ಪ್ರಕಾಶ್ ರಾಜ್ ಮತದಾರರ ಪಟ್ಟಿಯಿಂದ ಔಟ್: ಹೆಸರು ಸ್ಥಳಾಂತರ ಪಟ್ಟಿಯಲ್ಲಿ; ಆಯುಕ್ತರಿಂದ ಸ್ಪಷ್ಟನೆ
ಬೆಂಗಳೂರು: ನಟ ಪ್ರಕಾಶ್ ರಾಜ್ ಅವರು ಈ ಹಿಂದೆ ವಾಸವಿದ್ದ ಮನೆಯಲ್ಲಿ ಈಗ ವಾಸವಿಲ್ಲದ ಕಾರಣ ಅವರ ಹೆಸರನ್ನು ಸ್ಥಳಾಂತರ ಪಟ್ಟಿಯಲ್ಲಿ ಸೇರಿಸಲಾಗಿದೆ. ಹೊಸದಾಗಿ ಫಾರ್ಮ್ 6ರಲ್ಲಿ ವಿವರಗಳನ್ನು ಭರ್ತಿ ಮಾಡಿ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು ಎಂದು ಕೇಂದ್ರ ಪಾಲಿಕೆ ಆಯುಕ್ತ ಜಿ ಜಗದೀಶ್ ಅವರು ತಿಳಿಸಿದ್ದಾರೆ.
ಬೆಂಗಳೂರು ನಗರ ವ್ಯಾಪ್ತಿಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR)ಯ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 56,99,660 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅದರಲ್ಲಿ 27,69,866 ಪುರುಷರು, 29,29,092 ಮಹಿಳೆಯರು ಹಾಗೂ 702 ಇತರೆ ಮತ್ತು ತೃತೀಯ ಲಿಂಗದ ಮತದಾರರು ಸೇರಿದಂತೆ ಒಟ್ಟು 56,99,660 ಮತದಾರರಿದ್ದಾರೆ ಎಂದು ಹೇಳಿದರು.

ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ ಬಳಿಕ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಇಂದಿನಿಂದ ಸೆಪ್ಟೆಂಬರ್ 23ರವರೆಗೆ ಅವಕಾಶವಿರಲಿದೆ. ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ನೋಟಿಸ್ ನೀಡುವುದು ಹಾಗೂ ವಿಲೇವಾರಿ ಪ್ರಕ್ರಿಯೆಯು ಇಂದಿನಿಂದ ಅಕ್ಟೋಬರ್ 22ರವರೆಗೆ ನಡೆಯಲಿದ್ದು, ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27, 2026ರಂದು ಪ್ರಕಟಿಸಲಾಗುವುದು ಎಂದು ತಿಳಿಸಿದರು.
ಕರಡು ಮತದಾರರ ಪಟ್ಟಿಯನ್ನು ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಅವರ ವ್ಯಾಪ್ತಿಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳ ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಪ್ರಕಟಿಸಲಾಗಿದ್ದು, ಸಾರ್ವಜನಿಕರಿಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ಕರಡು ಮತದಾರರ ಪಟ್ಟಿಯನ್ನು ಮುಖ್ಯ ಚುನಾವಣಾಧಿಕಾರಿ-ಕರ್ನಾಟಕ ಅವರ ಅಧಿಕೃತ ಜಾಲತಾಣ ಹಾಗೂ ಜಿಬಿಎ ಅಧಿಕೃತ ಜಾಲತಾಣದಲ್ಲಿ ಪರಿಶೀಲಿಸಿಕೊಳ್ಳುವ ಮೂಲಕ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತರಿಪಡಿಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಅವರ ವ್ಯಾಪ್ತಿಯಲ್ಲಿ 16ನೇ ಜೂನ್ 2026ರ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 1,03,88,363 ಮತದಾರರ ಪೈಕಿ 56,99,660 (54.87%) ಮತದಾರರ ಡಿಜಿಟಲೀಕರಣ ಮಾಡಲಾಗಿದೆ. ಈ ಪೈಕಿ 46,88,703 (45.13%) ನಾಪತ್ತೆ, ಸ್ಥಳಾಂತರ, ಮರಣ ಹೊಂದಿದ, ನಕಲು ಹಾಗೂ ಇತರೆ (ASDD) ಮತದಾರರನ್ನು ಗುರುತಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಮಾನ್ಯ ಮುಖ್ಯ ಚುನಾವಣಾಧಿಕಾರಿ-ಕರ್ನಾಟಕ ಅವರ ಜಾಲತಾಣ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಾಲತಾಣಗಳಲ್ಲಿ ಈ ಮಾಹಿತಿಯನ್ನು ಪ್ರಕಟಿಸಲಾಗಿರುತ್ತದೆ.
ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ಅವರ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಈ ಹಿಂದೆ 8,972 ಮತಗಟ್ಟೆಗಳಿದ್ದು, ಮತಗಟ್ಟೆಗಳ ಪುನರ್‌ವಿಂಗಡಣೆ (Rationalization of Polling Stations) ಕಾರ್ಯ ಮುಕ್ತಾಯಗೊಂಡ ನಂತರ 36 ಮತಗಟ್ಟೆಗಳನ್ನು ಹೆಚ್ಚಿಸಿ ಒಟ್ಟು 9,008 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು. 18 ವರ್ಷ ಮೇಲ್ಪಟ್ಟ ಯುವ ಮತದಾರರು ದಿನಾಂಕ 01.10.2026ಕ್ಕೆ ಅನ್ವಯವಾಗುವಂತೆ ನಮೂನೆ-6 ಅನ್ನು ಸಲ್ಲಿಸಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಅವಕಾಶ ಕಲ್ಪಿಸಲಾಗಿದೆ.


Click it and Unblock the Notifications
