ಲೋಕಸಭಾ ಚುನಾವಣೆ: ಮಾಜಿ ಸಿಎಂ ಎಸ್ ಎಂ ಕೃಷ್ಣ ಮೊಮ್ಮಗ ಸ್ಪರ್ಧೆ? ಯಾವ ಕ್ಷೇತ್ರದಿಂದ ಕಣಕ್ಕೆ
ಬೆಂಗಳೂರು, ಮಾರ್ಚ್ 01: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳನ್ನೂ ಶತಾಯಗತಾಯ ಗೆಲ್ಲಲೇಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಹಲವು ನಾಯಕರು ರೇಸ್ ನಲ್ಲಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಡಿ ವಿ ಸದಾನಂದಗೌಡ ಅವರು ಈಗಾಗಲೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಅಲ್ಲದೇ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದ್ದು, ಈ ಕ್ಷೇತ್ರದಿಂದ ಸ್ಪರ್ಧಿಸಿದರೆ ಗೆಲುವು ಸುಲಭ ಎಂದು ಹಲವು ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ.

ಇನ್ನೂ ಒಕ್ಕಲಿಗರ ಭದ್ರಕೋಟೆ, ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದ್ರೂ ಇಲ್ಲಿ ಸುಲಭವಾಗಿ ಕಮಲ ಗೆಲ್ಲಲಿದೆ. ಅಲ್ಲದೇ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬಳಿಕ ಘಟಾನುಘಟಿ ನಾಯಕರು ಟಿಕೆಟ್ ಗಾಗಿ ಫೈಪೋಟಿ ನಡೆಸಿದ್ದು, ಬಿಜೆಪಿ ಗೆಲುವಿನ ಕ್ಷೇತ್ರವೆಂದೇ ಹೆಸರಾಗಿರೋ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಹಲವರ ಹೆಸರುಗಳು ಕೇಳಿ ಬರುತ್ತಿವೆ. ಹಾಲಿ ಸಂಸದ ಶೋಭಾ ಕರಂದ್ಲಾಜೆ, ಸಿ ಟಿ ರವಿ, ಸಂಸದೆ ಸುಮಲತಾ ಸೇರಿದಂತೆ ಎಸ್‌ಎಂ ಕೃಷ್ಣ ಮೊಮ್ಮಗ ನಿರಂತರ ಗಣೇಶ್ ಹೆಸರು ಕೂಡ ರೇಸ್‌ನಲ್ಲಿದೆ.
ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಮೊಮ್ಮಗ ಹಾಗೂ ಬಿಜೆಪಿಯ ಯುವ ಮುಖಂಡರಾದ ನಿರಂತರ ಗಣೇಶ್ ಅವರ ಹೆಸರು ಮುನ್ನಲೆಗೆ ಬಂದಿದ್ದು,ಬಹುತೇಕ ಗಣೇಶ್ ಅವರಿಗೆ ಟಿಕೆಟ್ ಸಿಗಲಿದೆ ಎಂದು ಹೇಳಲಾಗಿದೆ. ಬೆಂಗಳೂರು ಉತ್ತರದಲ್ಲಿ ನಿರಂತರ ಗಣೇಶ್ ಗೆ ಟಿಕೆಟ್ ನೀಡುವಂತೆ ಸ್ಥಳೀಯ ನಾಯಕರು ಸಹ ಒತ್ತಾಯ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ನಡೆಸಿದ್ದಾರೆ. ಬಿಜೆಪಿ ಹಿರಿಯ ನಾಯಕರು ಹಾಗೂ ಸಂಘ ಪರಿವಾರದ ನಾಯಕರ ಜೊತೆಗೆ ನಿರಂತರ ಗಣೇಶ್ ಅವರು ಉತ್ತಮ ಸಂಬಂಧ ಹೊಂದಿದ್ದಾರೆ.

ನಿರಂತರ ಗಣೇಶ್ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಎಲ್ಲಾ ಸಮುದಾಯದ ಬೆಂಬಲ, ಸಂಘಟನೆ ಚತುರತೆ, ಕ್ಷೇತ್ರದಲ್ಲಿ ಜನರ ಒಲವು, ಒಕ್ಕಲಿಗರ ಭದ್ರಕೋಟೆ. ಈ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಯಾವುದೇ ಮುನಿಸಲಿಲ್ಲದೇ ಗೆಲುವು ಸಾಧಿಸುತ್ತಾರೆ ಎನ್ನುವ ಮಾತುಗಳು ಕೇಳಿ ಬಂದಿದೆ. ಅಲ್ಲದೇ ಮುಂದಿನ ತಲೆಮಾರಿನ ನಾಯಕರನ್ನು ಬೆಳೆಸುವ ದೃಷ್ಟಿಯಿಂದ ಹೈಕಮಾಂಡ್ ನಿರಂತರ ಗಣೇಶ್ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಸಹ ಬಿಜೆಪಿಯ ಕೆಲ ನಾಯಕರ ಜೊತೆಗೆ ಈ ವಿಚಾರವಾಗಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಉತ್ತರ ಕ್ಷೇತ್ರದ ಮೇಲೆ ಹಲವು ನಾಯಕರು ಕಣ್ಣು!
ಬಿಜೆಪಿಯ ಭದ್ರಕೋಟೆಯಾಗಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮೇಲೆ ಹಲವು ನಾಯಕರು ಕಣ್ಣೀಟ್ಟಿದ್ದು, ಚಿಕ್ಕಮಗಳೂರು ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಸಿಟಿ ರವಿ , ಹಾಲಿ ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಹಾಕಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಡಾ. ಕೆ ಸುಧಾಕರ್, ಬ್ಯಾಟರಾಯನಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್ ಸಿ ತಮೇಶ್ ಗೌಡ ಸೇರಿದಂತೆ ಹಲವು ನಾಯಕರು ಟಿಕೆಟ್ ಗಾಗಿ ಫೈಪೋಟಿ ನಡೆಸಿದ್ದು, ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ.












Click it and Unblock the Notifications