ಹಳೆ ಮೈಸೂರು ಭಾಗದ ಮುಖಂಡರೊಂದಿಗೆ ಸಿದ್ದರಾಮಯ್ಯ ಸಭೆ
ಬೆಂಗಳೂರು, ಜನವರಿ 31: ಲೋಕಸಭೆ ಚುನಾವಣೆ ಸೀಟು ಹಂಚಿಕೆ ಮುನ್ನಾ ಕ್ಷೇತ್ರವಾರು ಮುಖಂಡರ, ಶಾಸಕರ ಅಭಿಪ್ರಾಯ ಪಡೆಯಲು ಕಾಂಗ್ರೆಸ್ ಮುಂದಾಗಿದ್ದು, ಇಂದು ಸಿದ್ದರಾಮಯ್ಯ ಅವರ ಹಳೆ ಮೈಸೂರು ಭಾಗದ ಕಾಂಗ್ರೆಸ್ ಮುಖಂಡರ ಸಭೆ ನಡೆಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಮೈಸೂರು, ಚಾಮರಾಜಪೇಟೆ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಹಾಸನ, ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗಗಳ ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಲೋಕಸಭೆ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಸೀಟು ಹಂಚಿಕೆ ಮಾಡಿಕೊಳ್ಳುತ್ತಿದ್ದು ಅದರ ಪುರ್ವಭಾವಿಯಾಗಿ ಈ ಸಭೆ ಕರೆಯಲಾಗಿದ್ದು. ನಾಯಕರ ಅಭಿಪ್ರಾಯ ಮತ್ತು ಕ್ಷೇತ್ರದಲ್ಲಿ ಪಕ್ಷದ ಪ್ರಸ್ತುತ ಸ್ಥಿತಿ-ಗತಿಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ.
ಸಭೆಯಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ್, ಹಾಸನದ ಎ.ಮಂಜು, ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ, ಬಾಲಕೃಷ್ಣ, ಸೋಮಶೇಖರ್, ಟಿ.ಬಿ.ಜಯಚಂದ್ರ, ಸುಧಾಕರ್ ಇನ್ನೂ ಹಲವು ಮುಖಂಡರು ಭಾಗವಹಿಸಿದ್ದರು.

ಬಹುತೇಕ ಶಾಸಕರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನೇ ಕಣಕ್ಕಿಳಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು ಭಾಗಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಕೂಗು ಜೋರಾಗಿ ಕೇಳಿ ಬಂದಿದೆ ಎನ್ನಲಾಗಿದೆ.












Click it and Unblock the Notifications