Karnataka CM Crisis: ಲಿಂಗಾಯತರಿಗೆ ಸಿಎಂ ಸ್ಥಾನ ನೀಡಿ; ಎಐಸಿಸಿ ಅಧ್ಯಕ್ಷರಿಗೆ ಶಾಮನೂರು ಶಿವಶಂಕರಪ್ಪ ಆಗ್ರಹ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷ ನೂತನ ಸರ್ಕಾರ ರಚಿಸಲಿದೆ. ಆದರೆ ಸದ್ಯ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ತೀವ್ರ ಪೈಪೋಟಿ ನಡೆಯುತ್ತಿದೆ.
ಕಳೆದ ನಾಲ್ಕು ದಿನಗಳಿಂದ ಮುಖ್ಯಮಂತ್ರಿ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಕುರಿತು ನಡೆದ ಕಾಂಗ್ರೆಸ್ ಹೈಕಮಾಂಡ್ ಗೊಂದಲಕ್ಕೆ ಬಿದ್ದಿದ್ದು, ಕೆಪಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಶಕ್ತಿ ಮೀರಿ ಪ್ರಯತ್ನ ನಡೆಸುತ್ತಿದ್ದಾರೆ.

ಭಾನುವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗದೇ, ಸಿಎಂ ಆಯ್ಕೆಯ ಹೊಣೆಯನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ವಹಿಸಲಾಗಿತ್ತು. ಸಿಎಂ ರೇಸ್‌ನ ಮುಂಚೂಣಿಯಲ್ಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೆಲವೇ ಗಂಟೆಗಳಲ್ಲಿ ತೆರೆ ಬೀಳಲಿದೆ.
ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಉಭಯ ನಾಯಕರು ದೆಹಲಿ ಬೀಡು ಬಿಟ್ಟಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೆದುರು ತಮ್ಮ ತಮ್ಮ ಆಶಯ ವ್ಯಕ್ತಪಡಿಸಿದ್ದಾರೆ. ಆದರೆ, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಎಂಬುದೇ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಇದರ ಮಧ್ಯೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರಮುಖ ಪಾತ್ರ ವಹಿಸಿರುವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ಹಾಗೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
"ದಶಕಗಳಿಂದ ಬಿಜೆಪಿಯ ಸಾಂಪ್ರದಾಯಿಕ ಮತದಾರರಾಗಿದ್ದ ಲಿಂಗಾಯತ ಸಮುದಾಯ ಈ ಬಾರಿ ಕಾಂಗ್ರೆಸ್ ಜೊತೆಗೆ ನಿಂತಿದೆ. 46 ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಲಿಂಗಾಯತ ಸಮುದಾಯಕ್ಕೆ ಟಿಕೆಟ್ ನೀಡಲಾಗಿತ್ತು. ಈ ಪೈಕಿ 34 ಶಾಸಕರು ಆಯ್ಕೆಯಾಗಿರುವುದು ಶೇ.74ರಷ್ಟು ಸಾಧನೆಯಾಗಿದೆ," ಎಂದು ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

"ಕಾಂಗ್ರೆಸ್ ಪಕ್ಷದ ಸಣ್ಣ ಸಮುದಾಯಗಳ ಅಭ್ಯರ್ಥಿಗಳು 50 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಲಿಂಗಾಯತರು ಪ್ರಮುಖ ಪಾತ್ರ ವಹಿಸಿದ್ದಾರೆ. ಆದ್ದರಿಂದ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಹಾಗೂ ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ಕಲ್ಪಿಸಬೇಕು," ಎಂದು ಶಾಮನೂರು ಶಿವಶಂಕರಪ್ಪ ಅವರು ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.
"ಈ ಬಾರಿ ಲಿಂಗಾಯತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಬೆಂಬಲಿಸಿದ್ದರಿಂದ ರಾಜ್ಯದಲ್ಲಿ ಪಕ್ಷ 135 ಕ್ಷೇತ್ರದಲ್ಲಿ ಜಯ ಗಳಿಸಲು ಸಾಧ್ಯವಾಗಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಪಡೆಯಲು ಸಮುದಾಯ ಬೆಂಬಲ ಅಗತ್ಯವಾಗಿದೆ. ಹೀಗಾಗಿ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಹುದ್ದೆ ನೀಡಿ, ಸಚಿವ ಸಂಪುಟದಲ್ಲಿ ಹೆಚ್ಚು ಪ್ರಾತಿನಿಧ್ಯ ನೀಡಬೇಕು," ಎಂದು ಶಾಮನೂರು ಶಿವಶಂಕರಪ್ಪನವರ ಆಗ್ರಹವಾಗಿದೆ.
ಹೈಕಮಾಂಡ್‌ಗೆ ತಲೆನೋವು ತರಿಸಿದ ಉಭಯ ನಾಯಕರ ಪಟ್ಟು
ಕರ್ನಾಟಕ ಮುಖ್ಯಮಂತ್ರಿಯಾಗಲು ಕಾಂಗ್ರೆಸ್‌ನಲ್ಲಿ ಪೈಪೋಟಿ ಜೋರಾಗಿದ್ದು, ಈ ಸಮಸ್ಯೆ ಬಗೆಹರಿಸಲು ಹೈಕಮಾಂಡ್ ನಾಯಕರಿಗೂ ಸಾಧ್ಯವಾಗುತ್ತಿಲ್ಲ. ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ತೀವ್ರ ಪೈಪೋಟಿ ಮತ್ತು ಪಟ್ಟು ಬಿಗಿಗೊಳಿಸಿರುವುದು ಹೈಕಮಾಂಡ್‌ಗೆ ತಲೆನೋವು ತರಿಸಿದೆ.












Click it and Unblock the Notifications