಗಿ ಭಾರಿ ಮಳೆಯಾಗುತ್ತಿರುವ ಕಾರಣ ಮತ್ತಷ್ಟು ಭೂ ಕುಸಿತದ ಆತಂಕ ಶುರುವಾಗಿದೆ. ಇದೇ ಕಾರಣಕ್ಕೆ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಸಿ ಸತ್ಯಭಾಮ ಆದೇಶ ಹೊರಡಿಸಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ತೆರಳೋ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಸೂಚನೆ ನೀಡಲಾಗಿದೆ.
ನಾಳೆ ಉಡುಪಿ ಜಿಲ್ಲೆ ಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಲಾಗಿದೆ pic.twitter.com/V51LL1r3wS
— DC Udupi (@dcudupi) July 18, 2024
ಸಂಪಾಜೆ ಘಾಟ್‌ನಲ್ಲಿ ರಾತ್ರಿ ಸಂಚಾರ ನಿಷೇಧ
ಮಡಿಕೇರಿ ಮತ್ತು ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಸಂಪಾಜೆ ಘಾಟ್‌ನಲ್ಲಿ ಕೆಲವೆಡೆ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ರಾತ್ರಿ ವಾಹನ ಸಂಚಾರವನ್ನು (ತುರ್ತು ಸೇವೆಗಳ ನಿರೀಕ್ಷೆ) ಕೊಡಗು ಜಿಲ್ಲಾಡಳಿತ ನಿಷೇಧಿಸಿದೆ.
ಜುಲೈ 18 ರಿಂದ ಜುಲೈ 22 ರವರೆಗೆ ಸಂಪಾಜೆ ಘಾಟ್ ರಸ್ತೆಯಲ್ಲಿ ರಾತ್ರಿ 8 ರಿಂದ ಬೆಳಿಗ್ಗೆ 6 ರವರೆಗೆ ರಾತ್ರಿ ಸಂಚಾರವನ್ನು ನಿಷೇಧಿಸಲಾಗಿದೆ. ಮೈಸೂರು ಮತ್ತು ಬೆಂಗಳೂರಿಗೆ ಪ್ರಯಾಣಿಸುವ ಜನರು ಚಾರ್ಮಾಡಿ ಘಾಟ್ ಅನ್ನು ಬಳಸಲು ಸೂಚಿಸಿದ್ದಾರೆ.












Click it and Unblock the Notifications