ಅರಸು ದಾಖಲೆ ಬ್ರೇಕ್ ಮಾಡಿದ ಸಿದ್ದರಾಮಯ್ಯ ಆಡಳಿತ ವೈಖರಿಯೇ ಬೇರೆ: ಬಿ ಎಸ್ ಯಡಿಯೂರಪ್ಪ ಹೇಳಿದ್ದೇನು?
ಬೆಂಗಳೂರು: ಮುಖ್ಯಮಂತ್ರಿಯಾಗಿ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಮುರಿದಿದ್ದು, ಮುಖ್ಯಮಂತ್ರಿಯಾಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. 7 ವರ್ಷ 7 ತಿಂಗಳು 20 ದಿನಗಳ ಕಾಲ ದೇವರಾಜ ಅರಸು ಸಿಎಂ ಆಗಿದ್ದರು. ಇದೀಗ ದೇವರಾಜ ಅರಸು ದಾಖಲೆಯನ್ನು ಸಿದ್ದರಾಮಯ್ಯ ಬ್ರೇಕ್ ಮಾಡಿದ್ದಾರೆ. ಅರಸು ದಾಖಲೆ ಬ್ರೇಕ್ ಮಾಡಿದ ಸಿದ್ದರಾಮಯ್ಯ ಅವರ ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಬಿ ಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯಿಸಿದ್ದಾರೆ.
ಇಂದು(ಬುಧವಾರ) ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಬಿ ಎಸ್ ಯಡಿಯೂರಪ್ಪ ಅವರು ಮಾತನಾಡಿ, ದೇವರಾಜ ಅರಸು ಅವರ ಆಡಳಿತ ವೈಖರಿಯೇ ಬೇರೆ; ಇವರ ಆಡಳಿತ ವೈಖರಿಯೇ ಬೇರೆ. ಅವರ ಜೊತೆ ಇವರನ್ನು ಹೋಲಿಸಲಾಗದು ಎಂದರು. ಈ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಈ ಸಂದರ್ಭದಲ್ಲಿ ಸಮಾವೇಶದ ಮೂಲಕ ಸಾಧನೆ ಮಾಡುವುದಾಗಿ ಹೊರಟಿರುವುದನ್ನು ಜನರು ಮೆಚ್ಚುವುದಿಲ್ಲ. ಈಗಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಪಡೆಯುತ್ತಿದೆ ಎಂದು ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ಬಿಜೆಪಿ ವಿಶೇಷವಾದ ಗಮನ ಕೊಡಲಿದೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಸಂಘಟನೆಯನ್ನು ಬಲಪಡಿಸುವ ದೃಷ್ಟಿಯಿಂದ ಇವತ್ತಿನಿಂದ ರಾಜ್ಯಾಧ್ಯಕ್ಷರು ಮತ್ತು ಎಲ್ಲ ಪ್ರಮುಖರು ಸೇರಿ ಪ್ರತಿ ಜಿಲ್ಲಾ ಪ್ರಮುಖರ ಸಮಾವೇಶವನ್ನು ಮಾಡುತ್ತಿದ್ದೇವೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಬಗ್ಗೆಯೂ ಚರ್ಚಿಸುತ್ತಿದ್ದೇವೆ. ಈ ಸರಕಾರದ ದುರಾಡಳಿತವನ್ನು ಜನರ ಗಮನಕ್ಕೆ ತರುವ ಮೂಲಕ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ಕಡೆ ವಿಶೇಷವಾದ ಗಮನ ಕೊಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ಮುಂದಿನ ಚುನಾವಣೆಯಲ್ಲೂ ನಾವು ನಿಶ್ಚಿತವಾಗಿ ದೊಡ್ಡ ಬಹುಮತದೊಂದಿಗೆ ಬಿಜೆಪಿ ಸರಕಾರ ರಚಿಸಬೇಕೆಂಬ ದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ. ನಮ್ಮ ಕಾರ್ಯಕರ್ತರೂ ತುಂಬ ಉತ್ಸಾಹದಿಂದ ಮುಂದೆ ಬಂದಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದನ್ನು ತಾವು ಗಮನಿಸಲಿದ್ದೀರಿ ಎಂದು ಗೆಲ್ಲುವ ವಿಶ್ವಾಸವನ್ನ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ವ್ಯಕ್ತಪಡಿಸಿದರು.












Click it and Unblock the Notifications