ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫೈ: ಕರ್ನಾಟಕ ಸರ್ಕಾರ ಹೇಳಿದ್ದೇನು
ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫೈ ವಿಷಯದ ಬಗ್ಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಸಲ್ಲಿಸಬೇಕಾದ ಪ್ರಸ್ತಾವನೆ ಕುರಿತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಆಗಸ್ಟ್ 22ರ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವ ಪ್ರಕ್ರಿಯೆ, ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಪ್ರಸ್ತಾವನೆಯಲ್ಲಿರಬೇಕಾದ ಅಗತ್ಯ ದಾಖಲೆಗಳು ಹಾಗೂ ಕೈಗೊಳ್ಳಬೇಕಾದ ಮುಂದಿನ ಕ್ರಮಗಳ ಕುರಿತು ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು. ಕೇಂದ್ರ ಸರ್ಕಾರದ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಯಾವುದೇ ವಿಳಂಬವಾಗದಂತೆ ಅಗತ್ಯ ದಾಖಲೆಗಳು ಹಾಗೂ ಮಾಹಿತಿಯನ್ನು ಸಮಗ್ರವಾಗಿ ಸಿದ್ಧಪಡಿಸಿ, ನಿಯಮಾನುಸಾರ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ವಿಷಯಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಿತು. ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ, ಸಾರ್ವಜನಿಕರಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಅವುಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಇಲಾಖೆಗಳ ನಡುವೆ ಸಮನ್ವಯದೊಂದಿಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಚಿವ ಮಧು ಬಂಗಾರಪ್ಪ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೇಮಂತ್ ಎನ್., ಸಿಸಿಎಫ್ ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


Click it and Unblock the Notifications
