Fengal Cyclone: ಭಾರೀ ಮಳೆ: ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಬೆಂಗಳೂರು, ಡಿಸೆಂಬರ್ 03: ಕಳೆದ ಒಂದು ವಾರದಿಂದ ಕರ್ನಾಟಕದಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದೆ. ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆ ಹಿನ್ನಲೆಯಲ್ಲಿ ರಾಜ್ಯದ 8 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು( ಮಂಗಳವಾರ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಫೆಂಗಲ್ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಅವಾಂತರಗಳೇ ಸೃಷ್ಟಿಯಾಗಿದ್ದು, ಮುಂಜಾಗ್ರಾತಾ ಕ್ರಮವಾಗಿ ಇಂದು 8 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಮೈಸೂರು, ಕೊಡಗು, ಚಾಮರಾಜನಗರ, ಚಿಕ್ಕಮಗಳೂರು, ಕೋಲಾರ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಈ ಜಿಲ್ಲೆಗಳ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಲಹೆಯನ್ನ ನೀಡಿದೆ.
ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ 2 ದಿನಗಳು ದಿನಾಂಕ: 03-12-2024 ರಂದು ಆರಂಜ್ ಅಲರ್ಟ್ ಹಾಗೂ ದಿನಾಂಕ: 04-12-2024 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಬೇಕಿದ್ದು ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಮತ್ತು ಅಂಗನವಾಡಿಗಳಿಗೆ ಇಂದು(ಮಂಗಳವಾರ) ದಿನಾಂಕದಂದು ರಜೆ ಘೋಷಿಸಲಾಗಿದೆ.
ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಕೊಡಗು ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ. ಇಂದು ಸಹ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಕೊಡಗು ಜಿಲ್ಲೆಗೆ ಹವಾಮಾನ ಇಲಾಖೆಯು ಇಂದು ರೆಡ್ ಘೋಷಣೆ ಮಾಡಿದೆ. ಜಿಲ್ಲಾದ್ಯಂತ ತುಂತುರು ಮಳೆಯಾಗುತ್ತಿದ್ದು, ಇಂದು ಸಹ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲೂ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಇಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ(ಪದವಿಪೂರ್ವ) ಇಂದು ರಜೆ ನೀಡಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಕೋಲಾರದಲ್ಲೂ ಸಹ ಭಾರಿ ಮಳೆಯಾಗುತ್ತಿದ್ದು, ಮಕ್ಕಳ ಆರೋಗ್ಯ ದೃಷ್ಟಿಯಿಂದ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಕೋಲಾರ ಜಿಲ್ಲೆಯಲ್ಲಿ ಇಂದು ಸಹ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಆದೇಶ ಹೊರಡಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಿನಾಂಕ 3/12/2024ರ ಮಂಗಳವಾರ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ದ್ವಿತೀಯ PUC ವರೆಗೆ) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳಾದ ಜಿ.ಲಕ್ಷ್ಮಿಕಾಂತ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಶಾಲಾಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಇನ್ನು ಕಾಫಿನಾಡು ಚಿಕ್ಕಮಗಳೂರಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲೆಗಳಿಗೆ ರಜೆ ನೀಡಲಾಗಿದ್ದು, ಕಾಲೇಜು ಹೊರತುಪಡಿಸಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ಆರೆಂಜ್ ಅಲಾರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ. ಉಡುಪಿ ಜಿಲ್ಲೆ ಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಲಾಗಿದೆ.












Click it and Unblock the Notifications