ಶಿಕಾರಿಪುರದಿಂದ ಸಿಎಂ ಸಿದ್ದರಾಮಯ್ಯ ಮತಬೇಟೆ ಆರಂಭ
ಬೆಂಗಳೂರು, ಆ.4 : ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆ.10ರಿಂದ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಿಂದ ಉಭಯ ನಾಯಕರು ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮೂರು ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಪಣ ತೊಟ್ಟಿದ್ದಾರೆ. ಆದ್ದರಿಂದ ಆ.10ರಿಂದ ಮೂರು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲು ತೀರ್ಮಾನಿಸಿದ್ದಾರೆ. ಶಿಕಾರಿಪುರದಿಂದ ತಮ್ಮ ಪ್ರಚಾರವನ್ನು ಸಿಎಂ ಆರಂಭಿಸಲಿದ್ದಾರೆ.

ಆ.10ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಚುನಾವಣಾ ಪ್ರಚಾರವನ್ನು ಆರಂಭಿಸಲಿದ್ದಾರೆ. ಶಿಕಾರಿಪುರದಲ್ಲಿ ಒಟ್ಟು ಮೂರು ದಿನಗಳ ಕಾಲ ಪರಮೇಶ್ವರ್ ಮತ್ತು ಸಿದ್ದರಾಮಯ್ಯ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ. [ಉಪ ಚುನಾವಣೆ ವೇಳಾಪಟ್ಟಿ]
ಸದ್ಯದ ವೇಳಾಪಟ್ಟಿ ಪ್ರಕಾರ ಯಡಿಯೂರಪ್ಪ ಪ್ರಾಬಲ್ಯವಿರುವ ಶಿಕಾರಿಪುರ ಮತ್ತು ಶ್ರೀರಾಮುಲು ಪ್ರಭಾವ ಹೊಂದಿರುವ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಮೂರು ದಿನ ಪ್ರಚಾರ ನಡೆಸಲಿದ್ದಾರೆ. ಉಳಿದಂತೆ ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಎರಡು ದಿನ ಸಿಎಂ ಸಿದ್ದರಾಮಯ್ಯ ಮತ್ತು ಡಾ.ಜಿ.ಪರಮೇಶ್ವರ್ ಅಭ್ಯರ್ಥಿಗಳ ಪರವಾಗಿ ಮತಬೇಟೆಯಾಡಲಿದ್ದಾರೆ.
ಉಳಿದಂತೆ ಮೂರು ಕ್ಷೇತ್ರಗಳ ಉಸ್ತುವಾರಿ ವಹಿಸಿರುವ ಸಚಿವರು ಮತ್ತು ಶಾಸಕರು ಚುನಾವಣಾ ಪ್ರಚಾರದ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಈಗಾಗಲೇ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡಿದ್ದು ಆ.6 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಆ.21ರಂದು ಚುನಾವಣೆ ನಡೆಯಲಿದ್ದು, ಆ.25ಕ್ಕೆ ಮತ ಎಣಿಕೆ ನಡೆಯಲಿದೆ.












Click it and Unblock the Notifications