SIR: ಕರ್ನಾಟಕದಲ್ಲಿ ವಿಶೇಷ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ: ಮಹತ್ವದ ಸೂಚನೆ ನೀಡಿದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್
SIR: ಕರ್ನಾಟಕದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದೆ. ಇದೀಗ ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ವಿ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಚುನಾವಣಾ ಆಯೋಗ ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಪಾರದರ್ಶಕತೆಯಿಂದ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆಸಲಾಗಿದೆ.
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision - SIR) ಕಾರ್ಯದ ಪ್ರಗತಿ ಪರಿಶೀಲನೆ ಸಂಬಂಧ ಜುಲೈ 27ರ ಸೋಮವಾರ ಅಪರ ಜಿಲ್ಲಾಧಿಕಾರಿಗಳು, ಬೆಂಗಳೂರು ಉತ್ತರ ವ್ಯಾಪ್ತಿಗೆ ಸಂಬಂಧಿಸಿದಂತೆ ವಿ. ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಆಯುಕ್ತರು, ಬೆಂಗಳೂರು ಉತ್ತರ ನಗರ ಪಾಲಿಕೆಯ ಪೊಮ್ಮಲ ಸುನೀಲ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ವಿ. ಅವರು, ವಿಧಾನಸಭಾ ಕ್ಷೇತ್ರವಾರು SIR ಪ್ರಗತಿ ಪರಿಶೀಲನೆ ಮಾಡಿ, ಎಲ್ಲಾ ವಿಧಾನ ಸಭಾ ಕ್ಷೇತ್ರದ ಪ್ರತಿ ಪೋಲಿಂಗ್ ಸ್ಟೇಷನ್ ವಾರು ಪ್ರಗತಿ ಪರಿಶೀಲಿಸುವುದಾಗಿ, ಸಾರ್ವಜನಿಕರಿಗೆ ಯಾವುದೇ ಅನಾನುಕೂಲವಾಗದಂತೆ ಹಾಗೂ ಯಾವುದೇ ನೈಜ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕತೆಯಿಂದ ನಿಗಧಿತ ಅವಧಿಯಲ್ಲಿ ಗುರಿ ತಲುಪಲು ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಮತದಾರರ ನೋಂದಣಾಧಿಕಾರಿಗಳಿಗೆ ವಿಧಾನಸಭಾ ಕ್ಷೇತ್ರವಾರು ಗುರುತಿಸಲಾದ ASDDO ಪಟ್ಟಿಯ ವಿವರವನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಪ್ರತಿನಿತ್ಯ ನೀಡಿ, ಸದರಿಯವರು ಏನಾದರೂ ಆಕ್ಷೇಪಣೆ / ಸಲಹೆಗಳನ್ನು ನೀಡಿದಲ್ಲಿ, ಪರಿಶೀಲಿಸಿ ನಿಯಮಾನುಸಾರ ಕ್ರಮ ವಹಿಸಲು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಕ್ಷೇತ್ರವಾರು ಸಭೆ ನಡೆಸಲು ಮತದಾರರ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
SIR: ಬೂತ್ ಮಟ್ಟದ ಅಧಿಕಾರಿಗಳಿಗೆ ಪ್ರಮುಖ ಸೂಚನೆ
ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ಕಾರ್ಯವನ್ನು ನಿಗಧಿತ ಗುರಿಯೊಂದಿಗೆ ಸಮರ್ಪಕವಾಗಿ ನಿರ್ವಹಿಸುವುದು ಹಾಗೂ ಅರ್ಜಿಗಳ ವಿಲೇವಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು. ಅಲ್ಲದೆ, ಮಾನ್ಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ ಕಾರ್ಯವನ್ನು ಸುಗಮ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಸಭೆಯಲ್ಲಿ ಜಂಟಿ ಮುಖ್ಯ ಚುನಾವಣಾಧಿಕಾರಿಗಳಾದ ಯೋಗೇಶ್ವರ್, ಅಪರ ಆಯುಕ್ತರು (ಕಂದಾಯ ಪ್ರಭಾರ) ಹಾಗೂ ಜಂಟಿ ಆಯುಕ್ತರಾದ ಪಲ್ಲವಿ, ಜಂಟಿ ಆಯುಕ್ತರಾದ ಮೊಹಮ್ಮದ್ ನಯೀಮ್ ಮೊಮಿನ್, ಮತದಾರ ನೋಂದಣಾಧಿಕಾರಿಗಳು (EROs), ಸಹಾಯಕ ಚುನಾವಣಾ ನೋಂದಣಾಧಿಕಾರಿಗಳು (AEROs) ಹಾಗೂ ಸಂಬಂಧಿತ ಅಧಿಕಾರಿಗಳು ಹಾಜರಿದ್ದರು.


Click it and Unblock the Notifications
