ಕರ್ನಾಟಕ ಜನ ಡಬಲ್ ಎಂಜಿನ್ ಸರ್ಕಾರವನ್ನು ಮುಂದುವರಿಸಬೇಕು: ಶಿವರಾಜ್ ಸಿಂಗ್ ಚೌಹಾಣ್
ಕಲಬುರಗಿ, ಅಕ್ಟೋಬರ್ 30: ಕರ್ನಾಟಕದಲ್ಲಿ ಅನೇಕ ಜನಕಲ್ಯಾಣ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲು ಬಿಜೆಪಿಯನ್ನು ಮತ್ತೆ ಗೆಲ್ಲಿಸಬೇಕು. ರಾಜ್ಯದ ಮತದಾರರು ಡಬಲ್ ಎಂಜಿನ್ ಸರ್ಕಾರವನ್ನು ಮುಂದುವರಿಸಲು ಆರ್ಶೀದಸಿಬೇಕು ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮನವಿ ಮಾಡಿದರು.
ಕಲಬುರಗಿಯಲ್ಲಿ ಭಾನುವಾರ ಬಿಜೆಪಿ ಒಬಿಸಿ ಮೋರ್ಚಾ ವಿರಾಟ್ ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶವು ಸರ್ವತೋಮುಖ ಅಭಿವೃದ್ಧಿ ಸಾಧಿಸಿದೆ. ಧರ್ಮಕ್ಕೆ ಹಾನಿ ಆದಾಗ ಮತ್ತು ಅಧರ್ಮ ಹೆಚ್ಚಾದಾಗ ಮತ್ತೆ ಬರುವುದಾಗಿ ಭಗವಾನ್ ಕೃಷ್ಣ ಹೇಳಿದ್ದು ನೆನಪಿಗೆ ಬರುತ್ತದೆ. ಅದೇ ಮಾದರಿಯಲ್ಲಿ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಮೃದ್ಧ ಭಾರತ ನಿರ್ಮಾಣವಾಗುತ್ತಿದೆ ಎಂದು ಹೇಳಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಹಾಗಿದ್ದರೆ ಭಾರತವನ್ನು ವಿಭಜಿಸಿದ್ದು ನೆಹರೂ ಎಂಬುದು ನಿಮಗೆ ಗೊತ್ತಿಲ್ಲವೇ ಎಂದು ರಾಹುಲ್ ರನ್ನು ಪ್ರಶ್ನಿಸಿದರು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬುದಕ್ಕೆ ಇಲ್ಲಿನ ಜನಸಮುದ್ರವೇ ಸಾಕ್ಷಿ. ಚಿಂಚೋಳಿಗೆ ಬಂದು ಹಿಂತಿರುಗಿದ ಬಳಿಕ ನನಗೆ ನಾಲ್ಕನೇ ಬಾರಿ ಸಿಎಂ ಹುದ್ದೆ ಸಿಕ್ಕಿದೆ ಎಂದು ಅವರು ಸ್ಮರಿಸಿದರು.

ಬಿಜೆಪಿಯಲ್ಲಿ ಸಾಮಾನ್ಯ ಪರಿವಾರದವರು ಪಿಎಂ ಆಗುತ್ತಾರೆ
ಬಿಜೆಪಿಯಲ್ಲಿ ಸಾಮಾನ್ಯ ಪರಿವಾರದಿಂದ ಬಂದವರು ಸಹ ದೇಶದ ಪ್ರಧಾನಿಯಾಗುತ್ತಾರೆ. ಇನ್ನೊಂದೆಡೆ ಕಾಂಗ್ರೆಸ್ ಕೇವಲ ಪರಿವಾರದ ಪಕ್ಷವಾಗಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಬಲಿಪಶುವಾಗಲು ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಪಕ್ಷದೊಳಗೆ ಸಾಕಷ್ಟು ಒಳಜಗಳವಿದೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಲಿಕಾರ್ಜುನ್ ನಡುವೆ ಕಾಂಗ್ರೆಸ್ ಪಕ್ಷ ಹಂಚಿಹೋಗಿದೆ ಎಂದು ಅವರು ವಿಶ್ಲೇಷಿಸಿದರು.

ಕಾಂಗ್ರೆಸ್ ಏಕೆ ಒಬಿಸಿ ಕಲ್ಯಾಣಕ್ಕೆ ಯತ್ನಿಸಲಿಲ್ಲ
ಒಬಿಸಿ ಕಲ್ಯಾಣಕ್ಕಾಗಿ ಕಾಂಗ್ರೆಸ್ ಯಾಕೆ ಪ್ರಯತ್ನ ಮಾಡಲಿಲ್ಲ. ಮೊರಾರ್ಜಿ ದೇಸಾಯಿ ಅವರು ಪ್ರಧಾನಿ ಆಗಿದ್ದ ಸಂದರ್ಭದಲ್ಲಿ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ. ಅಡ್ವಾಣಿ ಅವರು ಸಚಿವರಾಗಿದ್ದಾಗ ಹಿಂದುಗಳಿದ ವರ್ಗಗಳ (ಒಬಿಸಿ) ಅಭಿವೃದ್ಧಿಗೆ ಶ್ರಮಿಸಿದ್ದರು. ಇದೀಗ ಒಬಿಸಿಗೆ ಸಾಂವಿಧಾನಿಕ ಆಯೋಗ ರಚನೆ ಮಾಡಿದ ಪ್ರಧಾನಿ ಮೋದಿ ಅವರಿಗೆ ಅಭಿನಂದನೆಗಳು ಎಂದರು.

ವಿವಿಧ ಕ್ಷೇತ್ರಗಳಲ್ಲಿ ಮೀಸಲಾತಿ ಹೆಚ್ಚಿಸಿದ ಪ್ರಧಾನಿ
ವೈದ್ಯಕೀಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ಮೀಸಲಾತಿ ಹೆಚ್ಚಿಸಿದ ಕೀರ್ತಿ ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆ. ಮಹಾರಾಷ್ಟ್ರದಲ್ಲಿ ಶಿವಸೇನೆ- ಗ್ರೆಸ್ ಅಧಿಕಾರದಲ್ಲಿದ್ದಾಗ ಒಬಿಸಿ ಮೀಸಲಾತಿಗೆ ವಿರುದ್ಧವಾಗಿ ಕೆಲಸ ಮಾಡಿತ್ತು. ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ವರ್ಗಗಳ ಕಲ್ಯಾಣ ಕಾರ್ಯಗಳನ್ನು ಕೈಗೊಂಡಿದ್ದಾರೆ. ಇದೇ ಎಲ್ಲ ಅಭಿವೃದ್ಧಿ ಕೆಲಸಗಳು ಸಿದ್ದರಾಮಯ್ಯರ ಅವಧಿಯಲ್ಲಿ ಕನಸಾಗಿಯೇ ಉಳಿದಿದ್ದವು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿಯಿಂದ ಒಬಿಸಿ ಪರವಾಗಿ ಕೆಲಸ
ಬಿಜೆಪಿಯಲ್ಲಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರು ಶಿಕ್ಷಣ, ಉದ್ಯೋಗ ಸೃಷ್ಟಿ, ಬಜೆಟ್‌ನಲ್ಲಿ ಅನುದಾನ ಹೆಚ್ಚಳ ವಿಚಾರದಲ್ಲಿ ಒಬಿಸಿ ಪರವಾಗಿ ಕೆಲಸ ಮಾಡಿದ್ದಾರೆ. ಮಧ್ಯ ಪ್ರದೇಶದಲ್ಲಿ ಉಮಾಶ್ರೀ, ಬಾಬುಲಾಲ್ ಗೌರ್ ಒಬಿಸಿ ಸಮುದಾಯದಿಂದ ಮುಖ್ಯಮಂತ್ರಿ ಆಗಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷದಿಂದ ಒಬಿಸಿ ವರ್ಗದ ನಾಯಕರಿಗೆ ಇಂತಹ ಮಹತ್ತರ ಅವಕಾಶ ಸಿಕ್ಕಿಲ್ಲ ಎಂದು ಹೇಳಿದರು.
ಮತಾಂತರ ವಿರುದ್ಧ ಕಾನೂನು ಮಾಡಿದ್ದೇವೆ. ಕರ್ನಾಟಕದಲ್ಲಿ ಗೋಹತ್ಯಾ ನಿಷೇಧದ ಕಾನೂನು ಜಾರಿಯಾಗಿದೆ. ಪಿಎಫ್‍ಐ ಆತಂಕವಾದಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್ ಬೆಂಬಲ ಕೊಟ್ಟಿತ್ತು. ಆದರೆ ಬಿಜೆಪಿ ಪಿಎಫ್‍ಐ ನಿಷೇಧಿಸಿದ್ದೇವೆ.
ಆತಂಕವಾದಿಗಳು, ದೇಶದ್ರೋಹಿಗಳನ್ನು ನಾವು ಸಹಿಸುವುದಿಲ್ಲ ಎಂದು ಎಚ್ಚರಿಸಿದರು. ಕರ್ನಾಟಕದಲ್ಲಿ 2023ರಲ್ಲಿ ಬಿಜೆಪಿ ಗೆಲ್ಲಲಿದೆ. ಅಲ್ಲದೆ, 2024ರಲ್ಲಿ ಮೋದಿಯವರು ಮತ್ತೆ ಗೆದ್ದು ಪ್ರಧಾನಿ ಹುದ್ದೆ ಅಲಂಕರಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಒಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ.ಲಕ್ಷ್ಮಣ್, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ. ನರೇಂದ್ರಬಾಬು ಮತ್ತಿತರ ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications