ಶಾಸಕ ಸ್ಥಾನದಿಂದ ಸಿದ್ದರಾಮಯ್ಯ ಅನರ್ಹಗೊಳಿಸಲು ಕೋರಿ ಅರ್ಜಿ
ಬೆಂಗಳೂರು, ಜುಲೈ 21; ಕರ್ನಾಟಕದ ಮುಖ್ಯಮಂತ್ರಿ, ವರುಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಮೇ 20ರಂದು ಸಿದ್ದರಾಮಯ್ಯ 2ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮೊದಲೇ 5 ಗ್ಯಾರಂಟಿಗಳನ್ನು ರಾಜ್ಯದ ಜನರಿಗೆ ನೀಡಿತ್ತು. ಅಲ್ಲದೇ ಗ್ಯಾರಂಟಿ ಕಾರ್ಡ್‌ಗಳ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಸಹಿ ಹಾಕಿ ನೀಡಲಾಗಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಕೋರ್ಟ್ ಮೊರೆ ಹೋಗಲಾಗಿದೆ.

ಕೆ. ಎಂ. ಶಂಕರ್ ಎನ್ನುವವರು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿಯೊಂದನ್ನು ಸಲ್ಲಿಕೆ ಮಾಡಿದ್ದು, ಶಾಸಕ ಸ್ಥಾನದಿಂದ ಸಿದ್ದರಾಮಯ್ಯರನ್ನು ಅನರ್ಹಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ. ಜುಲೈ 28ರಂದು ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ.
ಅರ್ಜಿಯ ಉಲ್ಲೇಖ; ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಸಲ್ಲಿಕೆ ಮಾಡಿರುವ ಅರ್ಜಿಯಲ್ಲಿ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123 (1) ರ ಪ್ರಕಾರ ಚುನಾವಣೆ ಸಮಯದಲ್ಲಿ ಮತದಾರರಿಗೆ ಆಮಿಷವೊಡ್ಡುವಂತಿಲ್ಲ.
ಆದರೆ ಕಾಂಗ್ರೆಸ್ ಪಕ್ಷ 5 ಗ್ಯಾರಂಟಿ ಕಾರ್ಡ್‌ಗಳ ಮೂಲಕ ಆಮಿಷವೊಡ್ಡಿದೆ. ಅಲ್ಲದೇ ಗ್ಯಾರಂಟಿ ಕಾರ್ಡ್‌ಗಳಲ್ಲಿ ಸಿದ್ದರಾಮಯ್ಯ ಅವರ ಸಹಿ ಇದೆ. ಆದ್ದರಿಂದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಎಂದು ಮನವಿ ಮಾಡಲಾಗಿದೆ. ಅರ್ಜಿಯಲ್ಲಿನ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸಲು ತಿಳಿಸಿರುವ ಕೋರ್ಟ್ ಜುಲೈ 28ಕ್ಕೆ ವಿಚಾರಣೆ ಮುಂದೂಡಿಕೆ ಮಾಡಿದೆ.
ವರುಣ ಕ್ಷೇತ್ರದ ಶಾಸಕರು; ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ವರುಣ ಕ್ಷೇತ್ರದ ಶಾಸಕರು. ಈ ಬಾರಿಯ ಚುನಾವಣೆಯಲ್ಲಿ ಅವರು 119816 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯಾಗಿದ್ದ ವಿ. ಸೋಮಣ್ಣ (73653 ಮತಗಳು) ಸೋಲಿಸಿ ಗೆಲುವು ಸಾಧಿಸಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಆದರೆ ಈ ಬಾರಿಯ ಚುನಾವಣೆಯಲ್ಲಿ ಅವರು ಕ್ಷೇತ್ರ ಬದಲಾವಣೆ ಮಾಡಿ ಮೈಸೂರಿನ ವರುಣದಿಂದ ಕಣಕ್ಕಿಳಿದಿದ್ದರು.
ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಿದೆ. ಬಳಿಕ ಸಿದ್ದರಾಮಯ್ಯರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಯಿತು.
ಚುನಾವಣೆಗೆ ಮೇ 2ರಂದು ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿತು. ಆದರೆ ಅದಕ್ಕೆ ಮೊದಲೇ ಪಕ್ಷ 5 ಗ್ಯಾರಂಟಿಗಳನ್ನು ಜನರಿಗೆ ನೀಡಿತ್ತು. ಅಲ್ಲದೇ ಗ್ಯಾರಂಟಿ ಕಾರ್ಡ್‌ಗಳನ್ನು ಮುದ್ರಿಸಿ, ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ಸಹಿ ಹಾಕಿ ಜನರಿಗೆ ಹಂಚಿಕೆ ಮಾಡಿತ್ತು.
ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ತಾತ್ವಿಕ ಒಪ್ಪಿಗೆ ನೀಡಿದ್ದರು. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಮೂರು ಗ್ಯಾರಂಟಿಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ.
ಕಾಂಗ್ರೆಸ್ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಅನ್ನಭಾಗ್ಯ ಮತ್ತು ಶಕ್ತಿ ಎಂಬ 5 ಗ್ಯಾರಂಟಿಗಳನ್ನು ಜನರಿಗೆ ನೀಡಿತ್ತು. ಜನರು ಸಹ ಗ್ಯಾರಂಟಿಗಳನ್ನು ನಂಬಿ ಕಾಂಗ್ರೆಸ್ ಬೆಂಬಲಿಸಿದ್ದು, ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ.












Click it and Unblock the Notifications