ವೈದ್ಯರು, ಸಿಬ್ಬಂದಿ ಕೊರತೆ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜನವರಿ 10: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ 16 ಸಾವಿರಕ್ಕೂ ಅಧಿಕ ವೈದ್ಯಕೀಯ ಸಿಬ್ಬಂದಿಯ ಹುದ್ದೆಗಳು ಖಾಲಿ ಇರುವುದು ಹಾಗೂ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯಗಳ ಕೊರತೆ ವಿಚಾರವನ್ನು ಕರ್ನಾಟಕ ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
ಮಾಧ್ಯಮದಲ್ಲಿ ಬಂದ ವರದಿ ಆಧರಿಸಿ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಕೋರ್ಟ್ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆದೇಶಿಸಿದೆ.
ಪಿಐಎಲ್ ಅನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಜ್ಯ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ, ವಿಚಾರಣೆ ಮುಂದೂಡಿದೆ.

ಅಲ್ಲದೆ, ರಾಜ್ಯದಲ್ಲಿ ಮಂಜೂರಾಗಿರುವ ಎಲ್ಲ ವೈದ್ಯಕೀಯ ಸಿಬ್ಬಂದಿಯನ್ನು ಭರ್ತಿ ಮಾಡಬೇಕು. ಜತೆಗೆ, ಅಗತ್ಯ ವೈದ್ಯಕೀಯ ಪರಿಕರಗಳನ್ನು ಖರೀದಿ ಮಾಡುವುದಕ್ಕೆ ಬಜೆಟ್‌ನಲ್ಲಿ ಮೀಸಲಿಡಬೇಕು. ಗ್ರಾಮೀಣ ಭಾಗಗಳಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಳವಾಗುತ್ತಿದ್ದು, ವೈದ್ಯರ ಕೊರತೆಯಿಂದ ಗ್ರಾಮಗಳ ಜನ ಸಂಕಷ್ಟಕ್ಕೆ ಸಿಲುಕುವಂತಾಗಲಿದೆ. ಆದ್ದರಿಂದ ಸಿಬ್ಬಂದಿ ನೇಮಕ ಮಾಡಬೇಕು ಎಂದು ನಿರ್ದೇಶನ ನೀಡುವಂತೆ ಕೋರಲಾಗಿದೆ.
ಪ್ರಕರಣದ ಹಿನ್ನೆಲೆ: ಭಾರತೀಯ ವಾಣಿಜ್ಯೋದ್ಯಮ ಮಹಾ ಸಂಘಗಳ ಒಕ್ಕೂಟ 2023ರ ಅಕ್ಟೋಬರ್ 11ರಂದು ವರದಿ ಕರ್ನಾಟಕ ವಿಷನ್ ಅಡಿಯಲ್ಲಿ 1 ಟ್ರಿಲಿಯನ್ ಆರ್ಥಿಕತೆ ವರದಿಯ ಬಿಡುಗಡೆ ಮಾಡಿದೆ. ಈ ವರದಿಯಲ್ಲಿ 454 ಗ್ರಾಮೀಣ ಭಾಗದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಇದರಿಂದ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆ ಲಭ್ಯವಾಗಬೇಕಿದೆ.
ರಾಜ್ಯದಲ್ಲಿ 723 ಎಂಬಿಬಿಎಸ್ ವೈದ್ಯರು, 7492 ಶುಶ್ರೂಷಕಿಯರು, 1517 ಲ್ಯಾಬ್ ಟೆಕ್ನಿಷಯನ್ಸ್, 1517 ಫಾರ್ಮಸಿ ಸಿಬ್ಬಂದಿ, 1752 ಸಹಾಯಕರು 3253 ಗ್ರೂಪ್ ಡಿ ನೌಕರರು ಸೇರಿ ಹಲವು ಸಿಬ್ಬಂದಿ ಕೊರತೆಯಿದೆ ಎಂದು ಪ್ರಕಟವಾಗಿದೆ.
ಇದರಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಹೀಗಾಗಿ ಅರ್ಜಿ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸೂಚನೆ ನೀಡಿತ್ತು.












Click it and Unblock the Notifications