ರಾಜ್ಯಾದ್ಯಂತ ಮುಂಗಾರು ಚುರುಕು, ಕರಾವಳಿ ಭಾಗದಲ್ಲಿ ಭಾರಿ ಮಳೆ ನಿರೀಕ್ಷೆ
ಬೆಂಗಳೂರು, ಜುಲೈ 1: ರಾಜ್ಯಾದ್ಯಂತ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಒಂದು ವಾರದಿಂದ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ತಾಪ ಹೆಚ್ಚಾಗಿತ್ತು, ಉತ್ತರ ಒಳನಾಡಿನ ಹಲವೆಡೆ ಮಳೆಯಾಗುತ್ತಿತ್ತು.
ಇದೀಗ ಗುರುವಾರ ಬೆಳಗ್ಗೆಯಿಂದಲೇ ಎಲ್ಲೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲಿ ಮುಂಗಾರು ಮತ್ತಷ್ಟು ವೇಗ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಬಹುತೇಕ ಮೋಡಕವಿದ ವಾತಾವರಣವಿದ್ದು, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪ್ರವಾಹ ಭೀತಿ
ಹಲವು ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ, ಉತ್ತರ ಒಳನಾಡು, ಕಲ್ಯಾಣ ಕರ್ನಾಟಕದಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕ ಮಾತ್ರವಲ್ಲದೆ, ನೆರೆಯ ರಾಜ್ಯಗಳಲ್ಲೂ ಮಳೆಯಾಗುತ್ತಿದೆ.

ಉತ್ತರ ಒಳನಾಡಿನಲ್ಲಿ ಮಳೆ
ಉತ್ತರ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಇಂದು ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
Recommended Video

ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಕೂಡ ಇಂದು ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಸುರಿಯುತ್ತಿದೆ. ಮಲೆನಾಡಿನಲ್ಲೂ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ.












Click it and Unblock the Notifications