ಬೆಂಕಿ ಹಚ್ಚಿಸ್ತೀನಿ, ಚಪ್ಪಲಿಯಲ್ಲಿ ಹೊಡೆಸ್ತೀನಿ: ಬ್ಯಾನರ್ ವಿಚಾರಕ್ಕೆ ಮಹಿಳಾಧಿಕಾರಿಗೆ ಕಾಂಗ್ರೆಸ್ ಮುಖಂಡ ಧಮ್ಕಿ
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಸಚಿವನ ಪುತ್ರನ ಸಿನಿಮಾ ಫ್ಲೆಕ್ಸ್ ತೆರವುಗೊಳಿಸಿರುವ ವಿಚಾರಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅವರ ಸಿನಿಮಾದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಜ್ ಹಾಕಿದ್ದಾರೆ ಎನ್ನುವ ಆಡಿಯೋ ಹರಿದಾಡುತ್ತಿದೆ.
ಈ ಬಗ್ಗೆ ಜೆಡಿಎಸ್ ಪಕ್ಷ ಹಾಗು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ ಎಂದು ಜೆಡಿಎಸ್ ಪಕ್ಷ ಎಕ್ಸ್‌ನಲ್ಲಿ ಆಡಿಯೋ ಹಂಚಿಕೊಂಡಿದೆ. ಕಾಂಗ್ರೆಸ್ ಸಚಿವ ಜಮೀರ್ ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್‌ಗಳನ್ನ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ ಎಂದು ದೂರಿದೆ.

ಶಿಡ್ಲಘಟ್ಟದ ಕೋಟೆ ಸರ್ಕಲ್ ರಸ್ತೆಗಳಲ್ಲಿ ಅನುಮತಿ ಪಡೆಯದೆ, ಅಕ್ರಮವಾಗಿ ಫ್ಲೆಕ್ಸ್ ಬ್ಯಾನರ್ ಅಳವಡಿಸಿದ್ದಕ್ಕೆ, ಪೌರಾಯುಕ್ತೆ ಅಮೃತಗೌಡ ಅವರು, ರಸ್ತೆಯಲ್ಲಿ ಅಪಘಾತ ಹೆಚ್ಚಿದ್ದು, ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಬ್ಯಾನರ್‌ಗಳನ್ನು ತೆರವುಗೊಳಿಸಿದ್ದಾರೆ. ಇದಕ್ಕೆ ಕಾಂಗ್ರೆಸ್ ಮುಖಂಡ ದೂರವಾಣಿ ಕರೆ ಮಾಡಿ, ಬ್ಯಾನರ್ ತೆಗೆಸಿದವರನ್ನು 'ಬೆಂಕಿ ಹಾಕಿ ಸುಟ್ಟು ಹಾಕುತ್ತೇನೆ, ಚಪ್ಪಲಿಯಲ್ಲಿ ಹೊಡೆಸುತ್ತೇನೆ, ಕಾರ್ಯಕರ್ತರನ್ನು ಕರೆಸಿ ದಂಗೆ ಎಬ್ಬಿಸುತ್ತೇನೆ ಎಂದು ಮಹಿಳಾಧಿಕಾರಿಗೆ ಅಶ್ಲೀಲವಾಗಿ ನಿಂದಿಸಿ ಬೆದರಿಕೆಯೊಡ್ಡಿದ್ದಾನೆ ಎಂದು ಆರೋಪಿಸಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರೇ ಪೌರಾಯುಕ್ತೆಗೆ ಧಮ್ಕಿ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಗೂಂಡಾ ರಾಜೀವ್ ಗೌಡನನ್ನು ತಕ್ಷಣವೇ ಬಂಧಿಸಿ, ಕಾನೂನು ಕ್ರಮ ಜರುಗಿಸಿ. ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಕೆಪಿಸಿಸಿ ರಾಜ್ಯ ಸಂಯೋಜಕನಾಗಿರುವ ಬೀದಿ ರೌಡಿ ರಾಜೀವ್ ಗೌಡನನ್ನು ಮೊದಲು ಪಕ್ಷದಿಂದ ವಜಾ ಮಾಡಿ ಎಂದು ಆಗ್ರಹಿಸಿದೆ.
" @INCKarnataka ದುರಾಡಳಿತದಲ್ಲಿ ಕಾಂಗ್ರೆಸ್ ಮುಖಂಡರ ಗೂಂಡಾಗಿರಿ ಜೋರಾಗಿದೆ.
— Janata Dal Secular (@JanataDal_S) January 14, 2026
ಸಚಿವ @BZZameerAhmedK ಪುತ್ರ ಝೈದ್ ಖಾನ್ ಸಿನಿಮಾದ ಪ್ಲೆಕ್ಸ್ʼಗಳನ್ನು ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯವಾಗಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ… pic.twitter.com/c65czp6k9j
ಪುಡಿರೌಡಿ ವರ್ತನೆ
ರಾಜ್ಯವನ್ನು ಗೂಂಡಾರಾಜ್ಯವನ್ನಾಗಿ ಪರಿವರ್ತಿಸಿರುವ ಈ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ, ಕಾಂಗ್ರೆಸ್ ಮುಖಂಡರುಗಳು ಇದಕ್ಕೆ ತಕ್ಕಂತೆ ಪುಡಿರೌಡಿಗಳಂತೆ ವರ್ತಿಸುತ್ತಿರುವುದು ಆ ಪಕ್ಷದ ಸಂಸ್ಕೃತಿಗೆ ಕನ್ನಡಿ ಹಿಡಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ನಿಯಮಬಾಹಿರವಾಗಿ ಕೃತ್ಯ ಎಸಗಿರುವುದು ಮಾತ್ರವಲ್ಲದೆ ಒಬ್ಬ ಕರ್ತವ್ಯ ನಿರತ ಮಹಿಳಾ ಅಧಿಕಾರಿಯ ಮೇಲೆ ಹೀಗೆ ಅಸಭ್ಯ ಪುಂಡನಂತೆ ವರ್ತಿಸುತ್ತಿರುವುದು ಅಕ್ಷಮ್ಯ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮದೇ ಪಕ್ಷದ ಈ ಮುಖಂಡನ ಈ 'ಗೂಂಡಾ ವರ್ತನೆ'ಗೂ ಕೂಡ ಬಳ್ಳಾರಿಯ ಪ್ರಕರಣದಲ್ಲಿ ವಹಿಸಿದಂತೆ ಇದಕ್ಕೂ ನಿಮ್ಮ 'ಮೌನ' ಸಮ್ಮತಿ ಇದೆಯೇ? ಅಥವಾ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆದೇಶಿಸುತ್ತೀರಾ? ಮಾನ್ಯ ಗೃಹ ಸಚಿವ ಜಿ.ಪರಮೇಶ್ವರ್ ಅವರನ್ನಂತೂ ಕೇಳುವಂತೆಯೇ ಇಲ್ಲ. ಅವರ ಬಳಿ ಮಾಹಿತಿ ಇರುವುದೇ ಇಲ್ಲ. ಪೊಲೀಸ್ ಇಲಾಖೆಯ ಕೈಕಟ್ಟಿ ಹಾಕಿ, ಗೂಂಡಾಗಳಿಗೆ ರಕ್ಷಣೆ ನೀಡುತ್ತಿರುವುದೇ ನಿಮ್ಮ ಸಾಧನೆಯೇ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಧಿಕಾರ ಮದದಿಂದ ಜನಸಾಮಾನ್ಯರ, ಪ್ರಾಮಾಣಿಕ ಅಧಿಕಾರಿಗಳ ಮೇಲೆ ದರ್ಪ ತೋರಿಸುವುದನ್ನು ನೋಡಿಕೊಂಡು ಪಕ್ಷ ಸುಮ್ಮನಿರಲಾಗದು. ಒಬ್ಬ ಮಹಿಳಾ ಅಧಿಕಾರಿ ವಿರುದ್ಧ ದಬ್ಬಾಳಿಕೆ ನಡೆಸುವ ಇಂತಹ ಅಶಿಸ್ತಿನ ನಾಯಕರ ವಿರುದ್ಧ ರಾಜ್ಯ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜನರೇ ರಸ್ತೆಗಿಳಿದು ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಜಯೇಂದ್ರ ಎಚ್ಚರಿಸಿದ್ದಾರೆ.












Click it and Unblock the Notifications