ಕಾರ್ಯಕರ್ತರು, ಅಭಿಮಾನಿಗಳಿಗೆ ಸಿದ್ದರಾಮಯ್ಯ ಮನವಿ ಏನು?
ಬೆಂಗಳೂರು, ಆಗಸ್ಟ್ 7 : 'ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವ ಸಂಸ್ಕೃತಿಯನ್ನು ನಾನು ರೂಢಿಸಿಕೊಂಡಿಲ್ಲ. ರಾಜ್ಯದಲ್ಲಿ ಸಂಭವಿಸಿರುವ ರೈತರ ಸರಣಿ ಆತ್ಮಹತ್ಯೆ ಪ್ರಕರಣಗಳು ನನ್ನಲ್ಲಿ ಅತೀವ ದುಃಖ ಉಂಟು ಮಾಡಿದೆ. ಇಂತಹ ಸಂದರ್ಭದಲ್ಲಿ ಯಾವುದೇ ಸಂಭ್ರಮಾಚರಣೆ ಬೇಡ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.
ಆಗಸ್ಟ್ 12ರ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 68 ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ರಾಜ್ಯದೆಲ್ಲೆಡೆ ಅದರಲ್ಲೂ ವಿಶೇಷವಾಗಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಬ್ಯಾನರ್, ಕಟೌಟ್, ಫ್ಲೆಕ್ಸ್‌ಗಳನ್ನು ಅಳವಡಿಸಲು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಈಗಾಗಲೇ ಸಿದ್ಧತೆ ನಡೆಸಿದ್ದಾರೆ. [67ನೇ ಹುಟ್ಟು ಹಬ್ಬದಂದು ಸಿದ್ದರಾಮಯ್ಯ ಏನು ಮಾಡಿದ್ರು?]

ಮುಖ್ಯಮಂತ್ರಿಗಳ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಈ ಮನವಿ ಮಾಡಿದ್ದಾರೆ. 'ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುವ ಸಂಸ್ಕೃತಿಯನ್ನು ನಾನೆಂದೂ ರೂಢಿಸಿಕೊಂಡವನಲ್ಲ' ಎಂದು ಅವರು ಸ್ಪಷ್ಟಪಡಿಸಿದ್ದಾರೆ.
'ರಾಜ್ಯದಲ್ಲಿ ಸಂಭವಿಸಿರುವ ರೈತರ ಸರಣಿ ಆತ್ಮಹತ್ಯೆ ಪ್ರಕರಣಗಳು ನನ್ನಲ್ಲಿ ಅತೀವ ದುಃಖ ಹಾಗೂ ನೋವನ್ನು ಉಂಟು ಮಾಡಿವೆ. ಇಂತಹ ಸಂದರ್ಭದಲ್ಲಿ ಯಾವುದೇ ಸಂಭ್ರಮಾಚರಣೆ ಬೇಡ. ನನ್ನ ಹುಟ್ಟು ಹಬ್ಬದ ಆಚರಣೆಯೂ ಬೇಡ' ಎಂದು ಮುಖ್ಯಮಂತ್ರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಬ್ಯಾನರ್, ಫ್ಲೆಕ್ಸ್‌ಗಳನ್ನು ಅಳವಡಿಸಬಾರದು. ಸಂಭ್ರಮಾಚರಣೆಗಳನ್ನು ಆಯೋಜಿಸಬಾರದು ಎಂದು ಸಿದ್ದರಾಮಯ್ಯ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.












Click it and Unblock the Notifications