Siddaganga Matha: "ಲಕ್ಷಾಂತರ ಬಡ ಮಕ್ಕಳ ಜೀವನ ರೂಪಿಸಿದ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ"

ಲಕ್ಷಾಂತರ ಬಡ ಮಕ್ಕಳ ಜೀವನ ರೂಪಿಸಿದ ಸಿದ್ಧಗಂಗಾ ಮಠದ ಕೊಡುಗೆ ಅನನ್ಯ ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ. ಸ್ವಾತಂತ್ರ್ಯ ನಂತರ ಶಿಕ್ಷಣ ಕ್ರಾಂತಿಯಿಂದ ಭಾರತವು ಸ್ವಾವಲಂಬಿ ದೇಶವಾಗಿ ಜಗತ್ತಿನ ಬಲಿಷ್ಠ ರಾಷ್ಟ್ರಗಳ ಸಾಲಿನಲ್ಲಿ ನಿಂತಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.

80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ತುಮಕೂರಿನ ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಪರಮಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ಆಶೀರ್ವಾದ ಪಡೆದು, ಮಠದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ಆರಂಭದಲ್ಲಿ ಊಟಕ್ಕೂ ತೊಂದರೆಯಿದ್ದ ಪರಿಸ್ಥಿತಿ ಇತ್ತು. ಆದರೆ ಇಂದು ಆಹಾರ ಉತ್ಪಾದನೆ, ತಂತ್ರಜ್ಞಾನ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ಮೂಲಕ ಭಾರತವು ವಿಶ್ವದಲ್ಲೇ ಅತ್ಯಂತ ದೊಡ್ಡ ಸಾಧನೆ ಮಾಡಿದೆ. ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ದೇಶವಾಗಿ ಬೆಳೆದಿದ್ದು, ಪ್ರತಿಯೊಬ್ಬರಿಗೂ ಶಿಕ್ಷಣ ನೀಡಬೇಕೆಂಬ ನಮ್ಮ ಪೂರ್ವಜರ ಕನಸು ಸಾಕಾರಗೊಂಡಿದೆ ಎಂದು ಹೇಳಿದರು.

Siddaganga Matha

ಯುವಶಕ್ತಿಯೇ ದೇಶದ ಆಸ್ತಿ

ನಮ್ಮ ದೇಶದಲ್ಲಿ 35 ವರ್ಷ ವಯೋಮಿತಿಯೊಳಗಿನ ಯುವಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಜಾತಿ, ಧರ್ಮ, ಬಣ್ಣ ಹಾಗೂ ಭಾಷೆಯ ತಾರತಮ್ಯವಿಲ್ಲದೆ ಎಲ್ಲರೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ನಿರುದ್ಯೋಗಿ ಯುವಕರಿಗೆ ಸೂಕ್ತ ಕೌಶಲ್ಯ ತರಬೇತಿ ಹಾಗೂ ಬೆಂಬಲ ನೀಡಿ ಅವರನ್ನು ದೇಶದ ಅಭಿವೃದ್ಧಿಗೆ ಬಳಸುವುದು ನಮ್ಮ ಕರ್ತವ್ಯವಾಗಿದೆ ಎಂದರು.

ಶ್ರೀ ಸಿದ್ಧಗಂಗಾ ಮಠವು ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಅವರ ಜೀವನ ರೂಪಿಸಿದೆ. ಮಠದಲ್ಲಿ ಅಕ್ಷರ ಕಲಿತ ಮಕ್ಕಳು ಇಂದು ವಿಶ್ವದಾದ್ಯಂತ ಉನ್ನತ ಹುದ್ದೆಗಳನ್ನು ಅಲಂಕರಿಸಿ, ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಿದ್ದಾರೆ. ಪರಮಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳು ಭೌತಿಕವಾಗಿ ನಮ್ಮನ್ನು ಅಗಲಿದ್ದರೂ, ಅವರು ಸಮಾಜಕ್ಕೆ ನೀಡಿದ ತತ್ವಾದರ್ಶಗಳ ಮೂಲಕ ಶಾಶ್ವತವಾಗಿ ನಮ್ಮೊಂದಿಗಿದ್ದಾರೆ. ಶ್ರೀಗಳು ಹಾಕಿಕೊಟ್ಟ ದಾರಿಯಲ್ಲೇ ಸಿದ್ಧಲಿಂಗ ಸ್ವಾಮೀಜಿಗಳು ಶ್ರೀಮಠವನ್ನು ಮುನ್ನಡೆಸುತ್ತಿದ್ದಾರೆ. ಶ್ರೀಮಠವು ಹೀಗೆಯೇ ಸಮಾಜ ಸೇವೆಯನ್ನು ಮುಂದುವರಿಸಿ ದೇಶಕ್ಕೆ ಮತ್ತಷ್ಟು ಕೊಡುಗೆ ನೀಡಲಿ ಎಂದು ಆಶಿಸಿದರು.

ಮುಂದುವರಿದು ಬ್ರಿಟೀಷರಿಂದ ಸ್ವತಂತ್ರಗೊಂಡ ಭಾರತ ಹಲವು ಬದಲಾವಣೆಗಳನ್ನು ಕಂಡಿದೆ. ಹಲವು ಸಾಧನೆಗಳಿಗೆ ಸಾಕ್ಷಿಯಾಗಿ ವಿಶ್ವ ಭೂಪಟದಲ್ಲಿ ಗಮನ ಸೆಳೆದು ಮಂಚೂಣಿ ರಾಷ್ಟ್ರಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಡೀ ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠ ಪ್ರಜಾಪ್ರಭುತ್ವ ಸಂವಿಧಾನವನ್ನು ಭಾರತ ಹೊಂದಿದೆ ಎಂದರು.

ಕೈಗಾರಿಕೆ, ತಂತ್ರಜ್ಞಾನ, ಕೃಷಿ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿ ವಿಶ್ವದ ಗಮನ ಸೆಳೆದಿದೆ. ಇಂತಹ ಸ್ವತಂತ್ರ ಭಾರತದ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿಯಾಗಿ, ಕಂದಾಯ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವನಾಗಿ, ತುಮಕೂರು ಜಿಲ್ಲೆಯ ಉಸ್ತುವಾರಿ ಸಚಿವನಾಗಿ 80ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಅತ್ಯಂತ ಖುಷಿ ಮತ್ತು ಸಂಭ್ರಮದಿಂದ ನೆರವೇರಿಸಿದ್ದೇನೆ ಎಂದರು.

ಭಾರತಕ್ಕೆ ಸ್ವಾತಂತ್ರ್ಯ ಸುಲಭದ ಹಾದಿಯಾಗಿರಲಿಲ್ಲ ಎಂಬುದನ್ನು ನಾವು ಭಾರತದ ಇತಿಹಾಸದಿಂದ ತಿಳಿದಿದ್ದೇವೆ. ಕೇವಲ ವ್ಯಾಪಾರದ ನೆಪದಲ್ಲಿ ಭಾರತಕ್ಕೆ ಬಂದ ಪರಕೀಯರು ನಮ್ಮ ದೇಶದ ಸಂಪತ್ತನ್ನು ಲೂಟಿ ಮಾಡಿದ್ದಲ್ಲದೆ, ನಮ್ಮ ಭಾರತದಲ್ಲಿನ ದೌರ್ಬಲ್ಯಗಳನ್ನು ಬಂಡವಾಳವಾಗಿಸಿಕೊಂಡು ನೂರಾರು ವರ್ಷಗಳ ಕಾಲ ನಮ್ಮನ್ನು ಆಳಿದ್ದು ದುರ್ದೈವದ ಸಂಗತಿ. ದೇಶ ಗುಲಾಮಗಿರಿಯ ದಾಸ್ಯದಿಂದ ಮುಕ್ತಿ ಹೊಂದಲು ಪರಕೀಯರ ವಿರುದ್ಧ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಿಂದ 1947ರವರೆಗೆ ನಡೆದ ಹೋರಾಟದಲ್ಲಿ ಅನೇಕ ಮಹನೀಯರು ತಮ್ಮ ಪ್ರಾಣತ್ಯಾಗ ಮಾಡಿ ನಮ್ಮೆಲ್ಲರ ಸ್ಮೃತಿಪಟಲದಲ್ಲಿ ಅಜರಾಮರರಾಗಿದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+