ರಾಜ್ಯದ ಕರಾವಳಿ, ಮಲೆನಾಡು ಸೇರಿ ಬಹುತೇಕ ಕಡೆ ಮಳೆ
ಬೆಂಗಳೂರು, ಜುಲೈ 03: ರಾಜ್ಯದ ಮಲೆನಾಡು, ಕರಾವಳಿ ಸೇರಿದಂತೆ ಬಹುತೇಕ ಕಡೆ ಮುಂದಿನ ಮೂರ್ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂಗಾರು ಆರಂಭದ ಒಂದು ವಾರ ಎಲ್ಲಾ ಜಿಲ್ಲೆಗಳಲ್ಲೂ ಸಾಕಷ್ಟು ಮಳೆಯಾಗಿತ್ತು, ಕ್ರಮೇಣ ಬಿಸಿಲು ಆರಂಭವಾಗಿ ಈಗ ದಿನಕ್ಕೆ ಒಂದೆರೆಡು ಮಳೆ ಸುರಿಯುತ್ತಿದೆ.
ಮುಂದಿನ ಮೂರ್ನಾಲ್ಕು ದಿನಗಳ ಕಾಲ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಇಂದು ಮಳೆಯಾಗಲಿದೆ.

ಜುಲೈ 5ರವರೆಗೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರು
ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲೂ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ಜುಲೈ 5ರವರೆಗೂ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿತ್ತು.

ಶಿವಮೊಗ್ಗದಲ್ಲಿ ಮಳೆ
ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.ಮಲೆನಾಡಿನಲ್ಲೂ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 5ರವರೆಗೆ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಮಳೆಯಾಗಿರುವ ಪ್ರದೇಶಗಳು
ಆಗುಂಬೆ, ಕೋಟ, ಮಂಕಿ, ಶಿರಾಲಿ, ಸಿದ್ದಾಪುರ, ಎಂಎಂ ಹಿಲ್ಸ್, ಕುಂದಾಪುರ, ಗೋಕರ್ಣ, ಪಣಂಬೂರು, ಪುತ್ತೂರು, ವಿಟ್ಲ, ಕದ್ರ, ಕೊಲ್ಲೂರು, ಶೃಂಗೇರಿ, ಬಂಗಾರಪೇಟೆ, ಬಂಟ್ವಾಳ, ಮುಲ್ಕಿ, ತಾಳಗುಪ್ಪ, ಬಂಗಾರಪೇಟೆ, ಕೊಲ್ಲೂರು, ಸಾಗರ, ಹುಂಚದಕಟ್ಟೆ, ಬಾದಾಮಿಯಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications