ಪ್ರೇಮಿಗಳ ದಿನದಂದು ಸಿದ್ದರಾಮಯ್ಯ ಬಜೆಟ್ ಮಂಡನೆ
ಬೆಂಗಳೂರು, ಜ.29 : ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಸಿಎಂ ಸಿದ್ದರಾಮಯ್ಯ ಫೆಬ್ರವರಿ 14ರಂದು 2014-15ರ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಮಂಡನೆ ಬಗ್ಗೆ ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ.
ಬುಧವಾರ ವಿಧಾನಸೌಧದಲ್ಲಿ ಸದನದ ಕಲಾಪ ಆರಂಭವಾಗುವುದಕ್ಕೂ ಮೊದಲು ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಭೆಯ ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಫೆ.14ರ ಶುಕ್ರವಾರ 2014-15ರ ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಹೇಳಿದರು. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನಲೆಯಲ್ಲಿ ಬಜೆಟ್ ನಲ್ಲಿ ಎಲ್ಲಾ ವರ್ಗಗಳಿಗೂ ಬಂಪರ್ ಕೊಡುಗೆ ನಿರೀಕ್ಷಿಸಲಾಗುತ್ತಿದೆ.

ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಸಿದ್ದರಾಮಯ್ಯ ಮಂಡಿಸುತ್ತಿರುವ ಎರಡನೇ ಬಜೆಟ್ ಇದಾಗಿದೆ. ಅಧಿಕಾರದ ಗದ್ದುಗೆ ಏರಿದ ನಂತರ ಜುಲೈ 13ರ ಶುಕ್ರವಾರ ಸಿಎಂ ತಮ್ಮ ಚೊಚ್ಚಲ ಬಜೆಟ್ ಮಂಡಿಸಿದ್ದರು. ಈ ಬಾರಿ ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವುದರಿಂದ ಬಂಪರ್ ಕೊಡುಗೆ ನೀಡಿ, ಮತಗಳಿಸಲು ಸಿಎಂ ಸಿದ್ಧತೆ ನಡೆಸಿದ್ದಾರೆ. [ಸಿದ್ದು ಚೊಚ್ಚಲ ಬಜೆಟ್ ಮುಖ್ಯಾಂಶಗಳು]
ಉಳಿದಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಿಂಗಳಿಗೊಮ್ಮೆ ಜಿಲ್ಲೆಯ ಶಾಸಕರ ಸಭೆ ನಡೆಸಬೇಕು. ಜಿಲ್ಲೆಯಲ್ಲಿನ ಅಭಿವೃದ್ಧಿ ಕಾರ್ಯ, ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಪರಿಹಾರ ಕಂಡುಕೊಳ್ಳಲು ಶ್ರಮಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಮಠದ ವಿಚಾರ ಪ್ರಸ್ತಾಪಿಸಿದ ಶಾಸಕರು : ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಕಾಯ್ದೆಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿರುವ ಕುರಿತು ಚರ್ಚೆ ನಡೆಯಿತು. ಯಾವುದೇ ಕಾರಣಕ್ಕೂ ಮಠಗಳ ಮೇಲೆ ಸರ್ಕಾರ ನಿಯಂತ್ರಣ ಹೇರಬಾರದು ಎಂದು ಶಾಸಕರು ಸಭೆಯಲ್ಲಿ ಒತ್ತಾಯಿಸಿದರು.[ಮಠ ನಿಯಂತ್ರಣ ವಿವಾದ : ಸಿದ್ದುಗೆ ಗುದ್ದು]












Click it and Unblock the Notifications