ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ
ಬೆಂಗಳೂರು, ಸೆಪ್ಟೆಂಬರ್ 06 : 'ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಗೆ ವಹಿಸಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ರಾತ್ರಿ ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.
ಬುಧವಾರ ಬೆಳಗ್ಗೆ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಸಭೆಯಲ್ಲಿ ಹಾಜರಿದ್ದರು. ಸಭೆಯ ಬಳಿಕ ಮಾತನಾಡಿದ ಅವರು, 'ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವುದಿಲ್ಲ. ತನಿಖೆಗಾಗಿ ಎಸ್‌ಐಟಿ ರಚನೆ ಮಾಡಲಾಗಿದೆ' ಎಂದರು.

'ಐಜಿ ದರ್ಜೆಯ ಅಧಿಕಾರಿ ಎಸ್‌ಐಟಿ ನೇತೃತ್ವ ವಹಿಸಲಿದ್ದು ತನಿಖೆಯು ಅವರ ಉಸ್ತುವಾರಿಯಲ್ಲಿ ನಡೆಯಲಿದೆ. ತನಿಖಾ ತಂಡದಲ್ಲಿ ಯಾರು ಇರಬೇಕು? ಎಂಬುದನ್ನು ಅವರೇ ನಿರ್ಧರಿಸಲಿದ್ದಾರೆ. ಬೇಕಾಗುವ ಅಧಿಕಾರಿಗಳನ್ನು ತೆಗೆದುಕೊಳ್ಳಲು ಅವರಿಗೆ ಅವಕಾಶ ನೀಡಲಾಗಿದೆ' ಎಂದು ಸಿದ್ದರಾಮಯ್ಯ ಹೇಳಿದರು.
'ಹತ್ಯೆ ಪ್ರಕರಣದ ತನಿಖೆಗೆ ಈಗಾಗಲೇ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ಕರೆಗಳ ಪರಿಶೀಲನೆ ನಡೆಯುತ್ತಿದೆ. ಗೃಹ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಎಸ್‌ಐಟಿ ರಚನೆ ಮಾಡುವ ತೀರ್ಮಾನ ಕೈಗೊಳ್ಳಲಾಯಿತು' ಎಂದರು.
'ಎಂ.ಎಂ.ಕಲಬುರ್ಗಿ ಅವರ ಹತ್ಯೆಗಿಂತ ಗೌರಿ ಲಂಕೇಶ್ ಅವರ ಹತ್ಯೆ ಭಿನ್ನವಾಗಿದೆ. ಹಂತಕರು ಹೆಲ್ಮೆಟ್ ಧರಿಸಿದ್ದ ಎಂಬ ಮಾಹಿತಿ ಪ್ರಾಥಮಿಕವಾಗಿ ಲಭ್ಯವಾಗಿದೆ' ಎಂದು ಸಿದ್ದರಾಮಯ್ಯ ಹೇಳಿದರು.











Click it and Unblock the Notifications