Sowmya Reddy: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಸೌಮ್ಯರೆಡ್ಡಿ
ಬೆಂಗಳೂರು,ಅಕ್ಟೋಬರ್ 18: ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷರಾಗಿ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದರು.
ಈ ವೇಳೆ ನೂತನ ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ಮಾತನಾಡಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನಾನು ಅಧಿಕಾರ ಸ್ವೀಕಾರ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಅಲ್ಕಾ ಲಂಬಾ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ.

ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಕನ್ನಡಿಗರಿಗೆ ಅದರಲ್ಲೂ ರಾಜ್ಯದ ಮಹಿಳೆಯರಿಗೆ ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಜಾರಿ ಸೇರಿದಂತೆ ಅನೇಕ ಉತ್ತಮವಾದ ಕೆಲಸ ಮಾಡುತ್ತಿದೆ.
ಶಕ್ತಿ ಯೋಜನೆಯಿಂದ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆ ಸ್ವಾಭಿಮಾನದಿಂದ ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾಳೆ. ಇನ್ನು ಗೃಹಲಕ್ಷ್ಮಿ ಯೋಜನೆಯಿಂದ ಗ್ರಾಮೀಣ ಭಾಗದ ಮಹಿಳೆಯರು ಹಳ್ಳಿಯಲ್ಲಿ ಗ್ರಂಥಾಲಯ ಆರಂಭಿಸಿದರೆ, ಮತ್ತೆ ಕೆಲವು ಮಗನಿಗೆ ಬೈಕ್ ಕೊಡಿಸಿದ್ದಾರೆ. ಮತ್ತೆ ಕೆಲವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುತ್ತಿದ್ದಾರೆ, ಗಂಡನ ಶಸ್ತ್ರ ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಕೆಲವು ಮಹಿಳೆಯರು ತಮ್ಮ ಮನೆಗೆ ಫ್ರಿಡ್ಜ್, ಟಿವಿ ಹಾಗೂ ಚಿನ್ನಾಭರಣ ಖರೀದಿ ಮಾಡುತ್ತಿದ್ದಾರೆ.
ಮಹಿಳೆಯರಿಗೆ ಆರ್ಥಿಕವಾಗಿ, ಸಾಮಾಜಿಕ ಹಾಗೂ ರಾಜಕೀಯವಾಗಿ ಸರಿಯಾದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 1984ರಲ್ಲಿ ಬೆಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಸ್ಥಾಪನೆ ಮಾಡಿದರು. 40 ವರ್ಷಗಳ ನಂತರ ಈ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸುತ್ತಿರುವುದು ನನ್ನ ಸೌಭಾಗ್ಯ.
ಈ ವೇಳೆ ಅಲ್ಕಾಲಂಬಾ ಅವರು ಮಾತನಾಡಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮಾಜಿ ಅದ್ಯಕ್ಷರುಗಳಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಸೌಮ್ಯ ರೆಡ್ಡಿ ಅವರನ್ನು ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕ ಮಾಡಿದ್ದಾರೆ. ಅವರು ಇಂದು ತಮ್ಮ ಪ್ರತಿಜ್ಞಾವಿಧಿ ಸ್ವೀಕರಿಸಿ ಹೊಸ ಜವಾಬ್ದಾರಿ ವಹಿಸಲಿದ್ದಾರೆ.
ನಾನು ಅಧಿಕಾರ ಸ್ವೀಕರಿಸಿ 9 ತಿಂಗಳಲ್ಲಿ ದೇಶದ 18 ರಾಜ್ಯಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪ್ರವಾಸ ಮಾಡಿ ಮಹಿಳಾ ಕಾಂಗ್ರೆಸ್ ಸಂಘಟನೆ ಮಾಡುತ್ತಿದ್ದೇನೆ. ಸೆಪ್ಟೆಂಬರ್ ತಿಂಗಳಲ್ಲಿ ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನದಂದು ರಾಷ್ಟ್ರವ್ಯಾಪಿ ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಆರಂಭಿಸಿದೆವು. ಈ ಅಭಿಯಾನದಲ್ಲಿ ಒಂದೇ ತಿಂಗಳಲ್ಲಿ 2.50 ಲಕ್ಷ ಮಹಿಳೆಯರು ಆನ್ಲೈನ್ ಮೂಲಕ ಸದಸ್ಯತ್ವ ಪಡೆದಿದ್ದಾರೆ. ತೆಲಂಗಾಣದಲ್ಲಿ 50 ಸಾವಿರ ಮಹಿಳೆಯರು ಸದಸ್ಯತ್ವ ಪಡೆದಿದ್ದು, ಕರ್ನಾಟಕದಲ್ಲಿ 30 ಸಾವಿರ ಮಹಿಳೆಯರು ಮಹಿಳಾ ಕಾಂಗ್ರೆಸ್ ಸದಸ್ಯತ್ವ ಪಡೆದಿದ್ದಾರೆ.
ಈ ಎರಡೂ ರಾಜ್ಯಗಳಲ್ಲಿ ಜನರು ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿರುವುದರಿಂದ ಮಹಿಳೆಯರು ಕಾಂಗ್ರೆಸ್ ನತ್ತ ಒಲವು ತೋರಿ ಸದಸ್ಯತ್ವ ಪಡೆಯುತ್ತಿದ್ದಾರೆ. ಈ ಅಭಿಯಾನ ಮುಂದುವರಿಯಲಿದ್ದು, ದೇಶದಲ್ಲಿ ಈ ವರ್ಷದೊಳಗೆ 10 ಲಕ್ಷ ಸದಸ್ಯತ್ವ ಸಾಧಿಸುವ ಗುರಿ ಹೊಂದಿದ್ದೇವೆ. ಆಮೂಲಕ ಮಹಿಳೆಯರು ರಾಜಕೀಯ ನ್ಯಾಯ ಪಡೆಯುವ ಹೋರಾಟದಲ್ಲಿ ಭಾಗಿಯಾಗುವಂತೆ ಮಾಡುತ್ತಿದ್ದೇವೆ.












Click it and Unblock the Notifications