Spandana Raghavendra Death: ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನ; ಸಿದ್ದರಾಮಯ್ಯ ಸಂತಾಪ
ಬೆಂಗಳೂರು, ಆಗಸ್ಟ್ 07: ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರು ಧರ್ಮಪತ್ನಿ ಸ್ಪಂದನಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟ್ವೀಟರ್ ಮೂಲಕ ಸಂತಾಪ ಸೂಚಿಸಿರುವ ಅವರು, ಕನ್ನಡದ ಖ್ಯಾತ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಸ್ಪಂದನಾ ಅವರ ಅಗಲಿಕೆಯಿಂದ ನೊಂದಿರುವ ವಿಜಯ ರಾಘವೇಂದ್ರ ಹಾಗೂ ಬಿ.ಕೆ ಶಿವರಾಂ ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇನ್ನೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಂತಾಪ ಸೂಚಿಸಿದ್ದು, ಕನ್ನಡ ಚಿತ್ರನಟ ವಿಜಯ ರಾಘವೇಂದ್ರ ಅವರ ಪತ್ನಿ ಶ್ರೀಮತಿ ಸ್ಪಂದನಾ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಆಘಾತ ತಂದಿದೆ ಎಂದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ದೇವರು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಮೃತರ ಕುಟುಂಬದವರಿಗೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
ಸ್ಪಂದನಾ ನಿಧನಕ್ಕೆ ಸಚಿವ ದಿನೇಶ್ ಗುಂಡೂರಾವ್ ಸಂತಾಪ ಸೂಚಿಸಿದ್ದು, ನಟ ವಿಜಯ ರಾಘವೇಂದ್ರರವರ ಧರ್ಮಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಆಘಾತವಾಗಿದೆ. ಅತಿ ಸಣ್ಣ ವಯಸ್ಸಿಗೆ ಆಗುವ ಹೃದಯಾಘಾತದ ದುರ್ಘಟನೆಗಳು ನನ್ನ ಮನಸ್ಸನ್ನು ವಿಚಲಿತಗೊಳಿಸಿವೆ.ಸ್ಪಂದನಾರವರ ಸಾವು ಅನಿರೀಕ್ಷಿತ. ವಿಜಯ್ ರಾಘವೇಂದ್ರ ಕುಟುಂಬದ ಶೋಕದಲ್ಲಿ ನಾನೂ ಭಾಗಿ ಎಂದು ಸಂತಾಪ ಸೂಚಿಸಿದ್ದಾರೆ.
ಇನ್ನೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದು, ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಆ ದೇವರು ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ. ನಟ ವಿಜಯ ರಾಘವೇಂದ್ರ ಹಾಗೂ ಬಿ.ಕೆ. ಶಿವರಾಮ್ ಕುಟುಂಬಕ್ಕೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications