75ನೇ ಸ್ವಾತಂತ್ರ್ಯೋತ್ಸವಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಪೊಲೀಸ್ ಕಣ್ಗಾವಲು
ಬೆಂಗಳೂರು, ಆ. 14: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಜಿಲ್ಲೆಗಳಲ್ಲಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಭದ್ರತೆ ಜವಾಬ್ದಾರಿ ವಹಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸ್ವಾಂತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪೆರೇಡ್ ಮೈದಾನಕ್ಕೆ ಇಪ್ಪತ್ತು ಪೊಲೀಸ್ ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಆ. 15 ರಂದು ಧ್ವಜಾರೋಹಣ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಹಣ ಬಳಿಕ ಮುಖ್ಯಮಂತ್ರಿಗಳು ತೆರೆದ ಜೀಪಿನಲ್ಲಿ ಪೊಲೀಸರು ಪೆರೇಡ್ ವೀಕ್ಷಣೆ ಮಾಡಲಿದ್ದಾರೆ. ಧ್ವಜಾರೋಹಣ ಗೌರವ ಸಲ್ಲಿಸಲು ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ, ಬಿಎಸ್ಎಫ್, ಕೈಗಾರಿಕಾ ಭದ್ರತಾ ಪಡೆ, ಸಂಚಾರ ಪೊಲೀಸರು ಪಾಲ್ಗೊಳ್ಳಲಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕಡಿಮೆ ಸಿಬ್ಬಂದಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ.
ಮಾಣಿಕ್ ಷಾ ಪೆರೇಡ್ ಮೈದಾನಕ್ಕೆ ಬಿಗಿ ಭದ್ರತೆ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ 470 ಪೊಲೀಸ್ ಸಿಬ್ಬಂದಿಯ 20 ತುಕಡಿಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್ ತಿಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕಳೆದ ಹದಿನೈದು ದಿನಗಳಿಂದ ಮಾಣಿಕ್ ಷಾ ಪೆರೇಡ್ ಮೈದಾನಕ್ಕೆ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಕೈಗೊಳ್ಳಲು ಸೂಚಿಸಲಾಗಿದೆ. ಪಾಸ್ ಇರುವರಿಗೆ ಮಾತ್ರ ಮಾಣಿಕ್ ಷಾ ಪೆರೇಡ್ ಮೈದಾನದ ಒಳಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಶ್ವಾನದಳ, ಕೆಎಸ್ಆರ್‌ಪಿ, ಬೆಂಗಳೂರು ನಗರ ಸಿವಿಲ್ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತಿತರ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಇದಲ್ಲದೇ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮೆಟ್ರೋ ಸ್ಟೇಷನ್ , ರಾಜಭವನ ಸೇರಿದಂತೆ ನಗರದ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು ಪೊಲೀಸರಿಗೆ ಸೂಚಿಸಲಾಗಿದೆ. ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲಪಂತ್, ಬಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಭದ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಿದ್ದಾರೆ.
ಮಾಣಿಕ್ ಷಾ ಪೆರೇಡ್ ಮೈದಾನ ಎಂಟ್ರಿಗೆ ಷರತ್ತುಗಳು: ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರು ಕಡ್ಡಾಯವಾಗಿ ಪಾಸ್ ಹೊಂದಿರಬೇಕು. ಜತೆಗೆ ಮೈದಾನಕ್ಕೆ ಬರುವರು ನೀರಿನ ಬಾಟಲ್ ಊಟದ ಡಬ್ಬಿ ತರುವಂತಿಲ್ಲ. ಸಿಗರೇಟ್, ಬೆಂಕಿ ಕಟ್ಟಿ ಇದ್ದವರನ್ನು ಮೈದಾನದ ಒಳಗೆ ಪ್ರವೇಶ ಇರುವುದಿಲ್ಲ. ಇನ್ನು ಸಾರ್ವಜನಿಕರ ವಾಹನಗಳ ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಅಧಿಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಎಲ್ಲಾ ಜಿಲ್ಲೆಗಳಲ್ಲಿ ಭದ್ರತೆ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾ ಕೇಂದ್ರಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಜವಾಬ್ಧಾರಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ಕೊರೊನಾ ಮಾರ್ಗಸೂಚಿ ಅನ್ವಯ ಸ್ವಾತಂತ್ರ್ಯ ದಿನಾಚರಣೆಗೆ ಅವಕಾಶ ಮಾಡಿಕೊಡಲಾಗಿದೆ. ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಜಿಲ್ಲಾ ಕೇಂದ್ರಗಳಲ್ಲೂ ಸಹ ಭದ್ರತೆ ಕಲ್ಪಿಸಲಾಗಿದೆ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಕೋವಿಡ್ ಮಾರ್ಗದರ್ಶಿ ಸೂತ್ರದಂತೆ ಆಚರಣೆ:
Recommended Video
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ರೂಪಿಸಲಾಗಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ವಾತಂತ್ರ್ಯೋತ್ಸವ ವೀಕ್ಷಣೆ ಮಾಡಲು ಬರುವರು ಕಡ್ಡಾಯವಾಗಿ ಪಾಸ್ ಹೊಂದಿರಬೇಕು. ಊಟ, ತಿಂಡಿ ಯಾರೂ ಮೈದಾನಕ್ಕೆ ತರುವಂತಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ ಅವರು ತಿಳಿಸಿದ್ದಾರೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಡಿತಗೊಳಿಸಲಾಗಿದೆ.












Click it and Unblock the Notifications