ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
ಬೆಂಗಳೂರು, ಜೂ. 18 : ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಶಾಸಕರು, ಸಚಿವರು, ವಿಧಾನಪರಿಷತ್ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬುಧವಾರ ಬೆಳಗ್ಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಂಸದರು, ರಾಜ್ಯ ಸರ್ಕಾರದ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.

ಸಿದ್ದರಾಮಯ್ಯ ಸಂಪುಟದ ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ಕಾರಣದಿಂದಾಗಿ ಸಭೆಯಲ್ಲಿ ಬಿಸಿ-ಬಿಸಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಜೂ.5ರಂದು ಸಭೆ ನಡೆಸುವುದಕ್ಕೆ ಸಿದ್ದರಾಮಯ್ಯ ತೀರ್ಮಾನಿಸಿದ್ದರು. ಆದರೆ, ಅನಿವಾರ್ಯ ಕಾರಣದಿಂದಾಗಿ ಮುಂದೂಡಲಾಗಿದ್ದ ಸಭೆ ಇಂದು ಬೆಳಗ್ಗೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. [ಶಾಸಕಾಂಗ ಪಕ್ಷದ ಸಭೆ ಕರೆದ ಸಿಎಂ]
ಜೂ. 23ರಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಅಲ್ಲಿ ಮಂಡಿಸುವ ಮಸೂದೆಗಳ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಉಳಿದಂತೆ ಜಿಲ್ಲೆಗೆ ಸೀಮಿತವಾಗಿರುವ ಸಚಿವರು, ಅಧಿಕಾರಿಗಳು ಶಾಸಕರಿಗೆ ಅಗೌರವ ತೋರುತ್ತಿರುವ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.
ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ, ಸರ್ಕಾರದ ವಿವಾದಾತ್ಮಕ ವಿಧೇಯಕಗಳ ಬಗ್ಗೆಯೂ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಅದ್ಧೂರಿ ಮದುವೆಗೆ ತೆರಿಗೆ ವಿಧಿಸುವ ವಿಚಾರವನ್ನು ಖುದ್ದು ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರೇ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದು ಬಂದಿದೆ.












Click it and Unblock the Notifications