ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಈಶ್ವರಪ್ಪ, ನಾನು ಎಲ್ಲೋ ಕುರಿ ಕಾಯುತ್ತಾ ಇರಬೇಕಾಗಿತ್ತು: ಸಿದ್ದರಾಮಯ್ಯ
ಬೆಂಗಳೂರು, ಜೂನ್ 26: ಸಂಸದೀಯ ಪ್ರಜಾಪ್ರಭುತ್ವದ ದೇಗುಲ ವಿಧಾನಸಭೆ. ಇಲ್ಲಿ ಜನರ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಪ್ರಸ್ತಾಪಿಸಿ ಪರಿಹಾರ ಪಡೆದುಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳಿ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರಿಗೆ ಕಿವಿ ಮಾತು ಹೇಳಿದರು.
16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಿ ಎಂದರು.

ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಅದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡರೆ ಜನರ ಸಮಸ್ಯೆಗಳನ್ನು ನಿಯಮ ಬದ್ಧವಾಗಿ ಸದನದ ಮುಂದೆ ಮಂಡಿಸಬಹುದು. ಸಂವಿಧಾನಕ್ಕೆ ವಿರುದ್ಧವಾದ ಕಾನೂನು-ಕಾಯ್ದೆಗಳನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಂವಿಧಾನದ ಓದು ಅತ್ಯಗತ್ಯ ಎಂದರು.
ಶಾಸಕರು ಸಂಸದರು ಬಜೆಟ್ ಅಂದರೆ ಏನೆಂದು ಅರ್ಥ ಮಾಡಿಕೊಳ್ಳಬೇಕು. 12ನೇ ಶತಮಾನದಲ್ಲಿ ಕಾಯಕಯೋಗಿ ಬಸವಣ್ಣನವರು ಬಜೆಟ್ ಬಗ್ಗೆ ಹೇಳಿದ್ದಾರೆ. ಕಾಯಕ ಮತ್ತು ದಾಸೋಹ ಬಜೆಟ್‌ನ ಪ್ರಮುಖ ಸಂಗತಿಗಳು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ಹಂಚಿಕೆ. ಬಜೆಟ್ ಅಂದರೆ ಇಷ್ಟೆ, ಎಲ್ಲಿಂದ ಉತ್ಪಾದನೆ ಬರುತ್ತದೆ ಅದನ್ನು ಸಮಾಜದ ಯಾರಿಗೆ ಹಂಚುತ್ತೇವೆ ಎನ್ನುವುದೇ ಬಜೆಟ್‌ನ ಮೌಲ್ಯ ಎಂದು ವಿವರಿಸಿದರು.

ನೂರು ಕುರಿ ಎಣಿಸಲು ಬಾರದವನು ಬಜೆಟ್ ಹೇಗೆ ಮಾಡ್ತಾರೆ
ನಾನು ಮೊದಲ ಬಾರಿ ಹಣಕಾಸು ಸಚಿವನಾದಾಗ "ನೂರು ಕುರಿ ಎಣಿಸಲು ಬಾರದವನು ಬಜೆಟ್ ಹೇಗೆ ಮಾಡ್ತಾರೆ?" ಎಂದು ಪತ್ರಿಕೆಯೊಂದು ಟೀಕಿಸಿತ್ತು. ಟೀಕೆಯನ್ನು ನಾನು ಸವಾಲಾಗಿ ಸ್ವೀಕರಿಸಿ ನಿರಂತರ ವಿಷಯ ತಜ್ಞರ ಜೊತೆ ಚರ್ಚಿಸಿ ಬಜೆಟ್ ಮಂಡಿಸಿದೆ. ಮರುದಿನ ಕೆಲವು ಪತ್ರಿಕೆಯಲ್ಲಿ ನನ್ನ ಬಜೆಟ್ ಅತ್ಯುತ್ತಮ ಎಂದು ಶ್ಲಾಘಿಸಿ ಸಂಪಾದಕೀಯ ಬರೆಯಲಾಗಿತ್ತು. ಹೀಗಾಗಿ ಜ್ಞಾನ ದಾಹ ಮತ್ತು ಅಧ್ಯಯನ ಶೀಲತೆಯನ್ನು ಬೆಳೆಸಿಕೊಳ್ಳಿ ಎಂದು ತಮ್ಮದೇ ಉದಾಹರಣೆ ಮೂಲಕ ಸಿದ್ದರಾಮಯ್ಯ ಶಾಸಕರಿಗೆ ತಿಳಿ ಹೇಳಿದರು.
ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಈಶ್ವರಪ್ಪ ಶಾಸಕರಾಗಲು ಸಾಧ್ಯವಿರಲಿಲ್ಲ
ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು. ಆದ್ದರಿಂದ ಸಂವಿಧಾನದ ಮೌಲ್ಯ ಅರಿತುಕೊಳ್ಳಿ. ವಾಟಾಳ್ ನಾಗರಾಜ್ ಅವರು ಒಬ್ಬ ಮಾದರಿ ಶಾಸಕರಾಗಿದ್ದರು. ಅಧಿವೇಶನದ ಬೆಲ್ ಆಗುತ್ತಿದ್ದಂತೆ ಸದನದ ಒಳಗೆ ಬಂದು ಕೂರುತ್ತಿದ್ದರು. ಅಧಿವೇಶನ ಮುಗಿಯುವವರೆಗೂ ಅಲುಗಾಡದೆ ಕೂರುತ್ತಿದ್ದರು. ಇದನ್ನು ಪ್ರತಿಯೊಬ್ಬರೂ ಪಾಲಿಸಿ ಎಂದು ಸೂಚಿಸಿದರು.












Click it and Unblock the Notifications