ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರಬೇಕು: ಡಿ ಕೆ ಸುರೇಶ್
ಬೆಂಗಳೂರು, ಅಕ್ಟೋಬರ್ 04: ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಈ ಅವಧಿಯ 5 ವರ್ಷಗಳ ಕಾಲ ಅವರೇ ಮುಖ್ಯಮಂತ್ರಿಯಾಗಿ ಇರಬೇಕು ಎಂಬುದು ನಮ್ಮ ಬಯಕೆ. ತಾಯಿ ಚಾಮುಂಡಿ ಆಶೀರ್ವಾದದೊಂದಿಗೆ ಸಿದ್ದರಾಮಯ್ಯ ಅವರು ಎಲ್ಲಾ ಆರೋಪಗಳಿಂದ ಮುಕ್ತರಾಗುತ್ತಾರೆ. ಅವರನ್ನು ಯಾರೂ ಅಲ್ಲಾಡಿಸಲು ಆಗುವುದಿಲ್ಲ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.
ದಲಿತ ಮುಖಂಡರು ಪ್ರತ್ಯೇಕ ಸಭೆ ಮಾಡುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸಮಾಜದ ನಾಯಕರು ಸೇರಿ ಅನೇಕ ವಿಚಾರ ಚರ್ಚೆ ಮಾಡುತ್ತೇವೆ. ಪರಮೇಶ್ವರ್ ಅವರು 8 ವರ್ಷ ಪಿಸಿಸಿ ಅಧ್ಯಕ್ಷರಾಗಿದ್ದರು, ಸತೀಶ್ ಜಾರಕಿಹೊಳಿ ಅವರು ಕಾರ್ಯಾಧ್ಯಕ್ಷರಾಗಿದ್ದವರು. ಆ ಸಮಾಜದ ಕಷ್ಟ ಸುಖ ಕೇಳಿ, ಏಳಿಗೆ ಬಯಸುವುದು, ರಾಜ್ಯದ ವಿದ್ಯಮಾನಗಳನ್ನು ಯಾವ ರೀತಿ ಎದುರಿಸಬೇಕು ಎಂದು ಚರ್ಚೆ ಮಾಡುವುದು ಸಹಜ. ಅದರಲ್ಲಿ ತಪ್ಪೇನಿಲ್ಲ ಎಂದು ತಿಳಿಸಿದರು.

ಜಾತಿ ಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುವ ಬಗ್ಗೆ ಕೇಳಿದಾಗ, "ಜಾತಿ ಗಣತಿ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರ ಜನಗಣತಿ ಘೋಷಣೆ ಮಾಡಿದ್ದು, ಈ ಸಮಯದಲ್ಲೇ ಅಗತ್ಯ ಮಾನದಂಡ ಬಳಸಿ ಸಮೀಕ್ಷೆ ಮಾಡಿದರೆ ಯಾವುದೇ ಗೊಂದಲ ಇರುವುದಿಲ್ಲ. ಹೀಗಾಗಿ ಜನಗಣತಿವರೆಗೂ ಕಾಯುವುದು ಉತ್ತಮ ಎಂದು ಹೇಳುತ್ತೇನೆ" ಎಂದರು.
ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ರಾಜ್ಯದ ಹಿತಕ್ಕೆ ಪೂರಕವಾಗಿಲ್ಲ. ಜನರಿಗೆ ಅಸಹ್ಯವಾಗುತ್ತಿದ್ದು, ಅವರು ಬೀದಿಯಲ್ಲಿ ಕಲ್ಲು ಹೊಡೆಯುವ ಮುನ್ನ ಎಲ್ಲಾ ಪಕ್ಷಗಳ ನಾಯಕರು ಎಚ್ಚೆತ್ತುಕೊಳ್ಳಬೇಕು ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಸಲಹೆ ನೀಡಿದರು. ಕುಮಾರಸ್ವಾಮಿ ವಿರುದ್ಧ ಜೆಡಿಎಸ್ ಪದಾಧಿಕಾರಿ ಮಾಡಿರುವ ಆರೋಪದ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.
ಅಭಿವೃದ್ಧಿ ಮಾಡಲಿ ಎಂದು ಜನ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ, ದೇಶದಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಅಧಿಕಾರ ನೀಡಿದ್ದಾರೆ. ಆದರೆ ಜನರಿಂದ ಆಯ್ಕೆಯಾದ ನಾಯಕರು ಆರೋಪ, ಪ್ರತ್ಯಾರೋಪ, ದೂಷಣೆ ಮಾಡುತ್ತಾ ಕನ್ನಡಿಗರಿಗೆ ಅಪಮಾನ ಮಾಡುವ ಕೆಲಸ ಮಾಡುತ್ತಿದ್ದಾರೆ.
ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವುದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಜವಾಬ್ದಾರಿ. ಅದನ್ನು ಮರೆತು ಈ ರೀತಿ ಕಿತ್ತಾಡುತ್ತಿರುವುದು ಸರಿಯೇ? ಎಂದು ಅವರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಚುನಾವಣೆಗೆ ಇನ್ನು ಸಾಕಷ್ಟು ಸಮಯವಿದೆ. ಈ ಹೊತ್ತಿನಲ್ಲಿ ಜನ ಅಭಿವೃದ್ಧಿ, ಯುವಕರು, ರೈತರ ಸಮಸ್ಯೆ ಬಗೆಹರಿಸುವ ಕಾರ್ಯಗಳನ್ನು ಎದುರು ನೋಡುತ್ತಿದ್ದಾರೆ. ಈ ಆರೋಪಗಳು ರಾಜ್ಯದ ಜನರಿಗೆ ಎಳ್ಳಷ್ಟೂ ಇಷ್ಟವಿಲ್ಲ. ಈಗಲಾದರೂ ಎಚ್ಚೆತ್ತುಕೊಳ್ಳದಿದ್ದರೆ ಜನ ಬೀದಿಯಲ್ಲಿ ಕಲ್ಲು ಹೊಡೆಯುವ ಪರಿಸ್ಥಿತಿ ಎದುರಾಗಲಿದೆ.
ಪರಿಸ್ಥಿತಿ ಹೀಗೆ ಮುಂದಿವರಿದರೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾವುದೇ ಪಕ್ಷವಾಗಿರಲಿ ಈ ಪರಿಸ್ಥಿತಿ ಬರಬಹುದು ಎಂದು ಎಲ್ಲಾ ಪಕ್ಷದ ನಾಯಕರಿಗೆ ಎಚ್ಚರಿಸಲು ಬಯಸುತ್ತೇನೆ. ಆರೋಪ ಪ್ರತ್ಯಾರೋಪಗಳನ್ನು ತೀರ್ಮಾನ ಮಾಡಲು ನ್ಯಾಯಾಲಯ ಇದೆ ಎಂದು ತಿಳಿಸಿದರು.
ಹೊಸ ಸಂಸದರ ಕೆಲಸ ಹೇಗಿದೆ ಎಂದು ಕೇಳಿದಾಗ, "ನನಗೆ ಗೊತ್ತಿಲ್ಲ. ನಾನು ಬೇರೆಯವರ ಬಗ್ಗೆ ಮಾಹಿತಿ ಪಡೆಯಲು ಸಮಯಾವಕಾಶವಿಲ್ಲ. ನಾನು ಎಂದಿಗೂ ಹಿಂದೆ ತಿರುಗಿ ನೋಡಲ್ಲ, ಮುಂದೆ ನೋಡುತ್ತೇನೆ, ಋಣಾತ್ಮಕತೆಗಿಂತ ಸಕಾರಾತ್ಮಕತೆ ಬಗ್ಗೆ ಹೆಚ್ಚು ಆಲೋಚನೆ ಮಾಡುತ್ತೇನೆ. ನನ್ನ ಕಷ್ಟ ಕಾಲದಲ್ಲಿ ನಿಂತವರ ರಕ್ಷಣೆ, ಅಭಿವೃದ್ಧಿ ನನ್ನ ಗುರಿ" ಎಂದು ತಿಳಿಸಿದರು.












Click it and Unblock the Notifications