No Kolar Ticket For Siddaramaiah: ಕೋಲಾರದಿಂದ ಕೊತ್ತೂರು ಮಂಜುನಾಥ್‌ಗೆ ಕಾಂಗ್ರೆಸ್ ಟಿಕೆಟ್ ಖಚಿತ
ಕೋಲಾರ, ಏಪ್ರಿಲ್ 15: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ 43 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಕಾಂಗ್ರೆಸ್ ಶನಿವಾರ ಬಿಡುಗಡೆ ಮಾಡಿದ್ದು, ಕೋಲಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಟಿಕೆಟ್ ಸಿಕ್ಕಿಲ್ಲ.
ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾದಗಲೇ ಸಿದ್ದರಾಮಯ್ಯ ಅವರಿಗೆ ವರುಣಾ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ಈಗ ಕೋಲಾರಿಂದ ಸಿದ್ದರಾಮಯ್ಯ ಬದಲಿಗೆ ಕೊತ್ತೂರು ಮಂಜುನಾಥ್ ಅವರಿಗೆ ಟಿಕೆಟ್ ನೀಡಲಾಗಿದೆ. ತಮ್ಮ ತವರು ಕ್ಷೇತ್ರವಾದ ವರುಣಾದಲ್ಲಿ ಟಿಕೆಟ್ ಪಡೆದಿದ್ದ ಸಿದ್ದರಾಮಯ್ಯ ಅವರು ಕೋಲಾರದಿಂದಲೂ ನಿಲ್ಲುವುದಾಗಿ ತಿಳಿಸಿದ್ದರು.

ವರುಣಾ ಹಾಗೂ ಕೋಲಾರದಿಂದ ಸ್ಪರ್ಧಿಸುವ ಯೋಚನೆಯಲ್ಲಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೋಲಾರವನ್ನು ಬಿಟ್ಟುಕೊಡುವ ಸಾಧ್ಯತೆ ಇತ್ತು. ಕೋಲಾರಿದಿಂದ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರವನ್ನು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಹಾಗೂ ಹೈಕಮಾಂಡ್‌ಗೆ ಬಿಟ್ಟಿದ್ದರು.
ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಕಾಂಗ್ರೆಸ್ ನಾಯಕರಾದ ಕೆಜೆ ಜಾರ್ಜ್, ಬೈರತಿ ಸುರೇಶ್ ಸೇರಿದಂತೆ ಹಲವಾರು ನಿಷ್ಠಾವಂತರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ವರುಣಾ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಸುರಕ್ಷಿತ ಕ್ಷೇತ್ರವಾಗಿದ್ದು, ಕೋಲಾರದಿಂದ ಸ್ಪರ್ಧಿಸುವ ಅಗತ್ಯವಿಲ್ಲ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿತ್ತು. ಅದರಂತೆ ಈಗ ಕೋಲಾರದಿಂದ ಸಿದ್ದರಾಮಯ್ಯಗೆ ಟಿಕೆಟ್ ನೀಡದೆ ಕೊತ್ತೂರು ಮಂಜುನಾಥ್‌ಗೆ ಟಿಕೆಟ್ ಸಿಕ್ಕಿದೆ.

ಹಿಂದೆ ಮುಳುಬಾಗಿಲು ಶಾಸಕರಾಗಿದ್ದ ಕೊತ್ತೂರು ಮಂಜುನಾಥ್ ಅವರು ನಕಲಿ ಜಾತಿ ಪ್ರಮಾಣಪತ್ರ ನೀಡಿ ಸ್ಪರ್ಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈಗ ಆ ವಿಷಯ ನ್ಯಾಯಾಲಯದಲ್ಲಿದೆ. ಕೋಲಾರದಲ್ಲಿ ಈಗ ಹಾಲಿ ಶಾಸಕರಾಗಿ ಶ್ರೀನಿವಾಸ್‌ಗೌಡ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ 2018ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಬಳಿಕ ಕಳೆದ ಕೆಲವು ತಿಂಗಳುಗಳ ಹಿಂದೆ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.
ಕಾಂಗ್ರೆಸ್ ಸೇರಿದ್ದ ಅವರು ಮುಂಬರುವ ವಿಧಾನಸಣಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸಿದರೆ ಕೋಲಾರ ಕ್ಷೇತ್ರ ಬಿಟ್ಟುಕೊಡುವುದಾಗಿ ಘೋಷಣೆ ಮಾಡಿದ್ದರು. ಸಿದ್ದರಾಮಯ್ಯ ಅವರು ವರುಣಾ ಹಾಗೂ ಕೋಲಾರ ಎರಡೂ ಕ್ಷೇತ್ರದಿಂದ ನಿಂತು ಗೆದ್ದು ಬಳಿಕ ವರುಣಾದಿಂದ ರಾಜೀನಾಮೆ ನೀಡಿ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರನ್ನು ಗೆಲ್ಲಿಸುವ ನಿರ್ಧಾರ ಮಾಡಿದ್ದರು ಎನ್ನಲಾಗಿತ್ತು.
ಆದರೆ ಬದಲಾದ ಪರಿಸ್ಥಿತಿಯಿಂದ ಮಾಜಿ ಸಿಎಂ ಸಿದ್ದರಾಮಯ್ಯನವರು ಕೋಲಾರವನ್ನು ಕೈಬಿಡುವ ನಿರ್ಧಾಕ್ಕೆ ಬಂದಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿದ್ದವು. ಎರಡು ಸ್ಥಾನಗಳಲ್ಲಿ ಸ್ಪರ್ಧಿಸುವುದು ವ್ಯತಿರಿಕ್ತ ಮತ್ತು ಮತದಾರರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ಅವರು ಹೇಳಿದ್ದಾರೆ.
ಮೈಸೂರಿನಲ್ಲಿ ವರುಣಾದಿಂದ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಬಿಜೆಪಿ ಕಣಕ್ಕಿಳಿಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರೊಂದಿಗೆ ಗೌಪ್ಯ ಸಭೆ ನಡೆಸಿದ್ದಾರೆ. ವರುಣಕ್ಕೆ ಅಂಟಿಕೊಂಡು ಕೋಲಾರದಿಂದ ಸ್ಪರ್ಧಿಸುವ ಯೋಚನೆ ಕೈಬಿಡಬೇಕು ಎಂದು ಈ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕೊತ್ತೂರು ಮಂಜು ಸಲುವಾಗಿ ಕೋಲಾರ ಮತ್ತು ಮುಳಬಾಗಲು ಎರಡೂ ಸ್ಥಾನಗಳನ್ನು ಖಾಲಿ ಇರಿಸಿದ್ದರು.
ಸಿದ್ದರಾಮಯ್ಯ ಅವರು ಮೈಸೂರು ತಾಲೂಕಿನ ವರುಣಾ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡುತ್ತಿದ್ದು, ಹೈವೋಲ್ಟೇಜ್ ಕಣವಾಗಿ ರೂಪುಗೊಂಡಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಬಿಜೆಪಿಯ ಪ್ರಬಲ ಲಿಂಗಾಯತ ಮುಖಂಡ ವಿ.ಸೋಮಣ್ಣ ಪ್ರತಿಸ್ಪರ್ಧಿ ಆಗಿದ್ದಾರೆ. ವಿ.ಸೋಮಣ್ಣ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಶುರು ಮಾಡಿದ್ದಾರೆ. ಈ ನಡುವೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ವರುಣ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ. ಇಲ್ಲಿ ಸಿದ್ದರಾಮಯ್ಯ ಅವರ ಗೆಲುವು ನಿಶ್ಚಿತ ಎಂದು ತಿಳಿಸಿದ್ದಾರೆ.












Click it and Unblock the Notifications