Prajwal Revanna Case: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ರಕ್ಷಣೆಗೆ ನಿಂತಿದೆ; ಸಿಎಂ ಸಿದ್ದರಾಮಯ್ಯ
ಕೇಂದ್ರ ಬಿಜೆಪಿ ಸರ್ಕಾರ ಪ್ರಜ್ವಲ್ ರೇವಣ್ಣ ರಕ್ಷಣೆಗೆ ನಿಂತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದು, ಎಲ್ಲಾ ಗೊತ್ತಿದ್ದೆ ಬಿಜೆಪಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.
ಅತ್ಯಾಚಾರ, ಕೊಲೆ ಬೆದರಿಕೆಯಂತಹ ಗಂಭೀರ ಸ್ವರೂಪದ ಪ್ರಕರಣಗಳಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರ ರಕ್ಷಣೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಕೀಲರ ಜೊತೆ ಚರ್ಚೆ ನಡೆಸಿರುವುದು ನಾಚಿಕೆಗೇಡು ಎಂದು ಹೇಳಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎನ್ನುವವರೂ ಅವರೇ, ಆರೋಪಿಯ ರಕ್ಷಣೆಗೆ ನಿಂತಿರುವವರೂ ಅವರೇ ಎಂದಿದ್ದಾರೆ.

ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಹಂಚಿಕೊಂಡಿರುವ ಅವರು ಪ್ರಜ್ವಲ್ ದೇಶ ತೊರೆಯಲು ಕೇಂದ್ರ ಸರ್ಕಾರ ನೆರವು ನೀಡಿದೆ ಎಂದು ಆರೋಪಿಸಿದ್ದಾರೆ. "ಅಂತಾರಾಷ್ಟ್ರೀಯ ಪ್ರಯಾಣ ಮಾಡುವಾಗ ಎಲ್ಲರ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಬಿಜೆಪಿ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ" ಎಂದಿದ್ದಾರೆ.
ಪ್ರಜ್ವಲ್ ರೇವಣ್ಣ ದುಬೈ ಬಿಟ್ಟು ಇನ್ನು ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಕೃತ್ಯದ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ನೀಡಲು ಸೂಚಿಸಿದ್ದೇನೆ. ವಿಪರ್ಯಾಸವೆಂದರೆ ಕೇಂದ್ರ ಬಿಜೆಪಿ ಸರ್ಕಾರ ಆರೋಪಿಯ ರಕ್ಷಣೆಗೆ ನಿಂತಿದೆ ಎಂದಿದ್ದಾರೆ.
ಪಾಪ ಕೃತ್ಯಗಳನ್ನು ಒಟ್ಟಿಗೆ ಮಾಡುತ್ತಾರೆ
ತಮಗೂ ರೇವಣ್ಣನ ಕುಟುಂಬಕ್ಕೂ ಸಂಬಂಧವಿಲ್ಲ ಎನ್ನುತ್ತಿದ್ದ ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದರು. ರಾಜಕೀಯ ಹಾಗೂ ಪಾಪ ಕೃತ್ಯಗಳನ್ನು ಅವರೆಲ್ಲರೂ ಒಟ್ಟಿಗೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಲೆ ನಡೆದ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ. ನೊಂದ ಕುಟುಂಬಕ್ಕೆ ನ್ಯಾಯ ಕೊಡಿಸಲು ಒಂದು ಸರ್ಕಾರವಾಗಿ ನಾವು ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದೇವೆ ಎಂದರು.












Click it and Unblock the Notifications