ಈಗಾಗಲೇ ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ!
ಬೆಂಗಳೂರು, ಜ. 18: ಬೆಳಗಾವಿ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿಕೆಯನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ. ಬೆಳಗಾವಿ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೀಡಿರುವ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ. ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಈಗಾಗಲೇ ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು ಬರಬೇಡಿ ಎಂದು ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.
ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.
ಮರಾಠಾ ಹುತಾತ್ಮರ ದಿನ ಭಾನುವಾರ (ಜ.17) ರಂದು ಟ್ವೀಟ್ ಮಾಡಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು, ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಕರ್ನಾಟಕದ ಪ್ರದೇಶಗಳನ್ನು ಮರಳಿ ರಾಜ್ಯಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕರ್ನಾಟಕಕ್ಕೆ ಸೇರ್ಪಡೆಯಾಗಿರುವ ಪ್ರದೇಶಗಳನ್ನು ಮರಳಿ ಪಡೆಯುವುದೇ ಮರಾಠಾ ಹುತಾತ್ಮರಿಗೆ ನಾವು ಸಲ್ಲಿಸುವ ನಿಜವಾದ ಗೌರವ.
ಮರಾಠಾ ಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳಗಾವಿ ಹಾಗೂ ಇತರ ಪ್ರದೇಶಗಳು ಮತ್ತೆ ಮಹಾರಾಷ್ಟ್ರಕ್ಕೆ ಸೇರ್ಪಡೆಯಾಗಬೇಕು. ಈ ವಿಚಾರದಲ್ಲಿ ರಾಜ್ಯದ ರಾಜಕೀಯ ಪಕ್ಷಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಈ ವಿಚಾರದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಈ ಪ್ರದೇಶಗಳನ್ನು ಕರ್ನಾಟಕ ಆಕ್ರಮಿತ ಪ್ರದೇಶವೆಂದು ಘೋಷಿಸುತ್ತೇವೆ ಎಂದು ಟ್ವೀಟ್ ಮಾಡಿದ್ದರು.