Siddaramaiah: ಚುನಾವಣಾ ರಾಜಕೀಯಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ನಿವೃತ್ತಿ ಘೋಷಣೆ
ಮಂಡ್ಯ, ಜುಲೈ 26: ರಾಜ್ಯದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದಾರೆ. ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ನಿರ್ಧಾರವನ್ನು ಘೋಷಿಸಿದ್ದಾರೆ.
ಸಿದ್ದರಾಮಯ್ಯ ಅವರು ಈ ಘೋಷಣೆ ಮಾಡುತ್ತಿದ್ದಂತೆ ಅಭಿಮಾನಿಗಳು ಚುನಾವಣಾ ರಾಜಕೀಯದಲ್ಲಿ ಇರುವಂತೆ ಮನವಿ ಮಾಡಿದ್ದಾರೆ. ಆದರೂ 2028ರ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ 2028ಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ರವಾನೆ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ. ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸಿದರು. ಆದರೆ ನಾನು ಇನ್ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡು ಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ ಇಂದು ಅಂತಹ ಪರಿಸ್ಥಿತಿ ಇಲ್ಲ ಎಂದು ಹೇಳಿದರು.
'ಸಿದ್ಧಾಂತದ ವಿರುದ್ಧ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ'
'ಈಗ ನನಗೆ 79 ವರ್ಷ, ನಮ್ಮ ಸರ್ಕಾರದ ಅವಧಿ ಇನ್ನು ಒಂದೂವರೆ ವರ್ಷ ಇದೆ. ಆಗ ನನಗೆ 81-82 ವರ್ಷ ಆಗಿರುತ್ತದೆ. ಈಗಿನಂತೆ ಆರೋಗ್ಯವೂ ಸದೃಢವಾಗಿ ಇರುವುದಿಲ್ಲ. ಹಿಂದಿನಂತೆ ಉತ್ಸಾಹದಿಂದ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. 2028ರ ವೇಳೆಗೆ ನನಗೆ 82 ವರ್ಷವಾಗಿರುತ್ತದೆ. ಆಗ ನನ್ನ ರಾಜಕೀಯ ಜೀವನಕ್ಕೆ 50 ವರ್ಷಗಳು ಪೂರ್ಣಗೊಳ್ಳುತ್ತದೆ. 1978ರಲ್ಲಿ ನಾನು ತಾಲೂಕು ಮಂಡಳಿ ಸದಸ್ಯನಾಗಿ ರಾಜಕೀಯ ಜೀವನ ಆರಂಭಿಸಿದ್ದೆ. ಸೋಲು - ಗೆಲುವು ಎಲ್ಲವನ್ನೂ ಕಂಡಿದ್ದೇನೆ. ಆದರೆ ನಂಬಿದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದಿಲ್ಲ, ಆತ್ಮಸಾಕ್ಷಿಗೆ ದ್ರೋಹ ಬಗೆದಿಲ್ಲ ಎನ್ನುವ ಸಂತೃಪ್ತಿ ನನಗಿದೆ,' ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡು ಕೊಡಬೇಕಾದ ಕಾಲ ಬಂದಿದೆ. ಇಂದು ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ್ಲ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿದ್ದೇನೆ. ಐದು ದಶಕಗಳ ಕಾಲ ರಾಜ್ಯದ ಜನತೆ ನನ್ನನ್ನು ತಮ್ಮಲ್ಲೊಬ್ಬ ಎಂಬಂತೆ ಕಂಡಿದ್ದಾರೆ, ಪ್ರೀತಿಯಿಂದ ಸಲಹಿದ್ದಾರೆ. ಈ ಋಣಭಾರ ನನ್ನ ಮೇಲಿದೆ. ಹೀಗಾಗಿ ನನ್ನ ಮುಂದಿನ ಜೀವನ ಸಹ ಜನಸೇವೆಗೆ ಮುಡಿಪಾಗಿರುತ್ತದೆ,' ಎಂದು ತಿಳಿಸಿದ್ದಾರೆ.


Click it and Unblock the Notifications
