Siddaramaiah: ಸ್ಟಿಂಗ್ ಆಪರೇಷನ್: ವಿಡಿಯೋ ತುಣುಕುಗಳ ಪ್ರಸಾರಕ್ಕೆ ತಡೆ ಕೋರಿ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ತಮ್ಮ ಹೆಸರನ್ನು ಜೋಡಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಸಿದ್ದರಾಮಯ್ಯ, ವಿಡಿಯೋ ಪ್ರಕಟಣೆ ಹಾಗೂ ಪ್ರಸಾರಕ್ಕೆ ತಡೆ ನೀಡುವಂತೆ ಕೋರಿ ಬೆಂಗಳೂರು ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

Siddaramaiah: ಚಾರಿತ್ರ್ಯಹನನ ಮಾಡುವ ಪ್ರಯತ್ನ
ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಸ್ಟಿಂಗ್ ಆಪರೇಷನ್ ವಿಡಿಯೋ ಹರಿದಾಡುತ್ತಿದೆ. ಈ ವಿಡಿಯೋಗೆ ತಮ್ಮ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಸಲಾಗುತ್ತಿದ್ದು, ಇದು ರಾಜಕೀಯ ದುರುದ್ದೇಶದಿಂದ ತಮ್ಮ ಚಾರಿತ್ರ್ಯಹನನ ಮಾಡುವ ಪ್ರಯತ್ನದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.
ಈ ಸ್ಟಿಂಗ್ ಆಪರೇಷನ್ ವಿಡಿಯೋಗೂ ತಮಗೂ ಯಾವುದೇ ಸಂಬಂಧವಿಲ್ಲ. ಆದರೂ ಕೆಲವರು ಇದನ್ನು ಬಳಸಿಕೊಂಡು ತಮ್ಮ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಹೆಸರಿನ ಉಲ್ಲೇಖವಿರುವ ವಿಡಿಯೋವನ್ನು ಯಾವುದೇ ಪತ್ರಿಕೆ, ಸುದ್ದಿ ವಾಹಿನಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸದಂತೆ ಹಾಗೂ ಪ್ರಸಾರ ಮಾಡದಂತೆ ತಡೆಯಾಜ್ಞೆ ನೀಡಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಐದು ದಶಕಗಳ ರಾಜಕೀಯ ಜೀವನದ ಬಗ್ಗೆ ವಿಶ್ವಾಸ
ಈ ಪ್ರಕರಣದಲ್ಲಿ ತಾವು ಸಂಪೂರ್ಣ ನಿರಪರಾಧಿ ಎಂಬುದು ತಮ್ಮ ಆತ್ಮಸಾಕ್ಷಿಗೆ ತಿಳಿದಿದೆ. ತೆರೆದ ಪುಸ್ತಕದಂತಿರುವ ತಮ್ಮ ಐದು ದಶಕಗಳ ರಾಜಕೀಯ ಜೀವನದ ಬಗ್ಗೆ ತಿಳಿದಿರುವ ರಾಜ್ಯದ ಜನತೆಗೂ ಇದು ಗೊತ್ತಿದೆ ಎಂಬ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುಳ್ಳನ್ನು ಸತ್ಯವೆಂದು ಬಿಂಬಿಸುವುದು ಸುಲಭವಾಗಿದೆ. ಹೀಗಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ನ್ಯಾಯಾಲಯದ ಮೊರೆ ಹೋಗಿದ್ದೇನೆ. ಇದನ್ನು ಹೊರತುಪಡಿಸಿ ತಮಗೆ ಯಾವುದೇ ಭಯವಿಲ್ಲ. ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂಬ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.
ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ವಿಷಾದ
ತಾವು ಅಭಿವ್ಯಕ್ತಿ ಸ್ವಾತಂತ್ರ್ಯದ ಪರವಾಗಿದ್ದು, ತಮ್ಮ ರಾಜಕೀಯ ಜೀವನದಲ್ಲಿ ಎಂದಿಗೂ ಮಾಧ್ಯಮಗಳ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿಪಡಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಕೆಲವು ಮಾಧ್ಯಮಗಳು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ನ್ಯಾಯಾಲಯದ ಮೂಲಕ ಪ್ರಕಟಣೆ ಮತ್ತು ಪ್ರಸಾರಕ್ಕೆ ತಡೆಯಾಜ್ಞೆ ಕೋರುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ವಿಷಾದವಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಆಯುಕ್ತರಿಗೂ ದೂರು
ಸ್ಟಿಂಗ್ ಆಪರೇಷನ್ ವಿಡಿಯೋ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಈಗಾಗಲೇ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.
ತನಿಖೆಯ ಸತ್ಯಾಂಶಗಳು ಬಹಿರಂಗವಾಗುವವರೆಗೆ ಮಾಧ್ಯಮಗಳು ಮಾತ್ರವಲ್ಲದೆ ಸಾರ್ವಜನಿಕರೂ ಇಂತಹ ಸುದ್ದಿಗಳನ್ನು ಪರಿಶೀಲಿಸದೆ ಅನಗತ್ಯವಾಗಿ ಪ್ರಚಾರ ಮಾಡಬಾರದು. ಸತ್ಯದ ಪರವಾಗಿ ನಿಲ್ಲಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.


Click it and Unblock the Notifications
