ಪರಮೇಶ್ವರ್, ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್
ಬೆಂಗಳೂರು, ಜು. 1 : ಕರ್ನಾಟಕ ಕಾಂಗ್ರೆಸ್ ಆತ್ಮಾವಲೋಕನ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ನಾಯಕರು ಸಂದೇಶ ರವಾನಿಸಿದ್ದಾರೆ. ಜು.2ರ ಬುಧವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜೊತೆ ಸಭೆ ನಡೆಯಲಿದೆ.
ಮಂಗಳವಾರ ಬೆಳಗ್ಗೆ ಜು.2ರ ಬುಧವಾರ ದೆಹಲಿಗೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರಿಗೆ ಹೈಕಮಾಂಡ್ ನಾಯಕರು ಸಂದೇಶ ಕಳುಹಿಸಿದ್ದಾರೆ. [ಸೋಲಿನ ಆತ್ಮಾವಲೋಕನ ಮಾಡಿಕೊಂಡ ಕಾಂಗ್ರೆಸ್]

ಶನಿವಾರ ಮತ್ತು ಭಾನುವಾರ ಬೆಂಗಳೂರಿನ ಅರಮನೆ ಮೈದಾನಲ್ಲಿ ಕಾಂಗ್ರೆಸ್ ಆತ್ಮಾವಲೋಕನ ಸಭೆ ನಡೆದಿತ್ತು. ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ದಿಗ್ವಜಯ್ ಸಿಂಗ್ ಸಹ ಪಾಲ್ಗೊಂಡಿದ್ದರು. ಈ ಸಭೆಯ ಬಳಿಕ ದೆಹಲಿಯಲ್ಲಿ ಬುಧವಾರ ಸಭೆ ಕರೆಯಲಾಗಿದೆ. [ಕಾಂಗ್ರೆಸ್ಸಿನಿಂದ ಸಾಲು-ಸಾಲು ಕಾರ್ಯಕ್ರಮಗಳು]
ಎ.ಕೆ.ಆಂಟನಿ ಜೊತೆ ಸಭೆ : ಕರ್ನಾಟಕ ಉಸ್ತುವಾರಿ ದಿಗ್ವಜಯ್ ಸಿಂಗ್ ತಮ್ಮ ಎರಡು ದಿನದ ಸಭೆಯ ವರದಿಯನ್ನು ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎ.ಕೆ.ಆಂಟನಿ ಅವರಿಗೆ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಬುಧವಾರ ಆಂಟನಿ ರಾಜ್ಯ ನಾಯಕರ ಸಭೆ ಕರೆದಿದ್ದು, ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಲೋಕಸಭೆ ಚುನಾವಣೆ ಫಲಿತಾಂಶದ ಜೊತೆಗೆ ರಾಜ್ಯದ ನಾಯಕರ ಪಕ್ಷ ವಿರೋಧಿ ಚಟುವಟಿಕೆ, ಕೆಲವು ಸಚಿವರ ಕಾರ್ಯ ವೈಖರಿ ಬಗ್ಗೆ ಕೇಳಿಬರುತ್ತಿರುವ ಆರೋಪಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಆದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಅವರಿಗೂ ದೆಹಲಿಗೆ ಬರುವಂತೆ ಆಹ್ವಾನ ನೀಡಲಾಗಿದೆ.
ಕರ್ನಾಟಕದಲ್ಲಿ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಮಂಗಳವಾರ ಸಂಜೆ ಅಥವ ಬುಧವಾರ ಬೆಳಗ್ಗೆ ಸಿದ್ದರಾಮಯ್ಯ, ಪರಮೇಶ್ವರ್ ಮತ್ತು ರಿಜ್ವಾನ್ ಅರ್ಷದ್ ದೆಹಲಿಗೆ ತೆರಳುವ ಸಾಧ್ಯತೆ ಇದೆ.












Click it and Unblock the Notifications