7th pay commission; ಸಿದ್ದರಾಮಯ್ಯ ನೀಡಿದ ಭರವಸೆ ಏನು?
ಬೆಂಗಳೂರು, ಜುಲೈ 14; ಕರ್ನಾಟಕ ಸರ್ಕಾರ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು ಮತ್ತು ನೂತನ ವೇತನ ರಚನೆ ಇತ್ಯಾದಿಗಳನ್ನು ರೂಪಿಸಲು ಸುಧಾಕರ್ ರಾವ್ ಅಧ್ಯಕ್ಷತೆಯ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿದೆ. ಆದರೆ ಈ ಆಯೋಗದ ಅಂತಿಮ ವರದಿ ಯಾವಾಗ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ? ಎಂಬುದು ಅಂತಿಮವಾಗಿಲ್ಲ.
ವಿಧಾನಪರಿಷತ್ ಕಲಾಪದಲ್ಲಿ ಕುಶಾಲಪ್ಪ ಎಂ. ಪಿ. (ಸುಜಾ) (ಸ್ಥಳೀಯ ಸಂಸ್ಥೆಗಳ ಕ್ಷೇತ್ರ) 7ನೇ ವೇತನ ಆಯೋಗದ ಬಗ್ಗೆ ಕೇಳಿದ ಪ್ರಶ್ನೆಗೆ ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ಪ್ರಶ್ನೆಯಲ್ಲಿ ರಾಜ್ಯದಲ್ಲಿ 7ನೇ ವೇತನ ಆಯೋಗದ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಸಮಿತಿಯನ್ನು ಯಾವಾಗ ರಚಿಸಲಾಯಿತು?. ಈ ಸಮಿತಿಗೆ ನಿಗದಿಪಡಿಸಲಾದ ಕಾಲಮಿತಿ ಎಷ್ಟು?. ಸಮಿತಿಯ ವರದಿಯನ್ನು ಯಾವಾಗ ನಿರೀಕ್ಷಿಸಬಹುದು. ಸಮಿತಿಯು ನೀಡುವ ಶಿಫಾರಸ್ಸುಗಳನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರವು ಜಾರಿಗೊಳಿಸುವುದೇ ಎಂದು ಕೇಳಲಾಗಿತ್ತು.
ಸಿದ್ದರಾಮಯ್ಯ ತಮ್ಮ ಉತ್ತರದಲ್ಲಿ, ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಿ 6 ತಿಂಗಳ ಕಾಲಮಿತಿಯಲ್ಲಿ ವರದಿಯನ್ನು ಸಲ್ಲಿಸಲು, ತ್ರಿಸದಸ್ಯರ 7ನೇ ರಾಜ್ಯ ವೇತನ ಆಯೋಗವನ್ನು ರಚಿಸಿ ದಿನಾಂಕ 19/11/2022 ರಂದು ಆದೇಶ ಹೊರಡಿಸಲಾಗಿರುತ್ತದೆ ಎಂದು ಹೇಳಿದ್ದಾರೆ.
ಆಯೋಗದ ಅವಧಿ ವಿಸ್ತರಣೆ; ಸಿದ್ದರಾಮಯ್ಯ ಅವರು ಉತ್ತರದಲ್ಲಿ, ತದನಂತರದಲ್ಲಿ, ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸ್ವಾಯತ್ತ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿಗದಿಪಡಿಸಿರುವ ಕಾಲಾವಧಿಯನ್ನು ಪುನರ್ ಪರಿಶೀಲಿಸಿ ಆಯೋಗಕ್ಕೆ ನಿಗದಿಪಡಿಸಿರುವ ಕಾಲಾವಧಿಯನ್ನು ದಿನಾಂಕ 19/5/2023ರಿಂದ 6 ತಿಂಗಳು ವಿಸ್ತರಿಸಿರುತ್ತದೆ ಎಂದು ತಿಳಿಸಿದ್ದಾರೆ.
ಮತ್ತೊಂದು ಪ್ರಶ್ನೆಯಲ್ಲಿ ಈ ಸಮಿತಿಯು ಕಾರ್ಯಪ್ರವೃತ್ತರಾಗಿರುವ ಸಂದರ್ಭದಲ್ಲಿ ಹಿಂದಿನ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವಾಗಿ ಎಷ್ಟು ಪ್ರತಿಶತ ಪರಿಹಾರವನ್ನು ಒದಗಿಸಿತ್ತು? ಎಂದು ವಿವರ ಕೇಳಲಾಗಿತ್ತು.
ಉತ್ತರದಲ್ಲಿ ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ 7ನೇ ರಾಜ್ಯ ವೇತನ ಆಯೋಗದ ಅಂತಿಮ ವರದಿಯನ್ನು ಕಾಯ್ದಿರಿಸಿ ದಿನಾಂಕ 1/4/2023ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರ ಮೂಲ ವೇತನ/ ಮೂಲ ಪಿಂಚಣಿಯ ಶೇ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿರುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಸ್ತುತ ಸರ್ಕಾರವು ಇದೇ ರೀತಿ ನೌಕರರಿಗೆ ಸಮಿತಿಯು ವರದಿಯನ್ನು ಕೊಡುವ ಯಾವುದಾದರೂ ಪರಿಹಾರವನ್ನು ಅಥವಾ ಸಮಿತಿಗೆ ಕಾಲಮಿತಿಯನ್ನು ನಿಗದಿಪಡಿಸಿ ಶೀಘ್ರವಾಗಿ 7ನೇ ವೇತನ ಆಯೋಗವನ್ನು ಜಾರಿ ಮಾಡುವುದು? ಎಂದು ಕೇಳಲಾಗಿತ್ತು.
ಇದಕ್ಕೆ ಸಿದ್ದರಾಮಯ್ಯ ಉತ್ತರ ನೀಡಿ, ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆಯ ವಿಷಯವು ಸರ್ಕಾರದ ನೀತಿ ನಿರ್ಣಯಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ವೇತನ ಆಯೋಗವು ಸಲ್ಲಿಸುವ ಅಂತಿಮ ವರದಿಯನ್ನು ರಾಜ್ಯದ ಆರ್ಥಿಕ ಸ್ಥಿತಿಗಳನ್ನು ಗಮನದಲ್ಲಿರಿಸಿಕೊಂಡು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.
ಅವಧಿ ವಿಸ್ತರಣೆ; ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸರ್ಕಾರಿ ನೌಕರರ ಬೇಡಿಕೆಯಂತೆ 7ನೇ ರಾಜ್ಯ ವೇತನ ಆಯೋಗವನ್ನು ರಚನೆ ಮಾಡಿತ್ತು. ಈ ಆಯೋಗಕ್ಕೆ ಸುಧಾಕರ್ ರಾವ್ ಅಧ್ಯಕ್ಷರು. ಪಿ. ಬಿ. ರಾಮಮೂರ್ತಿ, ಶ್ರೀಕಾಂತ್ ಬಿ. ವನಹಳ್ಳಿ ಸದಸ್ಯರು. ಮೂಲಸೌಲಭ್ಯ ಇಲಾಖೆ ಜಂಟಿ ಕಾರ್ಯದರ್ಶಿ ಹೆಫ್ಸಿಬಾ ರಾಣಿ ಕೊರ್ಲಪಾಟಿ ಕಾರ್ಯದರ್ಶಿಗಳು.
2023ರ ಮಾರ್ಚ್‌ನಲ್ಲಿ ಆಯೋಗ ಸರ್ಕಾರಕ್ಕೆ ಮಧ್ಯಂತರ ವರದಿ ನೀಡುವ ನಿರೀಕ್ಷೆ ಇತ್ತು. ಆದರೆ ಅಷ್ಟರಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿತು. ಚುನಾವಣೆಯ ಬಳಿಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದಿನಾಂಕ 19/5/2023ರಿಂದ ಜಾರಿಗೆ ಬರುವಂತೆ 7ನೇ ರಾಜ್ಯ ವೇತನ ಆಯೋಗದ ಅವಧಿಯನ್ನು 6 ತಿಂಗಳ ಕಾಲ ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಆದ್ದರಿಂದ ನವೆಂಬರ್ ಅಂತ್ಯದ ವೇಳೆಗೆ ಆಯೋಗ ಸರ್ಕಾರಕ್ಕೆ ವರದಿ ನೀಡುವ ನಿರೀಕ್ಷೆ ಇದೆ. ಎಷ್ಟು ವೇತನ ಪರಿಷ್ಕರಣೆಗೆ ಸರ್ಕಾರಕ್ಕೆ ಆಯೋಗ ಶಿಫಾರಸು ಮಾಡಲಿದೆ? ಎಂದು ಕಾದು ನೋಡಬೇಕಿದೆ.












Click it and Unblock the Notifications